ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ತಡೆಗಟ್ಟುವ ನಿಟ್ಟಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳ ತಂಡ ಶುಕ್ರವಾರ ಕಾರ್ಯಾಚರಣೆ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ 56 ಅಂಗಡಿಗಳಿಗೆ ನೋಟಿಸ್ ನೀಡಿದೆ, 16 ಅಂಗಡಿಗಳ ಮೇಲೆ ಪ್ರಕರಣ ದಾಖಲಿಸಿದೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ತಡೆಗಟ್ಟುವ ನಿಟ್ಟಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ತಾಲೂಕು ಮಟ್ಟದ ವಿವಿಧ ಅಧಿಕಾರಿಗಳ ತಂಡ ಶುಕ್ರವಾರ ಕಾರ್ಯಾಚರಣೆ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ 56 ಅಂಗಡಿಗಳಿಗೆ ನೋಟಿಸ್ ನೀಡಿದೆ, 16 ಅಂಗಡಿಗಳ ಮೇಲೆ ಪ್ರಕರಣ ದಾಖಲಿಸಿದೆ.

ಬಾಗಲಕೋಟೆ ನಗರದ ನವನಗರದ ಬಸ್ ನಿಲ್ದಾಣ ವ್ಯಾಪ್ತಿಯಲ್ಲಿ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾ ಅಂಕಿತ ಅಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರ ನೇತೃತ್ವದಲ್ಲಿ ನಡೆದ ತಪಾಸಣೆಯಲ್ಲಿ ಬೇಕರಿ ಅಂಗಡಿಗಳಲ್ಲಿನ ಆಹಾರ ಪದಾರ್ಥಗಳ ಗುಣಮಟ್ಟ, ಅವಧಿ, ಸಂಗ್ರಹಣೆ ಹಾಗೂ ಎಫ್ಎಸ್ಎಸ್ಎಐ ಪರವಾನಗಿ ಸೇರಿದಂತೆ ವಿವಿಧ ಅಂಶಗಳನ್ನು ಪರಿಶೀಲಿಸಲಾಯಿತು.

ಈ ವೇಳೆ ಲೈಸೆನ್ಸ್ ಪಡೆಯದೇ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಲಾಯಿತು. ಪರಿಶೀಲನೆಯಲ್ಲಿ ಅವಧಿ ಮೀರಿದ (ಎಕ್ಸ್ಪೈರ್) ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿರುವುದು ಪತ್ತೆಯಾಗಿದ್ದು, ಸಂಬಂಧಿಸಿದ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅಧಿಕಾರಿಗಳು ಸೂಚಿಸಿದರು. ನಿಯಮ ಉಲ್ಲಂಘಿಸಿದ ಹಲವು ಬೇಕರಿ ಅಂಗಡಿಗಳಿಗೆ ದಂಡ ವಿಧಿಸಿ, ಪ್ರಕರಣ ದಾಖಲಿಸುವ ಕ್ರಮ ಕೈಗೊಳ್ಳಲಾಯಿತು. ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಜಮಖಂಡಿ ಉಪವಿಭಾಗ ವ್ಯಾಪ್ತಿಯ ತಾಲೂಕುಗಳಲ್ಲಿ ಸಹ ಜಂಟಿ ತಂಡ ಕಾರ್ಯಾಚರಣೆ ನಡೆಸಲಾಯಿತು.

ಜಿಲ್ಲೆಯಾದ್ಯಂತ 72 ಅಂಗಡಿಗಳ ತಪಾಸಣೆ

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ವತಿಯಿಂದ ಎಫ್ಎಸ್ಎಸ್ಎಐ ಕಾಯ್ದೆಯನ್ವಯ ಜಿಲ್ಲೆಯ ಬಾಗಲಕೋಟೆ, ಬಾದಾಮಿ, ಮುಧೋಳ, ಜಮಖಂಡಿ ಹಾಗೂ ಹುನಗುಂದ ತಾಲೂಕುಗಳಲ್ಲಿ ಒಟ್ಟು 72 ಅಂಗಡಿಗಳ ತಪಾಸಣೆ ನಡೆಸಲಾಗಿದೆ. ಈ ಪೈಕಿ 59 ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, 40 ಹೋಟೆಲ್, 23 ಬೇಕರಿ ಹಾಗೂ 9 ಇತರೆ ಆಹಾರ ಸಂಸ್ಥೆಗಳನ್ನು ಪರಿಶೀಲಿಸಲಾಗಿದೆ. 15 ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, 21 ಮೊಕದ್ದಮೆ ದಾಖಲಿಸಲಾಗಿದೆ.

ಬಾಗಲಕೋಟೆ ತಾಲೂಕಿನಲ್ಲಿ 25, ಬಾದಾಮಿ- 18, ಮುಧೋಳ-4, ಜಮಖಂಡಿ- 6 ಹಾಗೂ ಹುನಗುಂದ ತಾಲೂಕಿನಲ್ಲಿ17 ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ.

ಆಹಾರ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಂಗಡಿ ಮಾಲೀಕರಿಗೆ ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದು, ಪರವಾನಗಿ ಇಲ್ಲದೆ ಆಹಾರ ವ್ಯಾಪಾರ ನಡೆಸುವುದು, ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ ಮಾಡುವುದು ಹಾಗೂ ಆಹಾರ ಸುರಕ್ಷತಾ ಮಾನದಂಡ ಉಲ್ಲಂಘಿಸುವವರ ವಿರುದ್ಧ ನಿರಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ನಡೆದ ದಾಳಿ ವೇಳೆ ತಹಸೀಲ್ದಾರ್ ವಾಸುದೇವ ಸ್ವಾಮಿ, ನಗರಸಭೆ ಪೌರಾಯುಕ್ತ ಎಂ.ಎಂ. ಸಾರವಾನ ಹಾಗೂ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ ಸಾಳಗುಂದಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.