ರಾಜ್ಯದಲ್ಲಿ 108-ಆ್ಯಂಬುಲೆನ್ಸ್ ಸೇವೆಯನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆಯಿಂದಲೇ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು : ರಾಜ್ಯದಲ್ಲಿ 108-ಆ್ಯಂಬುಲೆನ್ಸ್ ಸೇವೆಯನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆಯಿಂದಲೇ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಆ್ಯಂಬುಲೆನ್ಸ್‌ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ. ಅದರಂತೆ ಖಾಸಗಿ ಪಾಲುದಾರರಾದ ಜಿವಿಕೆ-ಇಎಂಆರ್‌ಐ ಸಂಸ್ಥೆಯಿಂದ ನಿರ್ವಹಣೆ ಹಿಂಪಡೆದಿದ್ದು, 108 ಆ್ಯಂಬುಲೆನ್ಸ್‌ನ ಕಮಾಂಡ್‌ ಮತ್ತು ಕಂಟ್ರೋಲ್‌ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸಲಾಗಿದೆ.

ಈ ಕೇಂದ್ರದ ನಿರ್ವಹಣೆಗೆ ಕೇಂದ್ರದ 112 ಎನ್‌ಜಿ-ಇಆರ್‌ಎಸ್‌ಎಸ್‌ ತಂತ್ರಾಂಶ ಬಳಸಿಕೊಳ್ಳಲು ತೀರ್ಮಾನಿಸಿದ್ದು, ಒಟ್ಟಾರೆ ಆರೋಗ್ಯ ಇಲಾಖೆಯಡಿ ಕಮಾಂಡ್‌ ಮತ್ತು ಕಂಟ್ರೋಲ್‌ ಅನ್ನು ಐದು ವರ್ಷಗಳ ಅವಧಿಗೆ ಸ್ಥಾಪಿಸಲು ಕೆಟಿಟಿಪಿ ಕಾಯ್ದೆ ಕಲಂ 4(ಜಿ) ಅಡಿ ವಿನಾಯ್ತಿಗೆ ಪ್ರತ್ಯೇಕವಾಗಿ ಪ್ರಸ್ತಾವನೆ ಸಲ್ಲಿಸಲು ಆದೇಶ ಮಾಡಿದೆ.250 ಕೋಟಿ ರು. ಉಳಿತಾಯ-ದಿನೇಶ್:

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸರ್ಕಾರದ ಕ್ರಮದಿಂದ 108 ಆರೋಗ್ಯ ಕವಚ ಸೇವೆಯಲ್ಲಿ ಸಾಕಷ್ಟು ಸುಧಾರಣೆಯಾಗುವ ವಿಶ್ವಾಸವಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಸುಮಾರು 250 ಕೋಟಿಯಷ್ಟು ಉಳಿತಾಯವಾಗಲಿದೆ.

108 ಅಧೀನದಲ್ಲಿರುವ ಒಟ್ಟು 715 ಆ್ಯಂಬುಲೆನ್ಸ್‌ ನಿರ್ವಹಣೆಗಾಗಿ ರಾಜ್ಯಮಟ್ಟದಲ್ಲಿ ಕಮಾಂಡ್ ಕಂಟ್ರೋಲ್ ಸೆಂಟರ್ ತೆರೆಯಲಾಗುವುದು. ಆರಂಭದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ನಿರ್ವಹಣೆ ಪ್ರಾರಂಭಿಸಲಾಗುತ್ತಿದೆ. ನಂತರದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿರ್ವಹಣೆ ಕಾರ್ಯ ಆರಂಭವಾಗಲಿದೆ. ಅಲ್ಲದೆ, 108 ಹೊರತಾಗಿ ರಾಜ್ಯದಲ್ಲಿರುವ 1000ಕ್ಕೂ ಹೆಚ್ಚು ರಾಜ್ಯ ಆ್ಯಂಬುಲೆನ್ಸ್‌ಗಳನ್ನು ಕೂಡಾ 108 ಕಮಾಂಡ್ ಸೆಂಟರ್ ಅಧೀನಕ್ಕೆ ತರಲು ಯೋಜನೆ ರೂಪಿಸಲಾಗಿದೆ ಎಂದಿದ್ದಾರೆ.

ರಾಜ್ಯಮಟ್ಟದಲ್ಲಿ ಸರ್ಕಾರಿ ಸ್ವಾಮ್ಯದ ಕಮಾಂಡ್‌ ಮತ್ತು ಕಂಟ್ರೋಲ್‌ ಕೇಂದ್ರ ಹಾಗೂ ಜಿಲ್ಲಾಮಟ್ಟದಲ್ಲಿ ಜಿಲ್ಲಾ ಕಂಟ್ರೋಲ್‌ ಸೆಂಟರ್‌ ಸ್ಥಾಪಿಸಲು ತೀರ್ಮಾನಿಸಲಾಗಿದೆ. ಇದನ್ನು ಕರ್ನಾಟಕ ಸ್ಟೇಟ್ ಡೇಟಾ ಸೆಂಟರ್ ಮತ್ತು ಕರ್ನಾಟಕ ಸ್ಟೇಟ್‌ವೈಡ್‌ ಏರಿಯಾ ನೆಟ್‌ವರ್ಕ್ ಬಳಸಿಕೊಂಡು ಅನುಷ್ಠಾನಗೊಳಿಸಬೇಕು. ಜಿಲ್ಲಾ ಕಮಾಂಡ್‌ ಆ್ಯಂಡ್‌ ಕಂಟ್ರೋಲ್‌ ಸೆಂಟರ್‌ಗಳು ಮತ್ತು ಆ್ಯಂಬುಲೆನ್ಸ್‌ಗಳ ದೈನಂದಿನ ನಿರ್ವಹಣೆ ಮೇಲ್ವಿಚಾರಣೆ ಮತ್ತು ಪರಿವೀಕ್ಷಣೆ ಜವಾಬ್ದಾರಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ವಹಿಸಬೇಕು. ಆ್ಯಂಬುಲೆನ್ಸ್‌ ಚಾಲಕರು, ಶುಶ್ರೂಷಕ ಸಿಬ್ಬಂದಿಯನ್ನು ಜಿಲ್ಲಾ ಮಟ್ಟದಲ್ಲೇ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸುವಂತೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.