ಸಾರಾಂಶ
ಶಿವಮೊಗ್ಗ ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ಪ್ರಥಮ ವರ್ಷದ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸಾರ್ವಜನಿಕರ ಸೇವೆಯ ಮೂಲಕ ಅಭಿವೃದ್ಧಿಗೊಳಿಸುವಲ್ಲಿ ಎನ್‌ಎಸ್‌ಎಸ್ ಪಾತ್ರ ಮುಖ್ಯವಾದದ್ದು ಎಂದು ಕುವೆಂಪು ವಿಶ್ವ ವಿದ್ಯಾಲಯದ ನಿಕಟಪೂರ್ವ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಪರಿಸರ ನಾಗರಾಜ್ ಹೇಳಿದರು.ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಶನಿವಾರ ಪ್ರಥಮ ವರ್ಷದ ಎನ್‌ಎಸ್‌ಎಸ್ ಸ್ವಯಂ ಸೇವಕರಿಗೆ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎನ್‌ಎಸ್‌ಎಸ್ ಬದುಕು ಕಟ್ಟಿಕೊಡುವಲ್ಲಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಲು ಸಹಾಯಕವಾಗುತ್ತದೆ. ಎನ್‌ಎಸ್‌ಎಸ್ ಸೇರಿದ ಮೇಲೆ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಉದ್ಯೋಗ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವಕಾಶಗಳು ಕೂಡ ಲಭಿಸುತ್ತವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಬೇಕು ಎಂದು ತಿಳಿಸಿದರು.ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯ್‌ಕುಮಾರ್ ಮಾತನಾಡಿ, ಎನ್‌ಎಸ್‌ಎಸ್ ಧೈರ್ಯ ಹಾಗೂ ಆತ್ಮಬಲ ಹೆಚ್ಚಿಸುತ್ತದೆ. ಅದರಲ್ಲೂ ಗ್ರಾಮೀಣ ಪ್ರದೇಶದವರಿಗೆ ಹೊಸ ಲೋಕವನ್ನೇ ಸೃಷ್ಟಿ ಮಾಡುತ್ತದೆ. ಸಾಮರಸ್ಯ, ಸೇವಾ ಭಾವನೆಯನ್ನು ಕಲಿಸುತ್ತದೆ ಎಂದು ಹೇಳಿದರು.
ಹಿರಿಯ ಪತ್ರಕರ್ತ ಆರುಂಡಿ ಶ್ರೀನಿವಾಸ ಮೂರ್ತಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಎನ್‌ಎಸ್‌ಎಸ್ ಗುಣಗಳು ಇದ್ದೇ ಇರುತ್ತವೆ. ಅವುಗಳನ್ನು ಮತ್ತಷ್ಟು ವಿಸ್ತರಿಸಕೊಳ್ಳಬೇಕು ಅಷ್ಟೇ ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಜೋತು ಬೀಳದೆ ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.ಎನ್‌ಎಸ್‌ಎಸ್ ಅಧಿಕಾರಿ ಪ್ರೊ.ಕೆ.ಎಂ.ನಾಗರಾಜ್ ಮಾತನಾಡಿ, ಎನ್‌ಎಸ್‌ಎಸ್ ನಿಂದ ಸಾವಿರಾರು ವಿದ್ಯಾರ್ಥಿಗಳ ಬದುಕು ಹಸನಾಗಿದೆ. ಇದು ಉದ್ಯೋಗ ಪಡೆದುಕೊಳ್ಳುವಲ್ಲಿಯೂ ಸಹಾಯಕವಾಗುತ್ತದೆ ಎಂದು ತಿಳಿಸಿದರು.
ಪ್ರಾಂಶುಪಾಲರಾದ ಪ್ರೊ.ಮಮತಾ ಪಿ.ಆರ್. ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅನುಜ್ಞಾ ಸ್ವಾಗತಿಸಿದರು. ಜ್ಞಾನಿ ವಂದಿನಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.