ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಅಡ್ಡಿ: ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

| Published : Jan 24 2024, 02:03 AM IST

ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಅಡ್ಡಿ: ಬಿಜೆಪಿ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿರುವುದನ್ನು ಖಂಡಿಸಿ ಮಂಗಳವಾರ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

- ಅಸ್ಸಾಂನಲ್ಲಿ ಯಾತ್ರೆಗೆ ಅಡ್ಡಿ, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಪ್ರತಿಭಟನೆ । ಬಿಜೆಪಿ ವಿರುದ್ಧ ಆಕ್ರೋಶ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಅಸ್ಸಾಂ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿರುವುದನ್ನು ಖಂಡಿಸಿ ಮಂಗಳವಾರ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ತಾಲೂಕು ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಕಾರ್ಯಕರ್ತರು ಹನುಮಂತಪ್ಪ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಚ್‌.ಡಿ. ತಮ್ಮಯ್ಯ, ರಾಹುಲ್‌ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆ ಅಸ್ಸಾಂನಲ್ಲಿ ಸಾಗುತ್ತಿದ್ದಾಗ ರಾಹುಲ್‌ಗಾಂಧಿಯವರ ಜನಪ್ರಿಯತೆಯನ್ನು ಸಹಿಸದೇ ಬಿಜೆಪಿ ಕಾರ್ಯಕರ್ತರು ತಡೆ ಒಡ್ಡಿ ಹಲ್ಲೆಗೆ ಯತ್ನ ನಡೆಸಿರುವುದನ್ನು ಖಂಡಿಸಿದರು.

ದೇಶದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರ ಆಯೋಜಿಸಿದ್ದು, ಇದನ್ನು ಬೆಂಬಲಿಸಿ ರಾಜ್ಯ ಸರ್ಕಾರ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಭಕ್ತಿ ಪ್ರಧಾನ ಮಾಡಿದ್ದು, ಇಂತಹ ಸಂದರ್ಭದಲ್ಲಿ ಅಸ್ಸಾಂ ರಾಜ್ಯದಲ್ಲಿ ರಾಹುಲ್‌ಗಾಂಧಿಯವರ ದೇವಾಲಯ ಪ್ರವೇಶಕ್ಕೆ ಅಡ್ಡಿಪಡಿಸಿರುವುದು ವಿಷಾಧನೀಯ ಎಂದರು.

ಯಾವ ದೇವಸ್ಥಾನಕ್ಕಾಗಲೀ ಯಾತ್ರೆ ಮಾಡುವುದಕ್ಕಾಗಲೀ ತಡೆಯಬಾರದೆಂಬ ನಿಯಮವಿದ್ದರೂ ಅಲ್ಲಿನ ಅಸ್ಸಾಂ ರಾಜ್ಯ ಸರ್ಕಾರ ಯಾತ್ರೆ ತಡೆಯುವ ಕೆಲಸಕ್ಕೆ ಮುಂದಾಗಿರುವುದು ಸಾಮಾನ್ಯ ಜ್ಞಾನವೂ ಇಲ್ಲ ಎಂದು ಟೀಕಿಸಿದರು.

ರಾಹುಲ್‌ಗಾಂಧಿಯವರು ಅತ್ಯಂತ ಸರಳ ಸಜ್ಜನ ವ್ಯಕ್ತಿಯಾಗಿದ್ದು, ಸಾಮಾನ್ಯ ಪ್ರಜೆಗಳ ಬಳಿ ತೆರಳಿ ಸಾಮಾನ್ಯ ಮಕ್ಕಳನ್ನೂ ಪ್ರೀತಿಯಿಂದ ಮುದ್ದಾಡುವ ತಾಯಿ ಹೃದಯ ಇರುವ ದೇಶದ ಹೆಮ್ಮೆಯ ಪುತ್ರ ಎಂದು ಹೇಳಿದರು.

ಇದೇ ವರ್ತನೆಯನ್ನು ಬಿಜೆಪಿ ಮುಂದುವರೆಸಿದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸುತ್ತಾರೆಂದು ಎಚ್ಚರಿಸಿದರು.

ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಮಾತನಾಡಿ, ಸಂಸದ ರಾಹುಲ್‌ಗಾಂಧಿಯವರ ಜನಪರವಾದ ಹೋರಾಟ ಮತ್ತು ಜನರ ಸಮಸ್ಯೆಗಳನ್ನು ಕೇಂದ್ರ ಸರ್ಕಾರದ ಗಮನ ಸೆಳೆಯಲು ಭಾರತ್‌ ಜೋಡೋ ನ್ಯಾಯ ಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯದಲ್ಲಿ ಜನರ ಅಭೂತಪೂರ್ವ ಬೆಂಬಲ, ಹಿಂದುಳಿದ, ದಲಿತ, ಅಲ್ಪಸಂಖ್ಯಾತರು ಒಗ್ಗೂಡುತ್ತಿರುವುದನ್ನು ಸಹಿಸಲಾಗದೆ ದಿಕ್ಕೆಟ್ಟಿರುವ ಕೇಂದ್ರದ ಬಿಜೆಪಿ ಸರ್ಕಾರ ಹಿಂದುತ್ವವನ್ನು ಗುತ್ತಿಗೆ ಪಡೆದುಕೊಂಡಂತೆ ವರ್ತಿಸಿರುವುದು ಖಂಡನೀಯ ಎಂದರು.

ಇತಿಹಾಸ ಪ್ರಸಿದ್ದ ದೇವಾಲಯ ಒಂದಕ್ಕೆ ಭೇಟಿ ನೀಡಿ ರಾಹುಲ್‌ಗಾಂಧಿ ದೇವರ ದರ್ಶನಕ್ಕೆ ಮುಂದಾದಾಗ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿ ಹಲ್ಲೆ ಯತ್ನ ಮಾಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆ ಕಗ್ಗೊಲೆಯಾಗಿದೆ. ರಾಹುಲ್‌ ಗಾಂಧಿಯವರ ರಕ್ಷಣೆ ಮತ್ತು ದೇವಸ್ಥಾನ ಪ್ರವೇಶಕ್ಕೆಅನುಮತಿ ನಿರಾಕರಿಸಿರುವುದು ಅಸ್ಸಾಂ ರಾಜ್ಯದಲ್ಲಿ ಗೂಂಡಾ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ದೇವಾಲಯ, ಚರ್ಚ್, ಮಸೀದಿಗಳಿಗೆ ಪ್ರವೇಶ ಮುಕ್ತವಾಗಿದ್ದರೂ ಸೋಮವಾರ ನಡೆದ ರಾಮಲಲ್ಲಾ ಪ್ರತಿಷ್ಠಾಪನೆ ಸಂದರ್ಭದಲ್ಲಿ ಬಿಜೆಪಿ ತನ್ನ ಪಕ್ಷಕ್ಕೆ ಸೀಮಿತವೆಂಬಂತೆ ವರ್ತಿಸಿ, ರಾಹುಲ್‌ಗಾಂಧಿಯವರನ್ನು ತಡೆಯುವ ಪ್ರಯತ್ನ ಮಾಡಿರುವುದು ಸರಿಯಲ್ಲ. ಇದಕ್ಕೆ ಕಾಂಗ್ರೆಸ್ ಪಕ್ಷ ಜಗ್ಗುವುದಿಲ್ಲ, ರಾಹುಲ್‌ಗಾಂಧಿಯವರ ಹೋರಾಟದ ಪರವಾಗಿ ಭಾರತದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರು ಇದ್ದಾರೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಾ.ಡಿ.ಎಲ್. ವಿಜಯ್‌ಕುಮಾರ್ ಮಾತನಾಡಿ, ರಾಷ್ಟ್ರಪಿತ ಮಹಾತ್ಮಗಾಂಧಿಯವರು ಸ್ವಾತಂತ್ರ್ಯ ಹೋರಾಟದ ಮೂಲಕ ಜನರ ಸಮಸ್ಯೆಗಳನ್ನು ಪರಿಹರಿಸಿದ ಮಾದರಿಯಲ್ಲಿ ರಾಹುಲ್‌ಗಾಂಧಿಯವರು ಭಾರತ್‌ ಜೋಡೋ ನ್ಯಾಯ ಯಾತ್ರೆ ಮೂಲಕ ಜನಸಾಮಾನ್ಯರ ಸಮಸ್ಯೆಗಳನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲು ಮುಂದಾಗಿರುವುದನ್ನು ಸಹಿಸದ ಬಿಜೆಪಿ ಇಂತಹ ಹೀನ ಕೃತ್ಯಕ್ಕೆ ಇಳಿದಿದೆ ಎಂದು ಟೀಕಿಸಿದರು.

ರಾಹುಲ್‌ಗಾಂಧಿಯವರು ದೇವಸ್ಥಾನ ಪ್ರವೇಶಕ್ಕೆ ಮುಂದಾದಾಗ ತಡೆ ಒಡ್ಡಿ ನಿರ್ಬಂಧ ವಿಧಿಸಿದ್ದಾರೆ. ಇದಕ್ಕೆಲ್ಲ ಕಾಂಗ್ರೆಸ್ ಪಕ್ಷ ಜಗ್ಗುವುದಿಲ್ಲ. ಬಿಜೆಪಿ ವಿರುದ್ಧ ಹೋರಾಟ ಮುಂದುವರೆಸುತ್ತೇವೆ ಎಂದು ಎಚ್ಚರಿಸಿದ ಅವರು, ರಾಹುಲ್‌ ಗಾಂಧಿಯವರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಪಿ. ಮಂಜೇಗೌಡ, ಮಹಡಿಮನೆ ಸತೀಶ್, ಬಿ.ಎಚ್ ಹರೀಶ್, ಮಹಿಳಾ ಘಟಕದ ಅಧ್ಯಕ್ಷೆ ಸೌಂದರ್ಯ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ. ಶಿವಾನಂದಸ್ವಾಮಿ, ನಗರಾಧ್ಯಕ್ಷ ತನೂಜ್‌ಕುಮಾರ್, ಮಾಜಿ ಸಿಡಿಎ ಅಧ್ಯಕ್ಷ ಸೈಯದ್ ಹನೀಫ್, ಸಿ.ಸಿ. ಮಧು, ಕೆ. ಭರತ್‌, ಹಿರೇಮಗಳೂರು ರಾಮಚಂದ್ರ, ಸೋಮಶೇಖರ್‌ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. 23 ಕೆಸಿಕೆಎಂ 1

ಅಸ್ಸಾಂನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಅಡ್ಡಿಪಡಿಸಿರುವುದನ್ನು ಖಂಡಿಸಿ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.