ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವುದರ ಮುಖಾಂತರ ಸಾವಿರಾರು ಕೋಟಿ ರು. ಗಳನ್ನು ಖರ್ಚು
ಕನ್ನಡಪ್ರಭ ವಾರ್ತೆ ಮೈಸೂರುವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಿ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಶಿಕ್ಷಕರು ಸೂರ್ಯನಂತೆ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ತಿಳಿಸಿದರು.ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ದಕ್ಷಿಣ ವಲಯ ವತಿಯಿಂದ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯಲ್ಲಿ ನಡೆದ 2025-26ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವುದರ ಮುಖಾಂತರ ಸಾವಿರಾರು ಕೋಟಿ ರು. ಗಳನ್ನು ಖರ್ಚು ಮಾಡುತ್ತಿದ್ದು, ಅಧಿಕಾರಿಗಳು, ಶಿಕ್ಷಕರು ಇದರ ಸದುಪಯೋಗ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು, ಇಂದು ದೇಶದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವವರೆಲ್ಲ ಸಾಮಾನ್ಯವಾಗಿ ಸರ್ಕಾರಿ ಶಾಲೆಯಲ್ಲಿ ಓದಿದವರಾಗಿದ್ದಾರೆ. ದೊಡ್ಡ ದೊಡ್ಡ ರಾಜಕಾರಣಿಗಳು ಸರ್ಕಾರಿ ಶಾಲೆಯಲ್ಲೇ ಓದಿದ್ದಾರೆ. ಆದ್ದರಿಂದ ಸರ್ಕಾರಿ ಶಾಲೆ ಎಂಬ ಕೀಳರಿಮೆ ಬಿಡಬೇಕು. ಭಾರತದಲ್ಲಿ ಓದಿದಂತಹ ವಿದ್ಯಾರ್ಥಿಗಳು ಪ್ರಪಂಚದಾದ್ಯಂತ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಪ್ರತಿಯೊಂದು ಮಗುವಿನಲ್ಲಿಯೂ ಒಂದೊಂದು ಪ್ರತಿಭೆ ಅಡಗಿರುತ್ತದೆ. ಅಂತಹ ಪ್ರತಿಭೆಗಳನ್ನು ಗುರುತಿಸಲು ಪ್ರತಿಭಾಕಾರಂಜಿ ಕಾರ್ಯಕ್ರಮಗಳು ಅತ್ಯವಶ್ಯಕವಾಗಿವೆ. ವಿದ್ಯಾರ್ಥಿಗಳ ಪ್ರತಿಭೆ ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದಲ್ಲಿ ಬೆಳಗಲಿ, ನಿಮ್ಮ ಬಾಳಿಗೆ ನೀವೇ ಶಿಲ್ಪಿಯಾಗಬೇಕು ಎಂದು ಶುಭ ಹಾರೈಸಿದರು.ಶಾಸಕ ಟಿ.ಎಸ್. ಶ್ರೀವತ್ಸ, ಡಿಡಿಪಿಐ ಉದಯ್ ಕುಮಾರ್, ಡಯಟ್ ಪ್ರಾಂಶುಪಾಲ ನಾಗರಾಜಯ್ಯ, ಬಿಇಒ ಕೃಷ್ಣ, ಅರುಣ್ ಕುಮಾರ್, ಸೋಮೇಗೌಡ, ಮಾಲಂಗಿ ಸುರೇಶ್, ರಘು, ಮಾಲೇಗೌಡ, ಮಹದೇವ, ಶ್ರೀಹರ್ಷ ಇದ್ದರು, ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.