ಅಧಿಕಾರಿಗಳು ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಬೇಕು: ಕೆ.ಎನ್. ಫಣೀಂದ್ರ

| Published : Apr 01 2024, 12:53 AM IST

ಅಧಿಕಾರಿಗಳು ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಬೇಕು: ಕೆ.ಎನ್. ಫಣೀಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ನ್ಯಾಯಾಂಗ, ಕಾನೂನು ಸೇವಾ ಪ್ರಾಧಿಕಾರ ಹಾಗೂ ಲೋಕಾಯುಕ್ತ ಸಂಸ್ಥೆಗಳು ಕಾವಲು ನಾಯಿಯಂತೆ ಕಾರ್ಯನಿರ್ವಹಿಸಿದಲ್ಲಿ ಮಾತ್ರ ಜನತೆಗೆ ಉತ್ತಮ ಸಾರ್ವಜನಿಕ ಆಡಳಿತ ನೀಡಲು ಸಾಧ್ಯವಾಗುತ್ತದೆ ಎಂದು ರಾಜ್ಯದ ಗೌರವಾನ್ವಿತ ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಕಲಬುರಗಿ

ನ್ಯಾಯಾಂಗ, ಕಾನೂನು ಸೇವಾ ಪ್ರಾಧಿಕಾರ ಹಾಗೂ ಲೋಕಾಯುಕ್ತ ಸಂಸ್ಥೆಗಳು ಕಾವಲು ನಾಯಿಯಂತೆ ಕಾರ್ಯನಿರ್ವಹಿಸಿದಲ್ಲಿ ಮಾತ್ರ ಜನತೆಗೆ ಉತ್ತಮ ಸಾರ್ವಜನಿಕ ಆಡಳಿತ ನೀಡಲು ಸಾಧ್ಯವಾಗುತ್ತದೆ ಎಂದು ರಾಜ್ಯದ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಅಭಿಪ್ರಾಯಪಟ್ಟರು.

ರವಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಉತ್ತಮ ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಪಾತ್ರ ಕುರಿತ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕದಲ್ಲಿ 7 ಕೋಟಿ ಜನರಿದ್ದು, ಇದರಲ್ಲಿ 5 ಲಕ್ಷ ಮಂದಿ ಸರ್ಕಾರಿ ನೌಕರರಿದ್ದಾರೆ. ಇದು ಒಟ್ಟು ಜನಸಂಖ್ಯೆಯಲ್ಲಿ ಶೇಕಡ 1 ರಷ್ಟು ಮಾತ್ರ. ಈ ನೌಕರರಿಂದ ರಾಜ್ಯದ ಜನತೆಯ ಮಾನ-ಪ್ರಾಣ ಅಡಗಿದೆ. ಆದ್ದರಿಂದ ಸರ್ಕಾರಿ ನೌಕರರು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಸ್ವಜನ ಪಕ್ಷಪಾತ, ಕರ್ತವ್ಯ ಲೋಪ. ಪ್ರಭಾವ ಬೀರುವಿಕೆ, ಸಮಯಕ್ಕೆ ಮತ್ತು ಸಂದರ್ಭೋಚಿತವಾಗಿ ಕೆಲಸ ಮಾಡದಿರುವುದು ಇವೆಲ್ಲಾ ಭ್ರಷ್ಟಾಚಾರವನ್ನು ತೋರಿಸುತ್ತದೆ. ಪ್ರಜೆಯಾಗಿ ದೇಶಕ್ಕೆ ಏನೂ ಕೊಡುಗೆ ನೀಡದಿದ್ದರೂ ಪರವಾಗಿಲ್ಲ. ಪ್ರಾಮಾಣಿಕತೆ ನೀಡಬೇಕು ಎಂಬ ಸಂತ ಸ್ವಾಮಿ ವಿವೇಕಾನಂದ ಅವರ ವಾಣಿಯನ್ನು ಉಲ್ಲೇಖಿಸಿದ ಅವರು, ಸರ್ಕಾರಿ ಅಧಿಕಾರಿಗಳು ಸಹ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳಬೇಕು ನೀತಿಪಾಠ ಹೇಳಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರು ಹಾಗೂ ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ನಾಗಶ್ರೀ ಅಧ್ಯಕ್ಷತೆ ವಹಿಸಿ ಮಾತನಾಡಿ, ಭ್ರಷ್ಟಾಚಾರ ಎಂಬುವುದು ಒಂದು ಸಾಮಾಜಿಕ ಪಿಡುಗಾಗಿದೆ. ಇವತ್ತಿನ ದಿನಗಳಲ್ಲಿ ಯಾರ್ಯಾರು ಭ್ರಷ್ಟರು ಎಂಬುದು ಕಂಡು ಹಿಡಿಯುವುದೇ ಕಷ್ಟವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಪ್ರಧಾನ ಜಿಲ್ಲಾ ಕೌಟುಂಬಿಕ ನ್ಯಾಯಾಧೀಶರಾದ ಶ್ರೀಮತಿ ಹೇಮಾವತಿ, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮೊಹನ ಬಾಡಗಂಡಿ, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಜಾನ್ ಆಂಟೋನಿ ಅವರು ಉಪಸ್ಥಿತರಿದ್ದರು. ಜಿಲ್ಲಾ ಮತ್ತು ತಾಲೂಕು ಮಟ್ಟದ ನ್ಯಾಯಾಧೀಶರು ಹಾಜರಿದ್ದರು. ಕಲಬುರಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಲಬುರಗಿ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀನಿವಾಸ ನವಲೆ ನಿರೂಪಿಸಿದರು.