ಬಾಗಲಕೋಟೆ : ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರಿಗೆ ಅಧಿಕೃತ ಆಸ್ತಿ ದಾಖಲೆಗಳನ್ನು ಒದಗಿಸಿ, ಆಸ್ತಿ ಹಕ್ಕುಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಭೂ ಗ್ಯಾರಂಟಿ ಯೋಜನೆಯನ್ನು ನ. 2ರಿಂದ ಜಿಲ್ಲೆಯಾದ್ಯಂತ ವಿಶೇಷ ಅಭಿಯಾನ ಮೂಲಕ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರಿಗೆ ಅಧಿಕೃತ ಆಸ್ತಿ ದಾಖಲೆಗಳನ್ನು ಒದಗಿಸಿ, ಆಸ್ತಿ ಹಕ್ಕುಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಭೂ ಗ್ಯಾರಂಟಿ ಯೋಜನೆಯನ್ನು ನ. 2ರಿಂದ ಜಿಲ್ಲೆಯಾದ್ಯಂತ ವಿಶೇಷ ಅಭಿಯಾನ ಮೂಲಕ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ತಿಳಿಸಿದ್ದಾರೆ.

ಗ್ರಾಮೀಣ ಆಸ್ತಿ ಮಾಲೀಕರ ಬಹುದಿನಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳಿಗೆ ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಇ-ಸ್ವತ್ತು 2.0 ತಂತ್ರಾಂಶದಲ್ಲೂ ಅಗತ್ಯ ಮಾರ್ಪಾಡು ಮಾಡಲಾಗಿದೆ. ಇದರಿಂದ ಹಲವು ವರ್ಷಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ದಾಖಲೆಗಳು ಲಭ್ಯವಿಲ್ಲದ ಗ್ರಾಮ ಠಾಣಾ ಆಸ್ತಿಗಳಿಗೆ ನೋಂದಾಯಿತ ದಾಖಲೆಗಳಿಂದ ವಿನಾಯಿತಿ ನೀಡಲಾಗಿದೆ. 2025ರ ಏಪ್ರಿಲ್ 7ಕ್ಕಿಂತ ಮುಂಚಿನ ವಿದ್ಯುತ್ ಬಿಲ್ ಹಾಗೂ ಸ್ಥಳ ಪರಿಶೀಲನೆ ಆಧಾರದ ಮೇಲೆ ಇ-ಸ್ವತ್ತು ದಾಖಲೆ ನೀಡಲು ಅವಕಾಶ ಕಲ್ಪಿಸಲಾಗಿದೆ. ನಮೂನೆ 11ಬಿ ಪಡೆಯುವ ವಿಧಾನ ಸರಳೀಕರಿಸಲಾಗಿದ್ದು, ನಿಗದಿತ ದಾಖಲೆಗಳನ್ನು ಸಲ್ಲಿಸುವ ಮೂಲಕ ಗ್ರಾಮೀಣ ಭಾಗದ ಜನರು ತಮ್ಮ ಕೃಷಿ ಜಮೀನಿನಲ್ಲಿ ವಾಸ ಅಥವಾ ಕೃಷಿ ಉದ್ದೇಶಕ್ಕಾಗಿ ನಿರ್ಮಿಸಿರುವ ಕಟ್ಟಡಗಳಿಗೆ ಇ-ಸ್ವತ್ತು ನಮೂನೆ 11ಬಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಸುಮಾರು 1.71 ಲಕ್ಷ ಅರ್ಹ ಆಸ್ತಿ ಮಾಲೀಕರಿದ್ದು, ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಸಿಇಒ ಗಜಾನನ ಬಾಲೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ವಿಶೇಷ ಕೌಂಟರ್‌ಗಳ ಮೂಲಕ ಅರ್ಜಿ ಸ್ವೀಕರಿಸಲಾಗುತ್ತಿದ್ದು, ಯಾವುದೇ ಮಧ್ಯವರ್ತಿಗಳ ಹಾವಳಿಗೆ ಅವಕಾಶವಿಲ್ಲದೆ ಪಾರದರ್ಶಕವಾಗಿ ದಾಖಲೆ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ಸರ್ಕಾರ ನಿಗದಿಪಡಿಸಿರುವ ಸಕ್ರಮೀಕರಣ ಶುಲ್ಕದ ರಿಯಾಯಿತಿಯ ಸದುಪಯೋಗ ಪಡೆದುಕೊಂಡು, ಗ್ರಾಮೀಣ ಪ್ರದೇಶದ ಆಸ್ತಿ ಮಾಲೀಕರು ತಮ್ಮ ಆಸ್ತಿಗಳಿಗೆ ಅಧಿಕೃತ ದಾಖಲೆಗಳನ್ನು ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

1,70,352 ಆಸ್ತಿಗಳ ಗುರಿ:ಭೂ ಗ್ಯಾರಂಟಿ ಯೋಜನೆಯಡಿ ಜಿಲ್ಲೆಗೆ ಒಟ್ಟು 1,70,352 ಆಸ್ತಿಗಳನ್ನು ಒಳಪಡಿಸುವ ಗುರಿ ನಿಗದಿಪಡಿಸಲಾಗಿದೆ. ಸಾರ್ವಜನಿಕರು ಇ-ಸ್ವತ್ತು ನಮೂನೆ 11ಎ ಮತ್ತು 11ಬಿ ಮುದ್ರಣ ಶುಲ್ಕ ಹಾಗೂ ಬಾಕಿ ಇರುವ ತೆರಿಗೆಗಳನ್ನು ಪಾವತಿಸಿ ಆನ್ಲೈನ್ ಮೂಲಕ ಡೌನ್ಲೋಡ್ ಮಾಡಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ. ಬಾಪೂಜಿ ಸೇವಾ ಕೇಂದ್ರದ ಮೂಲಕ ಇ-ಸ್ವತ್ತು ನಮೂನೆ 11ಎ ಮತ್ತು 11ಬಿಗೆ ಗ್ರಾಮ ಪಂಚಾಯತಿಗಳಲ್ಲಿ ಅರ್ಜಿ ಸಲ್ಲಿಸಲು ₹100 ಶುಲ್ಕ ನಿಗದಿಪಡಿಸಲಾಗಿದೆ. ಆದರೆ ಸಾರ್ವಜನಿಕರೇ ನೇರವಾಗಿ ಅರ್ಜಿ ಸಲ್ಲಿಸಿದಲ್ಲಿ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ ಎಂದು ಸಿಇಒ ತಿಳಿಸಿದ್ದಾರೆ. ಆದ್ದರಿಂದ ಅರ್ಹ ಗ್ರಾಮೀಣ ಆಸ್ತಿ ಮಾಲೀಕರು ಯಾವುದೇ ಮಧ್ಯವರ್ತಿಗಳ ಮೊರೆ ಹೋಗದೆ, ಸರ್ಕಾರ ಕಲ್ಪಿಸಿರುವ ಸರಳ ಹಾಗೂ ಪಾರದರ್ಶಕ ವ್ಯವಸ್ಥೆಯ ಸದುಪಯೋಗ ಪಡೆದುಕೊಂಡು ತಮ್ಮ ಆಸ್ತಿಗಳಿಗೆ ಅಧಿಕೃತ ದಾಖಲೆಗಳನ್ನು ಪಡೆದುಕೊಳ್ಳುವಂತೆ ಅವರು ಕೋರಿದ್ದಾರೆ.