ಸಾರಾಂಶ
ಈ ಪ್ರದೇಶಕ್ಕೆ ಈ ಹಿಂದೆ ಭೇಟಿ ನೀಡಿದ ಶಾಸಕರ ಮುಂದೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ ಫಲ ಇದು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕನ್ನಡಪ್ರಭ ವಾರ್ತೆ ಬೈಂದೂರು
ಇಲ್ಲಿನ ಪಡುವರಿಯ ಸೋಮೇಶ್ವರ ಬೀಚ್‌ಗೆ ತೆರಳುವ ದೊಂಬೆ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಒಂದು ವೇಳೆ ದುರ್ಘಟನೆ ಸಂಭವಿಸಿದರೆ ಅದಕ್ಕೆ ಅಧಿಕಾರಿಗಳೇ ಹೊಣೆಯಾಗುತ್ತಾರೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಎಚ್ಚರಿಕೆ ನೀಡಿದ್ದಾರೆ.ಈ ಗುಡ್ಡೆ ಕುಸಿಯುವುದನ್ನು ತಡೆಯಲು ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಮಳೆಗೆ ಗುಡ್ಡದ ಮಣ್ಣು ಅಲ್ಲಲ್ಲಿ ಕುಸಿಯುತ್ತಿದೆ, ಮುಂದೆ ಇನ್ನಷ್ಟು ಕುಸಿದು ಅಪಾಯವಾದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು. ತಕ್ಷಣವೇ ತುರ್ತು ಕಾಮಗಾರಿ ನಡೆಸಬೇಕು ಎಂದವರು ಹೇಳಿದ್ದಾರೆ.
ಈ ಪ್ರದೇಶಕ್ಕೆ ಈ ಹಿಂದೆ ಭೇಟಿ ನೀಡಿದ ಶಾಸಕರ ಮುಂದೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದ ಫಲ ಇದು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.ಈ ಹಿಂದೆಯೇ ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ ಎಂದು ಸ್ಥಳೀಯರು ದೂರು ನೀಡಿದ್ದರೂ ಯಾವುದೇ ಕ್ರಮ ಆಗಿಲ್ಲ. ಹೀಗಾಗಿ ಕಾಮಗಾರಿಗೆ ಸಂಬoಧಪಟ್ಟವರು ಹಾಗೂ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದರು.
ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಮಳೆ ಹಾನಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಸಾಗುವ ಒತ್ತಿನೆಣೆಯಲ್ಲಿ ಹೆದ್ದಾರಿ ಪ್ರಾಧಿಕಾರದಿಂದ ಕೆಲವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಇಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.