ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ನಗರಾಭಿವೃದ್ಧಿ ಪ್ರಾಧಿಕಾರ, ಮಹಾನಗರ ಪಾಲಿಕೆ ವ್ಯಾಪ್ತಿಯ ಜಾಗಗಳನ್ನು ಗುರುತಿಸಿ ಸೂಕ್ತ ಸಂರಕ್ಷಣೆಗೆ ಕ್ರಮ ವಹಿಸಬೇಕು. ಒಂದಡಿ ಸರ್ಕಾರಿ ಜಾಗ ಅತಿಕ್ರಮಣ, ಒತ್ತುವರಿ ಕಬಳಿಕೆಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಿ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಖಾತೆ ಸಚಿವ ಬಿ.ಎಸ್.ಸುರೇಶ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.ನಗರದ ಮಹಾನಗರ ಪಾಲಿಕೆ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ, ಕೆಯುಐಡಿಎಫ್‌ಸಿ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಸರ್ಕಾರಿ ಜಾಗವನ್ನು ಗುರುತಿಸಿ ಸಂರಕ್ಷಣೆಗೆ ಕ್ರಮ ವಹಿಸಬೇಕು. ಸರ್ಕಾರಿ ಜಾಗ ಒತ್ತುವರಿ, ಅತಿಕ್ರಮಣ ಮಾಡಿಕೊಂಡವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಸರ್ಕಾರದಿಂದ ಮಹಾನಗರ ಪಾಲಿಕೆಗಳಿಗೆ ಅತಿ ಹೆಚ್ಚು ಅನುದಾನ ಒದಗಿಸಲಾಗಿದೆ. ವಿಜಯಪುರ ಮಹಾನಗರ ಪಾಲಿಕೆಗೆ ₹ 150 ಕೋಟಿ ಬಿಡುಗಡೆಯಾಗಿದ್ದು, ಮುಂದಿನ 15 ದಿನದೊಳಗಾಗಿ ವಾರ್ಡವಾರು ₹ 4 ಕೋಟಿ ಯಂತೆ ವಿಂಗಡಿಸಿ ಹಂಚಿಕೆ ಮಾಡಲಾಗುವುದು. ಮುಂದಿನ 2 ತಿಂಗಳೊಳಗಾಗಿ ಟೆಂಡರ್ ಸೇರಿ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಕಾಮಗಾರಿ ಆರಂಭಿಸುವಂತೆ ನಿರ್ದೇಶನ ನೀಡಿದರು.
ಮಹಾನಗರ ಪಾಲಿಕೆಯಿಂದ ಕರ ವಸೂಲಾತಿಗೆ ಕ್ರಮ ವಹಿಸಬೇಕು. ಪಾಲಿಕೆ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ಸಮಸ್ಯೆಯಾಗದಂತೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಬೇಕು. ನಿಯಮಾನುಸಾರ ಕರ ವಸೂಲಾತಿಯಲ್ಲಿ ಪ್ರಗತಿ ಸಾಧಿಸಬೇಕು. ಆಸ್ತಿ ಕರ ಪಾವತಿ ಕುರಿತಂತೆ ಒಟಿಎಸ್ ಸ್ಕೀಮ್‌ನಿಂದ ಸಾರ್ವಜನಿಕರಿಗೆ ಅನುಕೂಲವಾಗುವುದಲ್ಲದೇ ಸರ್ಕಾರಕ್ಕೂ ಆದಾಯ ಬರುತ್ತದೆ. ಈ ಯೋಜನೆ ಬಿಬಿಎಂಪಿಗೆ ಮಾತ್ರ ಅನ್ವಯವಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿಯೂ ಸಹ ಓಟಿಸ್ ಯೋಜನೆಗೊಳಪಡಿಸುವ ಕುರಿತು ಪ್ರಸ್ತಾವನೆ ತಯಾರಿಸಿ ಸಲ್ಲಿಸುವಂತೆ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ಮಾತನಾಡಿ, ವಿಜಯಪುರ ನಗರದ ಹಮಾಲ ಕಾಲೋನಿ, ಗಾಂಧಿನಗರ, ಕಸ್ತೂರಿ ಕಾಲೋನಿ ಸೇರಿದಂತೆ ವಿವಿಧ ಬಡಾವಣೆಗಳ ಜನರಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹಕ್ಕುಪತ್ರ ವಿತರಣೆಗೆ ಕ್ರಮಕೈಗೊಳ್ಳುವಂತೆ ತಿಳಿಸಿದರು. ಈ ಹಿನ್ನಲೆಯಲ್ಲಿ ಇದಕ್ಕೆ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಉತ್ತರಿಸಿ, ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ಈ ಪ್ರದೇಶಗಳ ಮನೆ ಮಾಲೀಕರಿಗೆ ಹಕ್ಕುಪತ್ರ ವಿತರಣೆಗೆ ಸಂಬಂಧಿಸಿದಂತೆ ಸರ್ವೇ ಮಾಡಲಾಗಿದೆ. 3617 ಮನೆಗಳಿಗೆ ಹಕ್ಕುಪತ್ರ ವಿತರಿಸಲು ಗುರುತಿಸಲಾಗಿದ್ದು, ಬಾಕಿ ಉಳಿದ ಮನೆಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ನಗರಾಭಿವೃದ್ದಿ ಪ್ರಾಧಿಕಾರದಲ್ಲಿನ ಹಣವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು, ನಿವೇಶನ ರಚನೆಗೆ ಕ್ರಮ ವಹಿಸಬೇಕು. ಕೆರೆ ಅಭಿವೃದ್ಧಿಯ ಹಣವನ್ನು ಕೆರೆ ಅಭಿವೃದ್ದಿಗಾಗಿ ಬಳಸಬೇಕು. ನಿವೇಶನ ರಚನೆ ಮಾಡುವ ಕುರಿತು ಸರ್ಕಾರಿ ಜಾಗವನ್ನು ಗುರುತಿಸಿ ನಿವೇಶನ ರಚನೆಗೆ ಕ್ರಮ ವಹಿಸುವಂತೆ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಿಗೆ ಅವರು ಸೂಚನೆ ನೀಡಿದ ಅವರು, ಸರ್ಕಾರಿ ಜಾಗ ಲಭ್ಯವಿಲ್ಲದಿದ್ದಲಿ ಖಾಸಗಿ ಜಮೀನು ಖರೀದಿಸುವ ಬಗ್ಗೆ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಲು ತಿಳಿಸಿದರು.ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ ಮುಶ್ರೀಫ್, ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
------ಕೋಟ್....
ಇ-ಖಾತಾ ನೀಡುವಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ. ಸಮರ್ಪಕವಾಗಿ ದಾಖಲೆಗಳನ್ನು ಪರಿಶೀಲಿಸಿ ನಿಯಮಾನುಸಾರ ಇ-ಖಾತಾ ಒದಗಿಸಿ. ಸರ್ವರ್ ಸಮಸ್ಯೆ, ಸಿಬ್ಬಂದಿಗಳ ಸಮಸ್ಯೆ ಎಂದು ಸಬೂಬು ಹೇಳದೆ, ನಿಮ್ಮ ಹಂತದಲ್ಲಿಯೇ ಸಮಸ್ಯೆಗಳನ್ನು ಪರಿಹರಿಸಿಕೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಿ. ಕಟ್ಟಡ ಪರವಾನಗಿಗೆ ಇರುವ ತಾಂತ್ರಿಕ ತೊಂದರೆಗಳ ನಿವಾರಿಸಿ, ಸೂಕ್ತ ದಾಖಲೆಗಳನ್ನು ಪರಿಶೀಲಿಸಿ ಅರ್ಹರಿಗೆ ಕಟ್ಟಡ ಪರವಾನಗಿ ನೀಡಿ.- ಬೈರತಿ ಸುರೇಶ, ನಗರಾಭಿವೃದ್ಧಿ ಸಚಿವ