ಜನರ ಕೆಲಸ ವಿಳಂಬವಾದರೆ ಅಧಿಕಾರಿಗಳೇ ಹೊಣೆ

| Published : Jan 18 2025, 12:48 AM IST

ಸಾರಾಂಶ

ದೊಡ್ಡಬಳ್ಳಾಪುರ: ಸರ್ಕಾರಿ ಕಚೇರಿಗಳಲ್ಲಿ ಕೆಲಸ ವಿಳಂಬವಾಗುತ್ತಿರುವ ಬಗ್ಗೆ ಜನಸಾಮಾನ್ಯರ ದೂರುಗಳು ಕೇಳಿಬರುತ್ತಲೇ ಇದ್ದು, ಈ ಬಗ್ಗೆ ಪದೇಪದೇ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ದೊಡ್ಡಬಳ್ಳಾಪುರ: ಸರ್ಕಾರಿ ಕಚೇರಿಗಳಲ್ಲಿ ಕೆಲಸ ವಿಳಂಬವಾಗುತ್ತಿರುವ ಬಗ್ಗೆ ಜನಸಾಮಾನ್ಯರ ದೂರುಗಳು ಕೇಳಿಬರುತ್ತಲೇ ಇದ್ದು, ಈ ಬಗ್ಗೆ ಪದೇಪದೇ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ದಿಶಾ ಸಮಿತಿ ಸಭೆಯಲ್ಲಿ ಅವರು ಅಧಿಕಾರಿಗಳು ಜನಸಾಮಾನ್ಯರ ಕೆಲಸಗಳಿಗೆ ಸ್ಪಂದಿಸದೆ ಇರುವ ದೂರುಗಳ ಬಗ್ಗೆ ಪ್ರಸ್ತಾಪಿಸಿದರು. ಸರ್ಕಾರಿ ಸೌಲಭ್ಯ ಪಡೆಯಲು ಕಚೇರಿಗಳಿಗೆ ಅಲೆದಾಡಿಸಲಾಗುತ್ತದೆ ಎಂಬುದು ಜನರ ದೂರುಗಳಾಗಿವೆ. ಅಧಿಕಾರಿಗಳು ಸಮಯ ಪ್ರಜ್ಞೆ ಇಟ್ಟುಕೊಂಡು ಕೆಲಸ ಮಾಡಬೇಕು. ಜನಸಾಮಾನ್ಯರ ಕೆಲಸಕ್ಕೆ ಆದ್ಯತೆ ನೀಡಿ ಕೆಲಸ ಮಾಡಬೇಕು. ಅಧಿಕಾರಿಗಳ ಹತ್ತಿರ ಕೆಲಸ ಆಗದಿದ್ದಾಗ ಮಾತ್ರ ಜನರು ಜನಪ್ರತಿನಿಧಿಗಳ ಬಳಿ ಬರುತ್ತಾರೆ. ಇದರಿಂದ ಅಧಿಕಾರಿಗಳು ನಿರ್ಲಕ್ಷ್ಯ ತೋರದೆ ಕೆಲಸ ಮಾಡಬೇಕು. ಸರ್ಕಾರಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಜನಪ್ರತಿನಿಧಿಗಳು, ಅಧಿಕಾರಿಗಳ ಸಹಕಾರದಿಂದ ಕೆಲಸ ಮಾಡಿದರೆ ಸಮರ್ಪಕವಾಗಿ ಯೋಜನೆಗಳು ‌ಜನರನ್ನು ತಲುಪಲಿದೆ ಎಂದರು.

ಆಯುಷ್ಮಾನ್‌ ಯೋಜನೆಯಡಿ ಉಚಿತ ಚಿಕಿತ್ಸೆ:

ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ ₹5 ಲಕ್ಷ ವರೆಗಿನ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ದೊರಕಲಿದ್ದು, ಈ ಬಗ್ಗೆ ಅಧಿಕಾರಿಗಳು ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಕೇಂದ್ರ ಸರ್ಕಾರವು ದೇಶದ ಅಭಿವೃದ್ಧಿಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದೆ. ರೈತರ, ಹಿಂದುಳಿದವರ, ಬಡವರಪರ ಹಲವು ಜನಪ್ರಿಯ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ತಂದು ಜನಸಾಮಾನ್ಯರಿಗೆ ₹5 ಲಕ್ಷದವರೆಗಿನ ಉಚಿತ ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಪ್ರತಿಯೊಬ್ಬರು ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವಂತೆ ಅರಿವು ಮೂಡಿಸಿ ಎಂದರು.

ಬೆಳೆ ವಿಮೆ ನೋಂದಣಿ ಹೆಚ್ಚಿಸಿ:

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಳೆದ ಸಾಲಿನಲ್ಲಿ ಜಿಲ್ಲೆಯಲ್ಲಿ 4885 ರೈತರು ನೋಂದಣಿ ಯಾಗಿದ್ದಾರೆ. ಜಿಲ್ಲೆಯ ರೈತರು ತೋಟಗಾರಿಕೆ ಹಾಗೂ ಕೃಷಿ ವಾಣಿಜ್ಯ ಬೆಳೆಗಳನ್ನು ಹೆಚ್ಚು ಬೆಳೆಯುತ್ತಾರೆ. ಒಮ್ಮೆ ನಷ್ಟವಾದರೆ ರೈತರಿಗೆ ಬಹಳ ತೊಂದರೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಬೆಳೆ ವಿಮೆ ಮಾಡಿಸುವುದರಿಂದ ಆಗುವಂತಹ ಅನುಕೂಲಗಳ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ರೈತರಿಗೆ ಅರಿವು ಮೂಡಿಸಿ ಈ ವರ್ಷ ನೋಂದಣಿ ಹೆಚ್ಚಿಸಬೇಕಿದೆ ಎಂದರು.

₹29ಕ್ಕೆ ಭಾರತ್ ಅಕ್ಕಿ:

ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಒಳ್ಳೆಯ ಗುಣಮಟ್ಟದ ಅಕ್ಕಿಯನ್ನು ಕೇಂದ್ರ ಸರ್ಕಾರ ಪೂರೈಸುತ್ತಿದ್ದು ಒಂದು ಕೆ.ಜಿ ಅಕ್ಕಿಗೆ 29 ರೂಪಾಯಿಗಳು ಮಾತ್ರ. ಸಾರ್ವಜನಿಕರಿಗೆ ಇದರ ಬಗ್ಗೆ ಅರಿವು ಮೂಡಿಸಿ ಎಂದರು.

ಸಭೆಯಲ್ಲಿ ಶಾಸಕ ಧೀರಜ್‌ ಮುನಿರಾಜ್, ಜಿಲ್ಲಾಧಿಕಾರಿ ಡಾ.ಶಿವಶಂಕರ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಅನುರಾಧಾ ಮತ್ತಿತರರು ಉಪಸ್ಥಿತರಿದ್ದರು.

17ಕೆಡಿಬಿಪಿ3- ಬೆಂ.ಗ್ರಾ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಸಂಸದ ಡಾ.ಕೆ.ಸುಧಾಕರ್‌ ಮಾತನಾಡಿದರು.