ಕನ್ನಡಪ್ರಭ ವಾರ್ತೆ ಮಳವಳ್ಳಿ

ತಾಲೂಕು ಮಟ್ಟದ ಅಧಿಕಾರಿಗಳು ಮಳವಳ್ಳಿ ಪಟ್ಟಣದಲ್ಲಿಯೇ ವಾಸವಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ ನರೇಂದ್ರಸ್ವಾಮಿ ಸಲಹೆ ನೀಡಿದರು.

ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ತಾಲೂಕನ್ನು ಅಭಿವೃದ್ಧಿಪಡಿಸಲು ಶಾಸಕರಷ್ಟೇ ಅಧಿಕಾರಿಗಳಿಗೂ ಜವಾಬ್ದಾರಿ ಇದೆ. ತಾಲೂಕು ಅಧಿಕಾರಿಗಳ ವಿರುದ್ಧ ಸಾರ್ವಜನಿಕರಿಂದ ದೂರು ಕೇಳಿ ಬರುತ್ತಿದೆ. ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗದಿರುವ ಅಧಿಕಾರಿಗಳು ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು, ಬದ್ಧತೆಯಿಂದ ಕೆಲಸ ನಿರ್ವಹಿಸದಿದ್ದರೆ ಮುಂದಿನ ದಿನಗಳಲ್ಲಿ ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.

ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರೆವೇರಿಸುವ ಸಂದರ್ಭದಲ್ಲಿ ಪಟ್ಟಣದಲ್ಲಿ ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ದೂರು ನೀಡುತ್ತಿದ್ದು, ಅಧಿಕಾರಿಗಳು ಏನು ಮಾಡುತ್ತೀದ್ದೀರಿ ಎಂದು ಪುರಸಭೆ ಮುಖ್ಯಾಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ಸರ್ಕಾರದಿಂದ ಬೇಕಾದ ಅನುದಾನ ಬಿಡುಗಡೆಗೊಳಿಸಿದರೂ ಕೂಡ ಸಾರ್ವಜನಿರಿಗೆ ಮೂಲಭೂತ ಸೌಲಭ್ಯವನ್ನು ಕಲ್ಪಿಸಿಲ್ಲ, ರಸ್ತೆ ಬದಿಯಲ್ಲಿ ಗಿಡ ಬೆಳೆಸಲು ಮುಂದಾಗಿಲ್ಲ ಎಂದು ಕಿಡಿಕಾರಿದರು.


ಗ್ರಾಮೀಣ ಪ್ರದೇಶದ ಪೆಟ್ಟಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗದಂತೆ ಅಬಕಾರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಬಾರ್‌ಗಳಿಂದ ಅಯಾ ವ್ಯಾಪ್ತಿಯ ಗ್ರಾಮಗಳಿಗೆ ಮದ್ಯವನ್ನು ಸರಬರಾಜು ಮಾಡುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪೊಲೀಸ್ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಮದ್ಯ ದಂಧೆ ನಿಲ್ಲಿಸಬೇಕೆಂದು ಸೂಚನೆ ನೀಡಿದರು.

ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಮರ್ಪಕ ಸಾರಿಗೆ ಸೌಲಭ್ಯವನ್ನು ನೀಡಬೇಕು. ಹೆಚ್ಚುವರಿ ಸಾರಿಗೆ ಬಸ್ ನೀಡುವಂತೆ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬಸ್ ಸೌಲಭ್ಯದ ಕೊರತೆಯಾಗದಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದರು.

ಕಂದಾಯ ಹಾಗೂ ತಾಲೂಕು ಪಂಚಾಯ್ತಿ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಬೇಕು. ಗ್ರಾಮ ಲೆಕ್ಕಿಗರು ಸಾರ್ವಜನಿಕರ ಕೈಗೆ ಸಿಗುವಂತೆ ಹಳ್ಳಿಗಳಲ್ಲಿಯೇ ಕಚೇರಿ ತೆರೆಯಬೇಕು. ಉಪ ತಹಸೀಲ್ದಾರ್‌ರವರು ವಿ.ಎ ಆರ್‌ಐಗಳು ಸರಿಯಾಗಿ ಕೆಲಸ ನಿರ್ವಹಿಸುವ ಬಗ್ಗೆ ಮಾಹಿತಿ ಕಲೆಹಾಕಬೇಕು. ತಹಸೀಲ್ದಾರ್ ಹಾಗೂ ತಾಲೂಕು ಕಾರ್ಯನಿರ್ವಹಕ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದರು.

ಸರ್ಕಾರ ಹಾಗೂ ಜನರ ಸೇತುವೆಯಾಗಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವುದರ ಮೂಲಕ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದರ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ತಿಳಿಸಿದರು.

ಸಭೆಯಲ್ಲಿ ತಹಸೀಲ್ದಾರ್ ಎಸ್.ವಿ ಲೊಕೇಶ್, ತಾಲೂಕು ಪಂಚಾಯ್ತಿ ಕಾರ್ಯನಿರ್ವಹಕ ಅಧಿಕಾರಿ ಶ್ರೀನಿವಾಸ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.