ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ.ಸಂಪಾಜೆ, ಚೆಂಬು, ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಅರಣ್ಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಚೆಂಬು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮಾತನಾಡಿದರು.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಿದಲ್ಲಿ ಎಷ್ಟೋ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಬಹುದು. ಆ ನಿಟ್ಟಿನಲ್ಲಿ ಗಮನಹರಿಸಬೇಕು. ಯಾರಿಗೂ ಸಹ ತೊಂದರೆಯಾಗದಂತೆ ಕಾಳಜಿ ವಹಿಸಬೇಕು ಎಂದು ಸೂಚಿಸಿದರು.ಸರ್ಕಾರ ಶಕ್ತಿ, ಗೃಹಜ್ಯೋತಿ, ಗೃಹಭಾಗ್ಯ, ಯುವನಿಧಿ, ಅನ್ನಭಾಗ್ಯ ಹೀಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಬಡವರು ಸಹ ಉತ್ತಮ ಬದುಕು ನಡೆಸುವಂತಾಗಲು ಹಲವು ಸಮಾಜಪರ ಕಾರ್ಯಕ್ರಮಗಳನ್ನು ನೀಡಿದೆ. ಅವುಗಳನ್ನು ಸ್ಮರಿಸುವಂತಾಗಬೇಕು ಎಂದರು.
ಕಾಡಾನೆ ಮತ್ತು ಮಾನವ ಸಂಘರ್ಷ ಹಾವಳಿ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ದಬ್ಬಡ್ಕದಲ್ಲಿ ಕೆಲವು ಕುಟುಂಬಗಳು ಇನ್ನೂ ವಿದ್ಯುತ್ ಸಂಪರ್ಕ ಕಲ್ಪಿಸದೆ ಇದ್ದು, ಈ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚಿಸಿದರು.ದೇಶದಲ್ಲಿ ಜಿಎಸ್‌ಟಿ ಸಂಗ್ರಹ ಹಾಗೂ ಜಿಡಿಪಿಯಲ್ಲಿ ನಮ್ಮ ರಾಜ್ಯ ಮುಂದಿದೆ ಎಂದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲು ಕುಂದುಕೊರತೆ ಆಲಿಸಿದರು.
ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪ್ರಮುಖರಾದ ಸಂಕೇತ್ ಪೂವಯ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಸಾರ್ವಜನಿಕರು ಇತರರು ಇದ್ದರು.ರಸ್ತೆ ಉದ್ಘಾಟನೆ: ಸಂಪಾಜೆ ಗ್ರಾ.ಪಂ.ವ್ಯಾಪ್ತಿಯ ಚಡಾವು ಬಳಿ ದುಗ್ಗಳ ಭಾಗದಲ್ಲಿ 5 ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಇತ್ತೀಚೆಗೆ ಉದ್ಘಾಟಿಸಿದರು. ಹಾಗೆಯೇ ಬಂಟೋಡಿಯಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆಗೊಳಿಸಿದರು.