ಲೋಕ ಚುನಾವಣೆಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿ: ಡಿಸಿ ಡಾ.ವಿದ್ಯಾಕುಮಾರಿ

| Published : Mar 05 2024, 01:37 AM IST

ಲೋಕ ಚುನಾವಣೆಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿ: ಡಿಸಿ ಡಾ.ವಿದ್ಯಾಕುಮಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲೆಯ ನೋಡೆಲ್ ಅಧಿಕಾರಿಗಳ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಸಭೆಯಲ್ಲಿ ಅಧಿಕಾರಿಗಳ ಜವಾಬ್ದಾರಿಗಳ ಬಗ್ಗೆ ಮಾಹಿತಿ ನಿಡಿದರು.

ಕನ್ನಡಪ್ರಭ ವಾರ್ತೆ ಮಣಿಪಾಲಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾ ಕುಮಾರಿ ಸೂಚನೆ ನೀಡಿದರು.ಅವರು ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲೆಯ ನೋಡೆಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಚುನಾವಣೆ ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ತಂಡವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಪ್ರತಿಶತಃ ನೂರರಷ್ಟು ಮತದಾನ ನಡೆಯುವಲ್ಲಿ ಸಹಕರಿಸಬೇಕು ಎಂದರು.ಚುನಾವಣೆ ಘೋಷಣೆಯಾದ ತಕ್ಷಣ ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಶಾಲಾ - ಕಾಲೇಜುಗಳ ಗೋಡೆಯ ಮೇಲಿನ ಬರಹ ಸೇರಿದಂತೆ ಮತ್ತಿತರ ಸ್ಥಳಗಳಲ್ಲಿರುವ ರಾಜಕೀಯ ಪಕ್ಷಗಳ ಬ್ಯಾನರ್, ಫ್ಲೆಕ್ಸ್, ಹೋರ್ಡಿಂಗ್ಸ್‌ಗಳನ್ನು ತೆರವುಗೊಳಿಸಬೇಕು. ವಿವಿಧ ಇಲಾಖೆಗಳ ವೆಬ್‌ಸೈಟ್ ಹಾಗೂ ಸಾಮಾಜಿಕ ತಾಣಗಳಲ್ಲಿ ಸಚಿವರು ಹಾಗೂ ಜನಪ್ರತಿನಿಧಿಗಳ ಭಾವಚಿತ್ರ ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಚುನಾವಣೆ ಕುರಿತು ಅರಿವು ಮೂಡಿಸಲು ವಿವಿಧ ಚಟುವಟಿಕೆಗಳನ್ನು ಆಯೋಜಿಸಿ, ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣೆಯಲ್ಲಿ ಭಾಗವಹಿಸಲು ಕ್ರಮ ವಹಿಸಬೇಕು ಎಂದ ಅವರು, ಮತಗಟ್ಟೆಗಳಲ್ಲಿ ವಿಕಲಚೇತನರು, ಅಶಕ್ತರು ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು. ಮತದಾನ ಕೇಂದ್ರಗಳಲ್ಲಿ ಸ್ವಚ್ಛವಾಗಿಟ್ಟು ಅಗತ್ಯವಿದ್ದಲ್ಲಿ ದುರಸ್ತಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.

ಆಂತರಿಕ ಪ್ರದೇಶಗಳಲ್ಲಿ ಗಾಂಜಾ ಹಾಗೂ ಕಳ್ಳಭಟ್ಟಿ ಸಾಗಾಟ ಸೇರಿದಂತೆ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ಅರಣ್ಯ ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಕ್ರಮವಹಿಸಬೇಕು. ಬಂದರುಗಳಿಗೆ ಆಗಮಿಸುವ ಬೋಟುಗಳ ತಪಾಸಣೆಯನ್ನು ಸಹ ಕರಾವಳಿ ಕಾವಲು ಪೊಲೀಸ್ ಅಧಿಕಾರಿಗಳು ನಡೆಸಬೇಕು ಎಂದು ಸೂಚನೆ ನೀಡಿದರು.ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ ಎಸ್., ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಡಿಎಫ್‌ಓ ಗಣಪತಿ, ಕರಾವಳಿ ಕಾವಲು ಪಡೆಯ ಎಸ್‌ಪಿ ಮಿಥುನ್ ಎಚ್.ಎನ್., ಉಡುಪಿ ಡಿ.ಐ.ಒ. ಮಂಜುನಾಥ್, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.