ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ಹುದ್ದೆಗಳ ನೇಮಕಾತಿಗಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಸ್ಥಾಪಿಸಲಾಗಿದ್ದ 16 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಪರೀಕ್ಷೆ ಸುಸೂತ್ರವಾಗಿ ನಡೆಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ಹುದ್ದೆಗಳ ನೇಮಕಾತಿಗಾಗಿ ಬಾಗಲಕೋಟೆ ಜಿಲ್ಲೆಯಲ್ಲಿ ಸ್ಥಾಪಿಸಲಾಗಿದ್ದ 16 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಪರೀಕ್ಷೆ ಸುಸೂತ್ರವಾಗಿ ನಡೆಯಿತು.

ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಜಾನನ ಬಾಲೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಅವರು ನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಆದರ್ಶ ವಿದ್ಯಾಲಯ, ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸ್ಥಾಪಿಸಲಾಗಿದ್ದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಅಭ್ಯಥರ್ಿಗಳ ಪ್ರವೇಶ, ಆಸನ ವ್ಯವಸ್ಥೆ, ಪರೀಕ್ಷಾ ಕೊಠಡಿಗಳಲ್ಲಿನ ಸೌಲಭ್ಯಗಳು ಹಾಗೂ ನಿಯಮಗಳ ಪಾಲನೆ ಪರಿಶೀಲಿಸಿದರು.

ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿಯ ಕರ್ತವ್ಯ ನಿರ್ವಹಣೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಪರೀಕ್ಷಾ ಪ್ರಕ್ರಿಯೆ ಯಾವುದೇ ಲೋಪವಿಲ್ಲದೆ ನಿಯಮಾನುಸಾರ ನಡೆಯುವಂತೆ ಹಾಗೂ ಅಭ್ಯರ್ಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಸೂಚಿಸಿದರು.

ಇದೇ ವೇಳೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕೈಗೊಂಡಿರುವ ಭದ್ರತಾ ಕ್ರಮಗಳನ್ನೂ ಪರಿಶೀಲಿಸಲಾಯಿತು. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಕೈಗೊಂಡಿದ್ದ ಮುನ್ನೆಚ್ಚರಿಕಾ ಕ್ರಮಗಳ ಹಿನ್ನೆಲೆಯಲ್ಲಿ ಪರೀಕ್ಷೆಯು ಯಾವುದೇ ಅಹಿತಕರ ಘಟನೆಗಳಿಲ್ಲದೆ ಸುಸೂತ್ರವಾಗಿ ನಡೆಯಿತು.

ಭೇಟಿ ಸಮಯದಲ್ಲಿ ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ನೋಡಲ್ ಅಧಿಕಾರಿಗಳು ಇದ್ದರು. ಬಾಗಲಕೋಟೆ ನಗರದ ಒಟ್ಟು 16 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 7362 ಅಭ್ಯರ್ಥಿಗಳ ಪೈಕಿ 4534 ಜನ ಹಾಜರಾಗಿ 2828 ಜನ ಅಭ್ಯರ್ಥಗಳು ಗೈರು ಹಾಜರಾದರು.