ಸಾರಾಂಶ
ಜನರ ಮೇಲೆ ಸೇಡು ತೀರಿಸಿಕೊಳ್ಳಲು ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿದ್ದಾರೆ ಎಂದು ನೀಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಕಾಂಗ್ರೆಸ್ ಯುವ ಮುಖಂಡ ಸಂಜೀವ್ ಐರೆಡ್ಡಿ ಬೆಂಡೆಬೆಂಬಳಿ ತಿರುಗೇಟು.
ಕನ್ನಡಪ್ರಭ ವಾರ್ತೆ ಯಾದಗಿರಿ
ಲೋಕಸಭಾ ಚುನಾವಣೆಯಲ್ಲಿ ಅತಿ ಕಡಿಮೆ ಸ್ಥಾನ ಬಂದಿರುವುದರಿಂದ ಜನರ ಮೇಲೆ ಸೇಡು ತೀರಿಸಿಕೊಳ್ಳಲು ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿದ್ದಾರೆ ಎಂದು ನೀಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ಕಾಂಗ್ರೆಸ್ ಯುವ ಮುಖಂಡ ಸಂಜೀವ್ ಐರೆಡ್ಡಿ ಬೆಂಡೆಬೆಂಬಳಿ ತಿರುಗೇಟು ನೀಡಿದ್ದಾರೆ.ಕೇಂದ್ರ ಬಿಜೆಪಿ ಸರಕಾರ ಈ ಹಿಂದೆ ತೈಲ ಬೆಲೆ ಹಾಗೂ ಅಡುಗೆ ಅನಿಲ ದರ ಏರಿಸಿದಾಗ ಮಾತನಾಡದೆ, ಇದೀಗ ರಾಜ್ಯ ಸರ್ಕಾರದ ವಿಚಾರದಲ್ಲಿ ಯಾಕೆ ಇಷ್ಟೊಂದು ಹೊಟ್ಟೆ ಕಿಚ್ಚು. ಆಗ ಜನರ ಪರವಾಗಿ ಧ್ವನಿ ಎತ್ತದ ಬಿಜೆಪಿ ನಾಯಕರು ಈಗ ಯಾವ ನೈತಿಕತೆಯಿಂದ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಕಡಿಮೆ ಇದೆ. ದರ ಹೆಚ್ಚಳದ ಹಣವನ್ನು ಇನ್ನಷ್ಟು ಅಭಿವೃದ್ಧಿಗಾಗಿ ಬಳಸಿಕೊಳ್ಳಲಾಗುತ್ತದೆ. ಕೇಂದ್ರ ಸರ್ಕಾರ 10 ವರ್ಷಗಳ ಅಧಿಕಾರದ ಅವಧಿಯಲ್ಲಿ 30 ರು. ಹೆಚ್ಚು ಮಾಡಿದೆ. ನಮ್ಮ ಸರಕಾರ ಸಾರ್ವಜನಿಕರಿಗೆ ಹೊರೆಯಾಗುವಷ್ಟೇನು ದರ ಹೆಚ್ಚಳ ಮಾಡಿಲ್ಲ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.ಈಗ ದರ ಹೆಚ್ಚುಗೊಳಿಸಲು ಈ ಹಿಂದಿನ ಬಿಜೆಪಿ ಕೇಂದ್ರ ಸರ್ಕಾರವೇ ಕಾರಣ ಎಂದು ಮುಖ್ಯಮಂತ್ರಿ ನಾಡಿನ ಜನರ ಗಮನಕ್ಕೆ ಆವಾಗಲೇ ತಂದಿದ್ದಾರೆ. ಹೀಗಿದ್ದರೂ ಬಿಜೆಪಿಯವರು ಪ್ರತಿಭಟಿಸುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದಿರುವ ಅವರು, ಬಿಜೆಪಿ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದು ಕಿಡಿ ಕಾರಿದ್ದಾರೆ.