ಓಲಾ ಕಂಪನಿಯ ಉದ್ಯೋಗಿಯ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಎದುರಿಸುತ್ತಿರುವ ಓಲಾ ಎಲೆಕ್ಟ್ರಿಕ್ ಟೆಕ್ನಾಲೀಸ್ ಪ್ರವೈಟ್ ಲಿಮಿಟೆಡ್ ಕಂಪನಿಯ ಸಿಇಒ ಭವೀಶ್ ಅಗರವಾಲ್ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಓಲಾ ಕಂಪನಿಯ ಉದ್ಯೋಗಿಯ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಎದುರಿಸುತ್ತಿರುವ ಓಲಾ ಎಲೆಕ್ಟ್ರಿಕ್ ಟೆಕ್ನಾಲೀಸ್ ಪ್ರವೈಟ್ ಲಿಮಿಟೆಡ್ ಕಂಪನಿಯ ಸಿಇಒ ಭವೀಶ್ ಅಗರವಾಲ್ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಭವೀಶ್ ಅಗರವಾಲ್ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರ ಪೀಠಕ್ಕೆ ಸರ್ಕಾರಿ ವಕೀಲರು ಈ ಮಾಹಿತಿ ನೀಡಿದರು. ಸರ್ಕಾರಿ ವಕೀಲರ ಹೇಳಿಕೆ ದಾಖಲಿಸಿಕೊಂಡ ನ್ಯಾಯಾಲಯ, ಅರ್ಜಿ ವಿಚಾರಣೆಯನ್ನು ಜ.21ಕ್ಕೆ ಮುಂದೂಡಿತು. ಜೊತಗೆ, ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸರ್ಕಾರಕ್ಕೆ ಸೂಚಿಸಿ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ಅರ್ಜಿಯ ಮುಂದಿನ ವಿಚಾರಣೆವರೆಗೆ ಮುಂದುವರಿಸಿತು. ಜತೆಗೆ, ಅರ್ಜಿದಾರರು ತನಿಖೆಗೆ ಎಲ್ಲಾ ರೀತಿಯ ಸಹಕಾರವನ್ನು ನೀಡಬೇಕು ಎಂದು ಸೂಚನೆ ನೀಡಿತು.
ಓಲಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೆ.ಅರವಿಂದ್ ಕಳೆದ ಅ.6ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅದಕ್ಕೂ ಮುನ್ನ ಅವರು ಬರೆದಿಟ್ಟಿದ್ದ ಡೆತ್ ನೋಟ್‌ನಲ್ಲಿ ಕಂಪನಿಯಲ್ಲಿ ತನಗೆ ಭಾರಿ ಕಿರುಕುಳ ನೀಡಲಾಗುತ್ತಿದೆ. ಸರಿಯಾಗಿ ವೇತನ ಭತ್ಯೆ ನೀಡುತ್ತಿಲ್ಲ ಎಂದು ಆರೋಪಿಸಿದ್ದರು. ಹಾಗಾಗಿ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ಆರೋಪಗಳಡಿ ಸುಬ್ರಮಣ್ಯಪುರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಆ ಎಫ್‌ಐಆರ್ ರದ್ದುಗೊಳಿಸಬೇಕು ಮತ್ತು ತಮ್ಮ ವಿರುದ್ಧ ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಮೊರೆ ಹೋಗಿದ್ದರು.