ಹುಬ್ಬಳ್ಳಿ:
ಹಳೇ ಹುಬ್ಬಳ್ಳಿಯ 100 ಹಾಸಿಗೆಗಳ ಹೈಟೆಕ್ ಆಸ್ಪತ್ರೆಯ ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಂದ ಲೋಕಾರ್ಪಣೆ ಮಾಡಲಿದ್ದಾರೆಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.ಹಳೇ ಹುಬ್ಬಳ್ಳಿಯಲ್ಲಿ ನಿರ್ಮಿಸುತ್ತಿರುವ 100 ಹಾಸಿಗೆಗಳ ಹೈಟೆಕ್ ಆಸ್ಪತ್ರೆಗೆ ಶುಕ್ರವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಆಸ್ಪತ್ರೆಯ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಇನ್ನುಳಿದ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ಕ್ಷೇತ್ರದಲ್ಲಿ 12 ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು ಮತ್ತೆ 5 ಹೊಸ ನಮ್ಮ ಕ್ಲಿನಿಕ್‌ಗಳಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಲ್ಲದೇ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದ್ದು ಬಿಡನಾಳದಲ್ಲಿ ನೂತನ ಸರ್ಕಾರಿ ಪದವಿ ಪೂರ್ವ ಪ್ರಾರಂಭವಾಗಿದ್ದು, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳು ಆರಂಭವಾಗಿವೆ. ಕಾಲೇಜಿನ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಶೀಘ್ರ ಉದ್ಘಾಟಿಸಲಿದ್ದಾರೆ ಎಂದರು.ಪಾಲಿಕೆ ಆಯುಕ್ತ ರುದ್ರೇಶ ಗಾಳಿ, ಉಪಆಯುಕ್ತ ವಿಜಯಕುಮಾರ, ಪಿಡಬ್ಲ್ಯೂಡಿ ಎಂಜಿನಿಯರ್ ಗೀತಾ ಚಹ್ವಾಣ, ಪಾಲಿಕೆ ಮುಖ್ಯ ಆರೋಗ್ಯ ಅಧಿಕಾರಿ ಡಾ. ಶ್ರೀಧರ ದಂಡಪ್ಪನವರ, ಎಇಇಗಳಾದ ಹರೀಶ, ನಾಗರಾಜ, ಪಾಲಿಕೆ ಮಾಜಿ ಸದಸ್ಯ ಅಲ್ತಾಫ್ ಕಿತ್ತೂರ, ಸಂತೋಷ ಪೂಜಾರ ಸೇರಿದಂತೆ ಹಲವರಿದ್ದರು.