ನಗರದ ರವೀಂದ್ರನಾಥ್ ಟಾಗೋರ್ ಕಡಲ ತೀರದಲ್ಲಿ ಅಪರೂಪದ ಆಲಿವ್ ರಿಡ್ಲೆ ಜಾತಿಯ ಕಡಲಾಮೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಕಡಲ ವನ್ಯಜೀವಿ ವಿಭಾಗದ ಅಧಿಕಾರಿಗಳು ಭೇಟಿ
ಕನ್ನಡಪ್ರಭ ವಾರ್ತೆ ಕಾರವಾರನಗರದ ರವೀಂದ್ರನಾಥ್ ಟಾಗೋರ್ ಕಡಲ ತೀರದಲ್ಲಿ ಅಪರೂಪದ ಆಲಿವ್ ರಿಡ್ಲೆ ಜಾತಿಯ ಕಡಲಾಮೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಟಾಗೋರ್ ಕಡಲ ತೀರದಲ್ಲಿರುವ ಚಾಪೆಲ್ ವಾರ್‌ಶಿಪ್ ಮ್ಯೂಸಿಯಂ ಹಿಂಭಾಗದ ಸಮುದ್ರ ತೀರದಲ್ಲಿ ಬುಧವಾರ ಬೆಳಗ್ಗೆ ಕಡಲಾಮೆಯೊಂದು ಸಾವನ್ನಪ್ಪಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಹಾಗೂ ಕಡಲ ವನ್ಯಜೀವಿ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಡಲಾಮೆಯ ಮೃತದೇಹವನ್ನು ಪರಿಶೀಲಿಸಿದಾಗ, ಅದು ಕೆಲ ದಿನಗಳ ಹಿಂದೆಯೇ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ದೇಹ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿದ್ದ ಕಾರಣ ಸಾವಿನ ನಿಖರ ಕಾರಣ ಪತ್ತೆಹಚ್ಚಲು ಮರಣೋತ್ತರ ಪರೀಕ್ಷೆ ನಡೆಸುವುದು ಸಾಧ್ಯವಾಗಿಲ್ಲ.
ಕಡಲಾಮೆಯ ಮೃತದೇಹವನ್ನು ಸ್ಥಳಾಂತರಿಸುವ ಬದಲು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಮ್ಮುಖದಲ್ಲಿ ಕಡಲತೀರದಲ್ಲಿಯೇ ಹೂಳಲಾಯಿತು. ಕೊಳೆತ ಸ್ಥಿತಿಯಲ್ಲಿದ್ದ ಕಾರಣ ಸುರಕ್ಷಿತ ವಿಲೇವಾರಿ ಕ್ರಮವಾಗಿ ಸ್ಥಳದಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.ಕಡಲಾಮೆಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಸದ್ಯ ಸಮುದ್ರದಲ್ಲಿ ಮೀನುಗಾರಿಕೆ ಚಟುವಟಿಕೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ, ಮೀನುಗಾರಿಕಾ ಬಲೆಗೆ ಸಿಲುಕಿ ಅಥವಾ ದೋಣಿಗೆ ಡಿಕ್ಕಿಯಾಗಿ ಗಾಯಗೊಂಡು ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಮರಣೋತ್ತರ ಪರೀಕ್ಷೆ ನಡೆಸಲು ಸಾಧ್ಯವಾಗದ ಕಾರಣ ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.
ಕಾರವಾರ ಕರಾವಳಿ ಭಾಗದಲ್ಲಿ ಈ ಹಿಂದೆಯೂ ಕಡಲಾಮೆಗಳು ಗಾಯಗೊಂಡ ಹಾಗೂ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆಗಳು ನಡೆದಿವೆ. ಸಮುದ್ರ ಜೀವಿಗಳ ಸಂರಕ್ಷಣೆಗಾಗಿ ಮೀನುಗಾರಿಕೆ ಚಟುವಟಿಕೆಗಳ ಸಂದರ್ಭ ಹೆಚ್ಚಿನ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.