ಪ್ರಜಾಸೇವಾ ಆಂದೋಲನವು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವೇದಿಕೆಯಾಗಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಹಾಗೂ ಜನೋಪಯೋಗಿಯಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ನಗರದ ಗುತ್ತಲು ಅರ್ಕೇಶ್ವರ ನಗರದಲ್ಲಿರುವ ಕೆಪಿಎಸ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಪ್ರಜಾಸೇವಾ ಆಂದೋಲನ ಹಾಗೂ ವಿಶೇಷ ಆರೋಗ್ಯ ಶಿಬಿರವನ್ನು ಪರಿಣಾಮಕಾರಿಯಾಗಿ ನಡೆಸುವ ಮೂಲಕ ಸಾರ್ವಜನಿಕರಿಗೆ ಹೆಚ್ಚಿನ ಪ್ರಯೋಜನ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಪಿ.ರವಿಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವಾ ಆಂದೋಲನ ಹಾಗೂ ವಿಶೇಷ ಆರೋಗ್ಯ ಶಿಬಿರ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಜಾಸೇವಾ ಆಂದೋಲನವು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವೇದಿಕೆಯಾಗಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಹಾಗೂ ಜನೋಪಯೋಗಿಯಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಾಸಕರು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮಾತನಾಡಿ, ವೇದಿಕೆ ನಿರ್ಮಾಣ, ಸಾರ್ವಜನಿಕರಿಗೆ ಆಸನ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲು ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ವೇದಿಕೆಯಲ್ಲಿ ಗಣ್ಯರಿಗೆ ಅಗತ್ಯ ವ್ಯವಸ್ಥೆ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸುವುದು, ಸ್ವಚ್ಛತೆ ಕಾಪಾಡುವ ಜೊತೆಗೆ ವಾಹನಗಳ ಸುಗಮ ಸಂಚಾರ ಹಾಗೂ ಪಾರ್ಕಿಂಗ್‌ಗೆ ಸೂಕ್ತ ಸ್ಥಳಾವಕಾಶ ಕಲ್ಪಿಸುವತ್ತ ಗಮನಹರಿಸುವಂತೆ ಸೂಚಿಸಿದರು.

ಸಾರ್ವಜನಿಕರಿಗೆ ಮುಂಚಿತವಾಗಿ ವ್ಯಾಪಕ ಪ್ರಚಾರ ಕೈಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಕ್ರಮ ವಹಿಸಬೇಕು. ಆರೋಗ್ಯ ಸೇವೆಗಳ ಅಗತ್ಯವಿರುವವರಿಗೆ ತ್ವರಿತ ನೆರವು ದೊರೆಯುವಂತೆ ವೈದ್ಯಕೀಯ ಸಿಬ್ಬಂದಿ ಹಾಗೂ ಅಗತ್ಯ ಆರೋಗ್ಯ ಸೌಲಭ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು. ನಿಯೋಜಿತ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಹಾಗೂ ಯಶಸ್ವಿಯಾಗಿ ನಡೆಸಲು ಸಕಾಲದಲ್ಲಿ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ.ಪ್ರಕಾಶ್, ತಹಸೀಲ್ದಾರ್ ವಿಶ್ವನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬೆಟ್ಟಸ್ವಾಮಿ ಉಪಸ್ಥಿತರಿದ್ದರು.