ಸಾರಾಂಶ
ಕನ್ನಡಪ್ರಭವಾರ್ತೆ ಚಿತ್ರದುರ್ಗವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಡಿ. 24ರಂದು ಬೆಳಗ್ಗೆ 10.30ಕ್ಕೆ ತರಾಸು ರಂಗಮಂದಿರದಲ್ಲಿ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ.ಎಚ್.ಗುಡ್ಡದೇಶ್ವರಪ್ಪ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘ ಕಳೆದ 12 ವರ್ಷಗಳಿಂದ ಸಮಾಜದ ಸಾಧಕರನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ಮಾಡಿಕೊಂಡು ಬಂದಿದೆ ಎಂದರು.2022-23ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ, ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ, ಬಿಎಸ್‍ಡಬ್ಲ್ಯೂ, ಇಂಜಿನಿಯರಿಂಗ್, ಎಂಬಿಬಿಎಸ್, ಇತರೆ ಪದವಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಪಿಎಚ್‍ಡಿ ಪದವಿ ಪಡೆದ, ನಾಯಕ ಸಮಾಜದ ಪ್ರತಿಭಾವಂತರನ್ನು ಅಭಿನಂದಿಸಲು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿತ್ತು. ಸುಮಾರು 200ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಇದರಲ್ಲಿ 96 ಜನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಮಾಜಿ ಸಂಸದ ಹಾಗೂ ವಿಶ್ರಾಂತ ಹೈಕೋರ್ಟ್ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ ಅವರಿಗೆ 2013ನೇ ಸಾಲಿನ ಜೀವಮಾನ ಸಾಧನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇದರ ಜೊತೆಗೆ ಸಮಾಜದ ಸಾಧಕರಾದ ನಿವೃತ್ತ ಡಿಐಜಿ ಎಂ.ಎನ್.ನಾಗರಾಜ್, ಹಿರಿಯ ಪತ್ರಕರ್ತ ಹಾಗೂ ಜಿಲ್ಲಾ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ ಎಂ.ಎನ್.ಅಹೋಬಲಪತಿ ಹಾಗೂ ಉದ್ಯಮಿ ಹಾಗೂ ಜಿಲ್ಲಾ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ ಪಿ.ವಿ.ಅರುಣ್ ಕುಮಾರ್ ಅವರನ್ನು ಸನ್ಮಾನಿಸಲಾಗುವುದು ಎಂದರು.
ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸುವರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಜೀವಮಾನ ಸಾಧನ ಪ್ರಶಸ್ತಿ ಪ್ರಧಾನ ಮಾಡುವರು. ಸಹಕಾರ ಸಚಿವ ಕೆ.ಎನ್.ರಾಜಣ್ಣ ವಾಲ್ಮೀಕಿ ಭಾವಚಿತ್ರ ಅನಾವರಣ ಮಾಡುವರು. ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ ಸಮಾಜದ ಸಾಧಕರಿಗೆ ಸನ್ಮಾನ ಮಾಡುವರು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಜನಪ್ರತಿನಿಧಿಗಳು ಹಾಗೂ ಸಮಾಜದ ಗಣ್ಯರು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುವರು.ಚಿತ್ರದುರ್ಗ ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜು ಮಾತನಾಡಿ, ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭಕ್ಕೆ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಎಚ್.ಜೆ.ಕೃಷ್ಣಮೂರ್ತಿ, ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ನಾಗೇಂದ್ರಬಾಬು, ಖಜಾಂಚಿ ಎಸ್.ಬಿ.ರವಿಶಂಕರ್, ಉಪಾಧ್ಯಕ್ಷ ಜೆ.ಎಸ್.ರವಿಕುಮಾರ್, ಜಂಟಿ ಕಾರ್ಯದರ್ಶಿಗಳಾದ ಕೆ.ನಾಗರಾಜ್, ಎಚ್.ತಿಪ್ಪಯ್ಯ ಹಾಗೂ ಸಹಾಯಕ ಅಭಿಯಂತರ ಬಸವರಾಜ ಟಿ.ಗೊರವರ್ ಇದ್ದರು.