ಸಾರಾಂಶ
ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಹಾಗೂ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ‘ಆಂಜನೇಯ-೫೬’ ಸಂಭ್ರಮ ಹಾಗೂ ಶ್ರೀ ಯಕ್ಷಾಂಜನೇಯ ಪ್ರಶಸ್ತಿ ಪ್ರದಾನ ಸಮಾರಂಭ ಡಿ.೨೫ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಪುತ್ತೂರು
ಬೊಳ್ವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಹಾಗೂ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ‘ಆಂಜನೇಯ-೫೬’ ಸಂಭ್ರಮ ಹಾಗೂ ಶ್ರೀ ಯಕ್ಷಾಂಜನೇಯ ಪ್ರಶಸ್ತಿ ಪ್ರದಾನ ಸಮಾರಂಭ ಡಿ.೨೫ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಅಧ್ಯಕ್ಷ ಭಾಸ್ಕರ ಬಾರ್ಯ ತಿಳಿಸಿದ್ದಾರೆ.ಅವರು ಸೋಮವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಳಗ್ಗೆ ಶ್ರೀ ಆಂಜನೇಯ-೫೬ ಸಂಭ್ರಮದ ಉದ್ಘಾಟನೆ ನಡೆಯಲಿದ್ದು, ಬಳಿಕ ‘ಯಕ್ಷ ತಾಪಸಿಯರು-ಸಂವಾದ’ ತಾಳಮದ್ದಳೆ ನಡೆಯಲಿದೆ. ಮಧ್ಯಾಹ್ನ ‘ಭೀಷ್ಮ ಸೇನಾಧಿಪತ್ಯ-ಕರ್ಮಬಂಧ’ ತಾಳಮದ್ದಳೆ ನಡೆಯಲಿದೆ ಎಂದು ತಿಳಿಸಿದರು.ಸಂಜೆ ನಡೆಯುವ ಸಮಾರಂಭದಲ್ಲಿ ಯಕ್ಷಗಾನ ಸಂಘಟಕ ಭುಜಬಲಿ ಧರ್ಮಸ್ಥಳ ಅವರಿಗೆ ‘ಶ್ರೀ ಯಕ್ಷಾಂಜನೇಯ ಪ್ರಶಸ್ತಿ’ ಹಾಗೂ ‘ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವಿಂಶತಿ ಗೌರವ’ವನ್ನು ಭಾಗವತೆ ಭವ್ಯಶ್ರೀ ಕುಲ್ಕುಂದ ಅವರಿಗೆ ಪ್ರದಾನ ಮಾಡಲಾಗುವುದು.ಸಮಾರಂಭದಲ್ಲಿ ಶ್ರೀಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕ ಹರಿನಾರಾಯಣ ಅಸ್ರಣ್ಣ ಆಶೀರ್ವಚನ ನೀಡಲಿದ್ದು, ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ನವೀನ್ ಕುಮಾರ್ ಭಂಡಾತಿ ಪಾಲ್ಗೊಳ್ಳುವರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ದಿವಾಕರ ಆಚಾರ್ಯ ಗೇರುಕಟ್ಟೆ ಅಭಿನಂದನಾ ನುಡಿಗಳನ್ನಾಡುವರು.ಈ ಸಂದರ್ಭ ಬೆಂಗಳೂರಿನ ಆತ್ಯಾಲಯ ಕಲೆ ಮತ್ತು ಸಂಸ್ಕೃತಿ ಅಕಾಡೆಮಿ ವತಿಯಿಂದ ಶಾಂತಾ ಮತ್ತು ಜಸ್ಟೀಸ್ ಜಗನ್ನಾಥ ಶೆಟ್ಟಿ ಮೆಮೋರಿಯಲ್ ಪ್ರಶಸ್ತಿಯನ್ನು ಭಾಗವತ ಹಂಸ ಶ್ರೀ ಪುತ್ತಿಗೆ ರಘುರಾಮ ಹೊಳ್ಳರಿಗೆ ಪ್ರದಾನ ಮಾಡಲಾಗುವುದು.
ಈ ವೇಳೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಉಪಸ್ಥಿತರಿರುವರು. ಕಲಾವಿದ ನಾ.ಕಾರಂತ ಪೆರಾಜೆ ಅಭಿನಂದನಾ ಮಾತುಗಳನ್ನಾಡುವರು. ನಿವೃತ್ತ ಉಪನ್ಯಾಸಕಿ ರೇಖಾ ರೈ ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಆನಂದ ಸವಣೂರು, ಮಹಿಳಾ ಸಂಘದ ಕಾರ್ಯದರ್ಶಿ ಹರಿಣಾಕ್ಷಿ ಜೆ.ಶೆಟ್ಟಿ, ಉಪಸ್ಥಿತರಿದ್ದರು.