ಸಾರಾಂಶ
ಗದಗ:ಮತದಾನದ ಮಹತ್ವ, ಮೌಲ್ಯ ಹಾಗೂ ನೈತಿಕ ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಈಗಾಗಲೇ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಆ ದಿಸೆಯಲ್ಲಿ ಏ. 28 ರಂದು ನಮ್ಮ ನಡೆ ಮತಗಟ್ಟೆ ಕಡೆಗೆ ಕಾರ್ಯಕ್ರಮವನ್ನು ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಹಮ್ಮಿಕೊಳ್ಳಲು ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಭರತ್ ಸೂಚಿಸಿದ್ದಾರೆ.
ಅವರು ನಗರದ ಕೆಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಸ್ವೀಪ್ ಸಮಿತಿಯ ಅಧಿಕಾರಿಗಳ ಜತೆ ಸಂವಾದ ನಡೆಸಿದ ಜಿಪಂ ಸಿಇಒ,ಏ.28 ರಂದು ನಮ್ಮ ನಡೆ ಮತಗಟ್ಟೆ ಕಡೆಗೆ ಕಾರ್ಯಕ್ರಮದ ಸಂದರ್ಭದಲ್ಲಿ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮತಗಟ್ಟೆಗಳನ್ನು ಪರಿಚಯಿಸುವ ಕೆಲಸ ಆಗಬೇಕು. ಜಿಲ್ಲೆಯಲ್ಲಿ 961 ಮತಗಟ್ಟೆ ಕೇಂದ್ರಗಳು ಇದ್ದು, ಅಗತ್ಯ ಮೂಲಸೌಲಭ್ಯಗಳ ಬಗ್ಗೆ ಮತ್ತೊಮ್ಮೆ ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರಲ್ಲಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರವಾರು ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸವಾಗಬೇಕು.ಕಾರ್ಯಕ್ರಮ ಆಯೋಜನೆ ಸಂಬಂಧ ಹತ್ತಿರದ ಪೊಲೀಸ್ ಠಾಣೆಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಬೇಕು.ಎಲ್ಲ ಮುಂಜಾಗ್ರತಾ ಕ್ರಮ ಅನುಸರಿಸಿ ಜತೆಗೆ ಎಲ್ಲ ಇಲಾಖೆಗಳ ಸಹಕಾರ ಪಡೆದು ಕಾರ್ಯಕ್ರಮ ಆಯೋಜನೆಗೆ ಮುಂದಾಗಬೇಕು ಎಂದರು.
ಜಿಪಂ ಉಪಕಾರ್ಯದರ್ಶಿ ಹಾಗೂ ಸ್ವೀಪ್ ಸಮಿತಿ ಜಿಲ್ಲಾ ನೋಡಲ್ ಅಧಿಕಾರಿ ಸಿ.ಬಿ. ದೇವರಮನಿ, ಸ್ವೀಪ್ ಸಮಿತಿ ವತಿಯಿಂದ ಏರ್ಪಡಿಸಲಾಗಿರುವ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು. ಜಿಪಂ ಮುಖ್ಯ ಲೆಕ್ಕಾಧಿಕಾರಿ, ಅಮಿನಸಾಬ್ ಅತ್ತಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎಂ.ಎ.ರಡ್ಡೇರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಎನ್. ಕುರ್ತಕೋಟಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಎಸ್.ಎಸ್. ನೀಲಗುಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿ ಗುಂಜೀಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಪಿ.ವೈ.ಶೆಟ್ಟೆಪ್ಪನವರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.ಮಾನವ ಸರಪಳಿ ಕಾರ್ಯಕ್ರಮ: ಲೋಕಸಭಾ ಚುನಾವಣೆ ಸಂಬಂಧ ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ಮೇ 7 ರಂದು ಮತದಾನ ಜರುಗಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರೇರೇಪಿಸುವ ಸಲುವಾಗಿ ಜಿಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರ ನಿರ್ದೇಶನದಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸ್ವೀಪ್ ಕಾರ್ಯಕ್ರಮವಾಗಿ ಏ.19 ರಂದು ಬೆಳಗ್ಗೆ 9 ಕ್ಕೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಯುವ ಮತದಾರರಿಂದ ಮತದಾನದ ಜಾಗೃತಿ ನಿಮಿತ್ತ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗಿದೆ.