ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಪಟ್ಟಣದ ನೆಹರು ಕ್ರೀಡಾಂಗಣದಲ್ಲಿ ಮಾ.4 ಮತ್ತು 5ರಂದು 2023-24ನೇ ಸಾಲಿನ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸರ್ಕಾರಿ ನೌಕರರ ಸಂಘ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಗಳ ಸಹಯೋಗದಲ್ಲಿ ಕ್ರೀಡಾಕೂಟ ನಡೆಯಲಿದೆ. ನೆಹರೂ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆದರೆ, ಸರ್ಕಾರಿ ನೌಕರರ ಭವನ ಹಾಗೂ ಕುವೆಂಪು ರಂಗಮಂದಿರದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ. ಜಿಲ್ಲೆಯ ಸುಮಾರು 3500ಕ್ಕೂ ಹೆಚ್ಚು ನೌಕರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಬಾರಿಯ ಕ್ರೀಡಾಕೂಟದಲ್ಲಿ ಖೋ ಖೋ ಮತ್ತು ಯೋಗ ಸ್ಪರ್ಧೆ ಸೇರ್ಪಡೆಗೊಳಿಸಲಾಗಿದೆ. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಚಿಸುವ ಸರ್ಕಾರದ ಕಾಯಂ ನೌಕರರು ಮಾ.4ರಂದು ಬೆಳಗ್ಗೆ ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಬಹುದು. ಕ್ರೀಡಾಕೂಟದಲ್ಲಿ ಭಾಗವಹಿಸುವ ಜಿಲ್ಲೆಯ ಸರ್ಕಾರಿ ನೌಕರರಿಗೆ 2 ದಿನದ ಸಾಂದರ್ಭಿಕ ರಜೆ ಸೌಲಭ್ಯವಿದೆ ಎಂದರು.ಮಾ.4ರಂದು ಬೆಳಗ್ಗೆ 10 ಗಂಟೆಗೆ ಕ್ರೀಡಾಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಕ್ರೀಡಾ ಸಚಿವ ಬಿ.ನಾಗೇಂದ್ರ ಕ್ರೀಡಾಜ್ಯೋತಿ ಸ್ವೀಕರಿಸುವರು. ಸಂಸದ ಬಿ.ವೈ.ರಾಘವೇಂದ್ರ ಧ್ವಜಾರೋಹಣ ನೆರವೇರಿಸುವರು. ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಉಪಸ್ಥಿತರಿರುವರು ಎಂದರು.
ಶಾಸಕರಾದ ಬಿ.ಕೆ. ಸಂಗಮೇಶ್ವರ್, ಗೋಪಾಲಕೃಷ್ಣ ಬೇಳೂರು, ಆರಗಜ್ಞಾನೇಂದ್ರ, ಶಾರದಾ ಪೂರ್ಯಾನಾಯ್ಕ್, ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ತು ಸದಸ್ಯರಾದ ಎಸ್.ಎಲ್. ಬೋಜೇಗೌಡ, ಎಸ್.ರುದ್ರೇಗೌಡ, ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಎಂಐಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಸಾಂಬಾರು ಮಂಡಳಿ ಅಧ್ಯಕ್ಷೆ ಜಿ. ಪಲ್ಲವಿ ಭಾಗವಹಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.ಹಲವು ವರ್ಷಗಳ ಹಿಂದೆ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟವು ಶಿವಮೊಗ್ಗದಲ್ಲಿ ನಡೆದಿತ್ತು. ಈ ಬಾರಿ ಮೇನಲ್ಲಿ ಶಿವಮೊಗ್ಗದಲ್ಲಿ ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಮಹಾಸಮ್ಮೇಳನ ಯಶಸ್ವಿಯಾಗಿದೆ. 2.50 ಲಕ್ಷಕ್ಕೂ ಹೆಚ್ಚು ನೌಕರರು ಭಾಗವಹಿಸಿದ್ದರು. ಶಿವಮೊಗ್ಗ ಜಿಲ್ಲೆಯಿಂದ ಸುಮಾರು 15 ಸಾವಿರಕ್ಕೂ ಹೆಚ್ಚು ನೌಕರರು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಆರ್.ಮೋಹನ್‌ಕುಮಾರ್, ಡಿ.ಟಿ. ಕೃಷ್ಣಮೂರ್ತಿ, ಆರ್.ಪಾಪಣ್ಣ, ದಿನೇಶ್, ರಾಜಪ್ಪ ಮತ್ತಿತರರು ಇದ್ದರು.- - - -2ಎಸ್‌ಎಂಜಿಕೆಪಿ04: ಸಿ.ಎಸ್.ಷಡಾಕ್ಷರಿ