ಫೆ.25ರಂದು ಕೋಲಿ ಸಮಾಜದ ಬೃಹತ್ ಸಮಾವೇಶ

| Published : Jan 28 2024, 01:18 AM IST

ಸಾರಾಂಶ

ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸಮಾವೇಶ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಸಮಾವೇಶದಲ್ಲಿ ಪಾಲ್ಗೊಳ್ಳುಲಿದ್ದಾರೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ಕೋಲಿ ಸಮಾಜದ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ಫೆ.25ರಂದು ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಕೋಲಿ ಸಮಾಜದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸಮಾವೇಶ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆಂದರು.

ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣಬಸಪ್ಪ ದರ್ಶನಾಪುರ, ಡಾ.ಶರಣಪ್ರಕಾಶ್ ಪಾಟೀಲ್, ಎನ್.ಎಸ್. ಭೋಸರಾಜು, ಶಿವರಾಜ ತಂಗಡಗಿ, ಸಿಎಂ ಸಲಹೆಗಾರ ಬಿ.ಆರ್. ಪಾಟೀಲ್, ಕಲಬುರಗಿ ಲೋಕಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ನಾಗೇಂದ್ರ, ಕೆಕೆಆರ್‍ಡಿಬಿ ಅಧ್ಯಕ್ಷ ಡಾ.ಅಜಯ್‍ಸಿಂಗ್, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ಅಧ್ಯಕ್ಷೆ ಕನೀಜ್ ಫಾತಿಮಾ, ಶಾಸಕರಾದ ಎಂ.ವೈ.ಪಾಟೀಲ್ ಹಾಗೂ ಅಲ್ಲಮಪ್ರಭು ಪಾಟೀಲ್ ಸೇರಿದಂತೆ ಕೋಲಿ ಸಮಾಜದ ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಮಾವೇಶಕ್ಕೂ ಮುನ್ನ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಸಭೆಗಳನ್ನು ಕೈಗೊಳ್ಳಲಾಗುವುದು. ಅದಕ್ಕೂ ಮುನ್ನ ಕಲಬುರಗಿ ನಗರದಲ್ಲಿ ಕೈಗೊಳ್ಳುವ ಪೂರ್ವಭಾವಿ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ಎಲ್ಲ 31 ಜಿಲ್ಲೆಗಳ ಕೋಲಿ ಸಮಾಜದ ಮುಖಂಡರು ಪಾಲ್ಗೊಂಡು ಸಮಾವೇಶದ ಯಶಸ್ಸಿಗಾಗಿ ತಮ್ಮ ಸಲಹೆಗಳನ್ನು ನೀಡಲಿದ್ದಾರೆಂದರು.

ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರುವುದು, ಸಮಾಜಕ್ಕೆ ನ್ಯಾಯಯುತವಾಗಿ ಲಭಿಸಬೇಕಿರುವ ಎಲ್ಲ ಸವಲತ್ತುಗಳನ್ನು ಒದಗಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರವನ್ನು ಒತ್ತಾಯಿಸುವುದು, ಕೋಲಿ ಸಮಾಜಕ್ಕೆ ಮೀನುಗಾರಿಕೆ ಉದ್ಯಮದಲ್ಲಿ ಶೇ.90ರಷ್ಟು ಮೀಸಲಾತಿ ನೀಡುವಂತೆ ತಾಕೀತು ಮಾಡುವುದು ಸಮಾವೇಶದ ಪ್ರಮುಖ ಆಶಯ ಆಗಿರಲಿದೆ ಎಂದರು.

ಜೊತೆಗೆ, ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೇಂದ್ರಕ್ಕೆ ನಿಯೋಗ ಕೊಂಡೊಯ್ಯುವ ಕುರಿತು ಸಮಾವೇಶದಲ್ಲಿ ಒತ್ತಡ ಹೇರಲಾಗುವುದು. ಈಗಾಗಲೇ ರಾಜ್ಯದ ವಿಧಾನಸಭೆ ಮತ್ತು ವಿಧಾನ ಪರಿಷತ್‍ನಲ್ಲಿ ಈ ಕುರಿತು ವ್ಯಾಪಕ ಚರ್ಚೆ ಸಹ ನಡೆದಿದೆ ಎಂದು ಕಮಕನೂರ ಪ್ರಸ್ತಾಪಿಸಿದರು. ವಿಜಯಕುಮಾರ್ ಹದಗಲ್ ಹಾಗೂ ಮಹೇಶ್ ಕಲಗುರ್ತಿ ಸುದ್ದಿಗೋಷ್ಠಿಯಲ್ಲಿದ್ದರು.