ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಜ.10ರಂದು ಕೆಸ್ತೂರು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಚಾಕನಕೆರೆ ಗ್ರಾಮದ ಕೆರೆಗೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಬುಧವಾರ ಹೇಳಿದರು.ಪಟ್ಟಣದ ತಮ್ಮ ನಿವಾಸದಲ್ಲಿ ಜೆಡಿಎಸ್ ಮುಖಂಡರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿ, ಜ.10ರಂದು ಮಧ್ಯಾಹ್ನ 12 ಗಂಟೆಗೆ ಜಿಪಂ ವ್ಯಾಪ್ತಿಯ ಮಲ್ಲನಕುಪ್ಪೆ ಗೇಟ್ ಬಳಿಗೆ ಪ್ರಥಮವಾಗಿ ಆಗಮಿಸುವ ಸಚಿವ ಕುಮಾರಸ್ವಾಮಿ ಅವರನ್ನು ಪಕ್ಷದ ಮುಖಂಡರು, ಅಸಂಖ್ಯಾತ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಲಿದ್ದಾರೆ ಎಂದರು.
ನಂತರ ಮಲ್ಲನಕುಪ್ಪೆ ಗೇಟ್ ಬಳಿಯಿಂದ ಬೃಹತ್ ಮೆರವಣಿಗೆಯಲ್ಲಿ ಚಾಕನಕೆರೆ ಗ್ರಾಮದವರೆಗೆ ಕರೆದೊಯ್ಯಲಾಗುವುದು. ನಂತರ ಚಾಕನಕೆರೆ ಕೆರೆಗೆ ಸಚಿವ ಕುಮಾರಸ್ವಾಮಿ ಬಾಗಿನ ಅರ್ಪಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದರು.ನಂತರ ಮಲ್ಲನಕುಪ್ಪೆ ಗೇಟ್ ಬಳಿ ನಿರ್ಮಿಸಿರುವ ಬೃಹತ್ ವೇದಿಕೆಯಲ್ಲಿ ಸಚಿವ ಕುಮಾರಸ್ವಾಮಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದರು.
ಈ ವೇಳೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಕೆ.ಸುರೇಶ್ ಗೌಡ, ಡಾ. ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ಕೆ. ಟಿ.ಶ್ರೀಕಂಠೇಗೌಡ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಡಿ.ರಮೇಶ್, ತಾಲೂಕು ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಳಿಯಪ್ಪ, ಮುಖಂಡರಾದ ಕೆ. ಟಿ.ರಾಜಣ್ಣ ಇದ್ದರು.
ಜ.12ರಂದು ರಾಷ್ಟ್ರೀಯ ಯುವ ದಿನಾಚರಣೆಮಂಡ್ಯ: ನಗರದ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಜ.12 ರಂದು ರಾಷ್ಟ್ರೀಯ ಯುವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್-ನೆಹರು ಯುವ ಕೇಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ರಾಮಕೃಷ್ಣ ವಿವೇಕಾನಂದ ಆಶ್ರಮ ಆಶ್ರಯದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಕೇಂದ್ರ ಸಚಿವ , ಸಂಸದ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸುವರು.
ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ, ರಾಮಕೃಷ್ಣ ವಿವೇಕಾನಂದ ಆಶ್ರಮದ ಮುಖ್ಯಸ್ಥ ಸ್ವಾಮಿ ನಿರ್ಮಲಾನಂದ ಮಹಾರಾಜ್ ಸೇರಿದಂತೆ ಶಾಸಕರು, ಪರಿಷತ್ ಸದಸ್ಯರು, ನಿಗಮ ಮಂಡಳಿ, ಹಾಗೂ ಸ್ಥಳೀಯ ಸಂಸ್ಥೆ ಅಧ್ಯಕ್ಷರು, ಅಧಿಕಾರಿಗಳು ಭಾಗವಹಿಸುವರು.