ಜೂನ್‌ 3ರಂದು ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ

| Published : May 04 2024, 12:33 AM IST

ಜೂನ್‌ 3ರಂದು ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ
Share this Article
  • FB
  • TW
  • Linkdin
  • Email

ಸಾರಾಂಶ

ಮೇ 9ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 20 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದ್ದು, ಜೂನ್ 6ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗಾಗಿ ಚುನಾವಣಾ ಕಾರ್ಯಸೂಚಿಯನ್ನು ಹೊರಡಿಸಿದೆ.

ಮೇ 9ರಂದು ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನವಾಗಿದೆ. ಮೇ 17ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 20 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದ್ದು, ಜೂನ್ 6ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ.

ಸದರಿ ಚುನಾವಣೆಗೆ ಸ್ಪರ್ಧಿಸುವ ವ್ಯಕ್ತಿಗಳ ವಯಸ್ಸು 30 ವರ್ಷಗಳಿಗಿಂತ ಕಡಿಮೆ ಇರಬಾರದು. ಅವರು ಕರ್ನಾಟಕದ ಯಾವುದಾದರೂ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು. ಅವರು ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು ಹಾಗೂ ಚಾಲ್ತಿಯಲ್ಲಿರುವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವ ಬಗ್ಗೆ ಸಂಬಂಧಿಸಿದ ಮತದಾರರ ನೋಂದಣಾಧಿಕಾರಿ / ಸಹಾಯಕ ಮತದಾರರ ನೋಂದಣಾಧಿಕಾರಿಗಳಿಂದ ಪಡೆದ ಮತದಾರರ ಪಟ್ಟಿಯ ದೃಢೀಕೃತ ನಕಲನ್ನು ಹಾಜರುಪಡಿಸಬೇಕು.

ನೈರುತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಾಯಿತವಾಗಿರುವವರು ಮಾತ್ರ ಈ ಚುನಾವಣೆಯಲ್ಲಿ ಮತದಾರರಾಗಿರುತ್ತಾರೆ.

ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದು, ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ. ನಾಮಪತ್ರಗಳ ನಮೂನೆಗಳನ್ನು ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಇವರ ಕಚೇರಿಯಿಂದ ಪಡೆದುಕೊಳ್ಳಬಹುದಾಗಿದೆ.

ಚುನಾವಣೆಗೆ ಸ್ಪರ್ಧಿಸಲಿ ಇಚ್ಛಿಸುವ ಅಭ್ಯರ್ಥಿಗಳು ಮೇ 9ರಿಂದ 16ರ ವರೆಗೆ (ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ) ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಮೇ 10ರಿಂದ 12ರ ವರೆಗೆ ನೆಗೋಷಿಯಬಲ್ ಇನ್‌ಸ್ಟ್ರುಮೆಂಟ್ ಆಕ್ಟ್ ಮೇರೆಗೆ ಸಾರ್ವತ್ರಿಕ ರಜಾ ದಿನವಾಗಿರುವುದರಿಂದ ಆ ದಿನಗಳಂದು ನಾಮಪತ್ರ ಸ್ವೀಕರಿಸಲಾಗುವುದಿಲ್ಲ.

ನಾಮಾಂಕನ ಪತ್ರಗಳನ್ನು ಚುನಾವಣಾಧಿಕಾರಿಗಳಾದ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಇವರಿಗೆ ಮಾತ್ರ ಸಲ್ಲಿಸಬೇಕು. ಅಭ್ಯರ್ಥಿಗಳು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿರುವ ನಮೂನೆಯಲ್ಲಿ ನಾಮಪತ್ರ ಮತ್ತು ನೋಟರಿಯವರಿಂದ ಪ್ರಮಾಣೀಕರಿಸಿದ ಪ್ರಮಾಣ ಪತ್ರವನ್ನು ನಾಮಪತ್ರದೊಂದಿಗೆ ಲಗತ್ತಿಸಿ, ಸಲ್ಲಿಸಬೇಕು.

ನಾಮಪತ್ರಗಳನ್ನು ಸಲ್ಲಿಸುವ ಅಭ್ಯರ್ಥಿಗಳು ರಾಜಕೀಯ ಪಕ್ಷಗಳಿಂದ ಸ್ಪರ್ಧಿಸಲು ಇಚ್ಛಿಸುವ ಸಂಬಂಧದಲ್ಲಿ ಆಯೋಗ ನಿಗದಿಪಡಿಸಿರುವ ಪ್ರಪತ್ರ ಎಎ, ಬಿಬಿಗಳನ್ನು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾದ ಮೇ 16ರ ಮಧ್ಯಾಹ್ನ 3 ಗಂಟೆಯ ಒಳಗಾಗಿ ಸಲ್ಲಿಸಬೇಕು. ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಚುನಾವಣಾಧಿಕಾರಿಗಳ ಕಚೇರಿಗೆ ಅಭ್ಯರ್ಥಿ ಹಾಗೂ ಇತರೆ 4 ಜನ ಅಂದರೆ ಅವರ ಸೂಚಕರು ಸೇರಿದಂತೆ ಒಟ್ಟು 5 ಜನರಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳೂ ಆಗಿರುವ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.