ಸಾರಾಂಶ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆ । ಜಿಲ್ಲೆಯಿಂದ 25 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ ನಿರೀಕ್ಷೆ
ಕನಡಪ್ರಭ ವಾರ್ತೆ ಶಿವಮೊಗ್ಗಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ವತಿಯಿಂದ ಡಿ.10ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಘದ 75 ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಬೃಹತ್ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದ ಸಂಘದ ಜಿಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಚಿತ್ರನಟ ಡಾ.ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಶಾಸಕ ಕುಮಾರ್ ಬಂಗಾರಪ್ಪ, ಎಚ್. ಹಾಲಪ್ಪ, ಬಿ.ಸ್ಚಾಮಿರಾವ್, ಡಾ.ಜಿ.ಡಿ.ನಾರಾಯಣಪ್ಪ, ಈಡಿಗ ಮಹಾಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಶ್ರೀ ರೇಣುಕಾನಂದ ಸ್ವಾಮೀಜಿ, ಕಾರ್ತಿಕೇಯ ಪೀಠದ ಶ್ರೀ ಯೋಗೇಂದ್ರ ಅವಧೂತ, ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಹಾಗೂ ಸಮಾಜದ ಹಿರಿಯ ಮುಖಂಡರು ಸಮಾವೇಶದಲ್ಲಿ ಭಾಗವಹಿಸಿಸಲಿದ್ದಾರೆ. ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದ ಅಧ್ಯಕ್ಷ ಡಾ.ಎಂ.ತಿಮ್ಮೇಗೌಡರವರು ವಹಿಸುವರು. ಬೆಂಗಳೂರಿನಲ್ಲಿ ನಡೆಯುವ ಈ ಸಮಾವೇಶದಲ್ಲಿ ಜಿಲ್ಲೆಯಿಂದ 25 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು.ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಈಡಿಗ ಸಮುದಾಯದವರಿದ್ದಾರೆ. ಆದರೂ ರಾಜಕೀಯ, ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಈ ನಾಡು ಕಟ್ಟುವ ಕಾಯದಲ್ಲಿ ಸಮುದಾಯದ ಪಾತ್ರ ಹಿರಿದುದಾಗಿದೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರ ರಾಜಕೀಯ ಇಚ್ಛಾಶಕ್ತಿಯಿಂದಾಗಿ ಜನರ ಹಾಗೂ ರೈತಪರ ಯೋಜನೆಗಳನ್ನು ರೂಪಿಸಿ ಆರ್ಥಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಸಮುದಾಯಕ್ಕೆ ಶಕ್ತಿ ನೀಡುವ ಕೆಲಸವಾಗಿದೆ. ಆದರೂ, ಶರಾವತಿ, ಚಕ್ರ, ವರಾಹಿ, ಸಾವೆಹಲ್ಕು ಮುಳುಗಡೆ ಸಂತ್ರಸ್ತರ ಸಮಸ್ಯೆ, ಬಗರ್ ಹುಕುಂ ರೈತರಿಗೆ ಹಕ್ಕುಪತ್ರ, ಈಡಿಗ ಅಭಿವೃದ್ಧಿ ನಿಗಮ, ಸಮುದಾಯದ ಶಕ್ತಿ ಕೇಂದ್ರ ಶ್ರೀಕ್ಷೇತ್ರ ಸಿಗಂದೂರು ಭೂ ಸಮಸ್ಯೆಯಂತಹ ಇನ್ನೂ ಹಲವು ಗಂಭೀರ ಸಮಸ್ಯೆಗಳಿಗೆ ಪರಹಾರ ನೀಡುವಂತೆ ಸಮಾವೇಶದಲ್ಲಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಪ್ರಮುಖರಾದ ಕಲಗೋಡು ರತ್ನಾಕರ್, ಜಿ.ಡಿ.ಮಂಜುನಾಥ್, ಗಣಪತಿ ಹುಲ್ತಿಕೊಪ್ಪ, ರವಿ, ರಂಗಪ್ಪ, ಧರ್ಮರಾಜ್, ರಘುಪತಿ, ಪ್ರವೀಣ್ ಮತ್ತಿತರರು ಇದ್ದರು.