ಚಿಕ್ಕಮಗಳೂರುಜನರ ಮನೆಬಾಗಿಲಿಗೆ ತೆರಳಿ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಪ್ರಜಾಸೇವಾ ಆಂದೋಲನದ ಮೂಲಕ ಮಾಡಲಾಗುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
- ಕುವೆಂಪು ಶತಮಾನೋತ್ಸವ ಸರ್ಕಾರಿ ಶಾಲೆ ಆವರಣದಲ್ಲಿ ಪ್ರಜಾಸೇವಾ ಆಂದೋಲನ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜನರ ಮನೆಬಾಗಿಲಿಗೆ ತೆರಳಿ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಪ್ರಜಾಸೇವಾ ಆಂದೋಲನದ ಮೂಲಕ ಮಾಡಲಾಗುತ್ತಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ಚಿಕ್ಕಮಗಳೂರಿನ ಅಲ್ಲಂಪುರ ಗ್ರಾಪಂ ವ್ಯಾಪ್ತಿಯ ಕುವೆಂಪು ಶತಮಾನೋತ್ಸವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಉದ್ಘಾಟಿಸಿ ಮಾತನಾಡಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪ್ರಜಾಸೇವಾ ಆಂದೋಲನದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಒಂದೇ ಸೂರಿನಡಿ ಸೇರಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದಾರೆ. ಅರ್ಜಿಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸುವ ಜತೆಗೆ, ಪರಿಶೀಲನೆ ಅಗತ್ಯ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ರವಾನಿಸಿ ಕಡ್ಡಾಯವಾಗಿ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜನರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದರು.ಸರ್ಕಾರ ಬಡವರ ಬದುಕು ಹಸನಾಗಿಸಲು ಪಂಚ ಗ್ಯಾರಂಟಿ ಜಾರಿಗೆ ತರಲಾಗಿದೆ. ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಜನರ ಆರ್ಥಿಕ ಶಕ್ತಿ ಹೆಚ್ಚಿಸಿವೆ. ಚಿಕ್ಕಮ ಗಳೂರು ಕ್ಷೇತ್ರವೊಂದರಲ್ಲೇ ಇದುವರೆಗೆ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ₹430 ಕೋಟಿ ಜಮೆಯಾಗಿದೆ. ದೇಶದಲ್ಲೇ ಅಧಿಕಾರಕ್ಕೆ ಬಂದ ಐದು ತಿಂಗಳೊಳಗೆ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿದ ಸರ್ಕಾರ ನಮ್ಮದು ಎಂದು ಹೇಳಿದರು.ಗ್ಯಾರಂಟಿಗಳ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಲಾಗುತ್ತಿದೆ. ಬಡವರಿಗೆ ಉತ್ತಮ ಚಿಕಿತ್ಸೆ ದೊರೆಯುವ ಉದ್ದೇಶದಿಂದ ಮುಂದಿನ ಒಂದು ವರ್ಷದೊಳಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಲೋಕಾರ್ಪಣೆ ಗೊಳ್ಳಲಿವೆ. ಮಾನವ-ಪ್ರಾಣಿ ಸಂಘರ್ಷ ತಡೆಗೆ ಈ ತಿಂಗಳ 25 ಅಥವಾ 26ರಂದು ಅರಣ್ಯ ಸಚಿವರು ಸಭೆ ಕರೆದಿದ್ದಾರೆ. ಭದ್ರಾ ಅಭಯಾರಣ್ಯಕ್ಕೆ ಕಾಡುಪ್ರಾಣಿಗಳನ್ನು ಬಿಡಲು ಅವಕಾಶ ನೀಡುವುದಿಲ್ಲ. ಸೂಕ್ತ ಸ್ಥಳಾವಕಾಶವಿರುವ ಪ್ರದೇಶಗಳಿಗೆ ಅವುಗಳನ್ನು ಸ್ಥಳಾಂತರಿಸುವಂತೆ ಮನವಿ ಮಾಡಲಾಗುವುದು ಎಂದರು.ಗ್ರಾಮಸ್ಥರು ಸುತ್ತಮುತ್ತಲಿನ ಕೆರೆಗಳ ಸರ್ವೇ ನಡೆಸಿ ಒತ್ತುವರಿ ತೆರವಿಗೆ ಮನವಿ ಮಾಡಿದಾಗ ಶಾಸಕರು, ಒಂದು ವಾರದೊಳಗೆ ಸರ್ವೇ ನಡೆಸಿ ಒತ್ತುವರಿ ತೆರವಿಗೆ ಪಿಆರ್ಇಡಿ ಎಂಜಿನಿಯರ್ಗೆ ಸೂಚಿಸಿದರು. ಕೃಷ್ಣ ಬಿನ್ ನಾರಾಯಣ ಅವರು ಪಕ್ಕಾ ಪೋಡಿ ಹಾಗೂ ಗ್ರಾಮಸ್ಥರು ಹಕ್ಕುಪತ್ರಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸಿದರು.ತಹಸೀಲ್ದಾರ್ ರೇಷ್ಮಾಶೆಟ್ಟಿ, ಜಿಪಂ ಮುಖ್ಯ ಯೋಜನಾಧಿಕಾರಿ ರಾಜಗೋಪಾಲ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ತಿರುಮಲೇಶ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಮಂಗಳ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಮ್ಮರಾಜು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.