ಸಾರಾಂಶ
ಕನ್ನಡಪ್ರಭ ವಾರ್ತೆ ಮಣಿಪಾಲಒನಕೆ ಓಬವ್ವಳ ನಿಸ್ವಾರ್ಥ ನಾಡ ಪ್ರೇಮ, ವೀರರ ನಾಡೆನಿಸಿದ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಶತ್ರುಗಳ ಆಕ್ರಮಣದಿಂದ ರಕ್ಷಿಸಲು ಒನಕೆಯನ್ನೇ ಆಯುಧವನ್ನಾಗಿ ಹಿಡಿದು ಶತ್ರುಗಳನ್ನು ಸಂಹಾರ ಮಾಡಿದ್ದರಿಂದ ಚರಿತ್ರೆಯಲ್ಲಿ ಅಜರಾಮರಳಾಗಿ, ಸ್ತ್ರೀ ಶಕ್ತಿಯ ಸಂಕೇತವಾಗಿ ಜನಮಾನಸದಲ್ಲಿ ಇಂದಿಗೂ ಅಚ್ಚಳಿಯದೇ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.ಅವರು ಸೋಮವಾರ ಇಲ್ಲಿನ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಆಶ್ರಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆಯನ್ನು ಉದ್ಘಾಟಿಸಿ, ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಒನಕೆ ಓಬವ್ವ ಅವರ ಕುರಿತು ಉಪನ್ಯಾಸ ನೀಡುತ್ತಾ, ವೀರ ವನಿತೆ ಓಬವ್ವ ಅವರ ಶೌರ್ಯ, ಮಾತೃ ಭೂಮಿಯ ಮೇಲಿನ ಭಕ್ತಿ ಅನನ್ಯವಾದದ್ದು. ಅವರ ಧೈರ್ಯ, ಸಾಹಸ ಮಹಿಳೆಯರಿಗೆ ಮಾತ್ರವಲ್ಲದೇ ಪ್ರತಿಯೊಬ್ಬರಿಗೂ ಸ್ಫೂರ್ತಿ ನೀಡುತ್ತದೆ ಎಂದು ಹೇಳಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯ ನರಸಿಂಹಮೂರ್ತಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಡಳಿತದ ಸಿಬ್ಬಂದಿ ಹಾಗೂ ಮತ್ತಿತರರು ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.