ಸ್ವಾಭಿಮಾನದ ಸಂಕೇತವೇ ಒನಕೆ ಓಬವ್ವ

| Published : Nov 12 2025, 01:15 AM IST

ಸಾರಾಂಶ

ಧೈರ್ಯ, ದೇಶಭಕ್ತಿ ಮತ್ತು ಮಹಿಳಾ ಶೌರ್ಯದ ಸಂಕೇತವೇ ಒನಕೆ ಓಬವ್ವ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ, ತುಮಕೂರು

ಧೈರ್ಯ, ದೇಶಭಕ್ತಿ ಮತ್ತು ಮಹಿಳಾ ಶೌರ್ಯದ ಸಂಕೇತವೇ ಒನಕೆ ಓಬವ್ವ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಭಿಪ್ರಾಯಪಟ್ಟರು.

ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರದಲ್ಲಿ ಏರ್ಪಡಿಸಿದ್ದ ಒನಕೆ ಓಬವ್ವ ಜಯಂತೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಒನಕೆ ಓಬವ್ವ ಅವರ ತ್ಯಾಗ ಮತ್ತು ಸಾಹಸವು ಇಂದಿನ ಪೀಳಿಗೆಗೆ ಸ್ಫೂರ್ತಿಯಾಗಿದ್ದು, ಸಮಾಜದಲ್ಲಿ ಮಹಿಳೆಯರ ಗೌರವ ಮತ್ತು ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಕುವೆಂಪು ವಿಶ್ವವಿದ್ಯಾನಿಲಯದ ಕನ್ನಡ ಭಾರತಿ ನಿರ್ದೇಶಕ ಪ್ರೊ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಉಪನ್ಯಾಸ ನೀಡುತ್ತಾ, ಕರ್ನಾಟಕದ ಇತಿಹಾಸದಲ್ಲಿ ಓಬವ್ವ ತನ್ನ ಸ್ವಾಮಿನಿಷ್ಠೆ ತೋರಿ ನಾಡನ್ನು ರಕ್ಷಿಸುವ ಮೂಲಕ ಅಜರಾಮರಳಾಗಿದ್ದಾಳೆ ಎಂದು ತಿಳಿಸಿದ ಅವರು, ಓಬವ್ವದ ಸಾಹಸ ಗಾಥೆಯನ್ನು ಎಳೆ-ಎಳೆಯಾಗಿ ಬಿಡಿಸಿ ವಿವರಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಹಿಮಂತರಾಜು ಜಿ., ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು.ಮಿರ್ಜಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಬಿ.ಜಿ.ಎಸ್ ವೃತ್ತದಿಂದ ಎಂ.ಜಿ.ರಸ್ತೆ, ಗುಂಚಿ ಚೌಕ, ಚರ್ಚ್ ವೃತ್ತ, ಅಶೋಕ ರಸ್ತೆ ಮೂಲಕ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೂ ಜಾನಪದ ಕಲಾತಂಡಗಳ ಪ್ರದರ್ಶನದೊಂದಿಗೆ ಅಲಂಕೃತ ಬೆಳ್ಳಿರಥದಲ್ಲಿ ಒನಕೆ ಓಬವ್ವ ಅವರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.