ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ
ಮಣಿಪಾಲ: ಕನ್ನಡನಾಡು ಕಟ್ಟುವಲ್ಲಿ ಅನೇಕ ಮಹಿಳೆಯರು ಕೊಡುಗೆ ನೀಡಿದ್ದಾರೆ. ಅಂತಹ ವೀರವನಿತೆ ಓಬವ್ವ ಎಂಬ ಹೆಸರು ಕೇಳಿದರೆ ಮೈ ರೋಮಾಂಚನವಾಗುತ್ತದೆ. ಕಿಚ್ಚು, ಧೈರ್ಯ, ಸಾಹಸಕ್ಕೆ ಹೆಸರುವಾಸಿಯಾದ ಆಕೆ, ಶತ್ರುಗಳ ದಾಳಿಯಿಂದ ಚಿತ್ರದುರ್ಗ ಕೋಟೆಯನ್ನು ರಕ್ಷಿಸುವ ಮೂಲಕ ನಾರೀ ಶಕ್ತಿಯ ಪ್ರತೀಕವಾಗಿ, ಮಹಿಳೆಯರಿಗೆ ಪ್ರೇರಣೆಯಾಗಿ ಚಿರಸ್ಥಾಯಿಯಾಗಿದ್ದಾರೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು. ಅವರು ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ,ಓಬವ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಹೆಣ್ಣು ತಮ್ಮ ಆತ್ಮರಕ್ಷಣೆಯ ಜೊತೆಗೆ ದೇಶರಕ್ಷಣೆಯನ್ನು ಮಾಡಬಹುದು ಎನ್ನುವುದನ್ನು ತೋರಿಸಿದ ಓಬವ್ವರ ಸಮರ್ಪಣಾಭಾವ ಎಲ್ಲರಿಗೂ ಮಾದರಿ. ಆದ್ದರಿಂದ ಎಲ್ಲಾ ಪೋಷಕರ ತಮ್ಮ ಮಕ್ಕಳಿಗೆ ದೈಹಿಕ ಕಸರತ್ತನ್ನು ಕಲಿಸಬೇಕು ಎಂದರು. ಓಬವ್ವರ ಕುರಿತು ಉಪನ್ಯಾಸ ನೀಡಿದ ನಿವೃತ್ತ ಕನ್ನಡ ಉಪನ್ಯಾಸಕಿ ನಳಿನಾದೇವಿ ಎಂ.ಆರ್. ಉಪನ್ಯಾಸ ನೀಡಿದರು. ಜಿಪಂ ಉಪಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ಉಪತಹಸೀಲ್ದಾರ್ ನವನೀತ್ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಸಿಬ್ಬಂದಿ ವರ್ಷಾ ಬಿ. ಕೋಟ್ಯಾನ್ ನಿರೂಪಿಸಿ ವಂದಿಸಿದರು.