ಕನ್ನಡಪ್ರಭ ವಾರ್ತೆ ಸಕಲೇಶಪುರ

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಗುಳಗಳಲೆ ಸಮೀಪ ಶನಿವಾರ ನಡೆದಿದೆ.ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಬರಗೂರು ಗ್ರಾಮದ ಧನುಷ್ (24) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಬೆಂಗಳೂರು ನಗರದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಧನುಷ್ ಸೇರಿದಂತೆ ಸುಮಾರು 10 ಮಂದಿ ಸ್ನೇಹಿತರು ಧರ್ಮಸ್ಥಳ ಹಾಗೂ ಮಂಗಳೂರು ಪ್ರವಾಸಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಗುಳಗಳಲೆ ಸಮೀಪ ಕಾರು ತಲುಪಿದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಾಜಕಕ್ಕೆ ಅಪ್ಪಳಿಸಿದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ. ಅಪಘಾತದ ತೀವ್ರತೆಗೆ ಧನುಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ತಕ್ಷಣ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹಾಸನ ಹಾಗೂ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ವಾಹನ ಸಂಚಾರ ವ್ಯತ್ಯಯ ಉಂಟಾಯಿತು. ಸ್ಥಳಕ್ಕೆ ನಗರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಇದೇ ಪ್ರದೇಶದಲ್ಲಿ ಕಳೆದ ಎರಡು ವರ್ಷಗಳಲ್ಲಿ ಹಲವು ಅಪಘಾತಗಳು ಸಂಭವಿಸಿ ಒಂಬತ್ತು ಮಂದಿ ಜೀವ ಕಳೆದುಕೊಂಡಿದ್ದಾರೆ. ರಸ್ತೆ ಕಾಮಗಾರಿಯ ಅವೈಜ್ಞಾನಿಕ ನಿರ್ಮಾಣವೇ ಅಪಘಾತಗಳಿಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.