ಮಹರ್ಷಿ ವಾಲ್ಮೀಕಿ, ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧಿ ಸೇರಿದಂತೆ ಮಹನೀಯರ ಜಯಂತಿಗಳನ್ನು ಆಚರಿಸುವುದು ಅವರ ವಿಚಾರಧಾರೆಗಳನ್ನು ತಿಳಿದುಕೊಳ್ಳುವುದಕ್ಕೆ ಮಾತ್ರ ಸೀಮಿತವಾಗಬಾರದು. ಅವರು ತೋರಿದ ಆದರ್ಶದ ಹಾದಿಯಲ್ಲಿ ಪ್ರಾಮಾಣಿಕವಾಗಿ ನಡೆಯಲು ಪ್ರಯತ್ನಿಸಬೇಕು. ಆಗ ಮಾತ್ರ ಜಯಂತಿ ಆಚರಣೆಗೆ ನಿಜವಾದ ಅರ್ಥ ಮತ್ತು ಗೌರವ ದೊರೆಯುತ್ತದೆ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.
- ಮಹರ್ಷಿ ವಾಲ್ಮೀಕಿ ಜಯಂತಿ । ಶ್ರೀರಾಮ ಮಂದಿರ ಸಮೀಪವೇ ವಾಲ್ಮೀಕಿ ದೇಗುಲ ನಿರ್ಮಾಣವಾಗಲಿ: ಸಚಿವ- - -
ಕನ್ನಡಪ್ರಭ ವಾರ್ತೆ ದಾವಣಗೆರೆಮಹರ್ಷಿ ವಾಲ್ಮೀಕಿ, ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧಿ ಸೇರಿದಂತೆ ಮಹನೀಯರ ಜಯಂತಿಗಳನ್ನು ಆಚರಿಸುವುದು ಅವರ ವಿಚಾರಧಾರೆಗಳನ್ನು ತಿಳಿದುಕೊಳ್ಳುವುದಕ್ಕೆ ಮಾತ್ರ ಸೀಮಿತವಾಗಬಾರದು. ಅವರು ತೋರಿದ ಆದರ್ಶದ ಹಾದಿಯಲ್ಲಿ ಪ್ರಾಮಾಣಿಕವಾಗಿ ನಡೆಯಲು ಪ್ರಯತ್ನಿಸಬೇಕು. ಆಗ ಮಾತ್ರ ಜಯಂತಿ ಆಚರಣೆಗೆ ನಿಜವಾದ ಅರ್ಥ ಮತ್ತು ಗೌರವ ದೊರೆಯುತ್ತದೆ ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್.ಬಸವಂತಪ್ಪ ಹೇಳಿದರು.
ನಗರದ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಸಾರ್ವಜನಿಕ ವಾಲ್ಮೀಕಿ ಜಯಂತ್ಯುತ್ಸವ ಸಮಿತಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ರಾಮಾಯಣ ಮಹಾಕಾವ್ಯವನ್ನು ಜಗತ್ತಿಗೆ ಕೊಡುಗೆಯಾಗಿ ನೀಡಿದ ಮಹರ್ಷಿ ವಾಲ್ಮೀಕಿ ಅವರು ಶ್ರೀರಾಮ, ಸೀತೆ ಹಾಗೂ ಹನುಮಂತನಂತಹ ಮಹಾನ್ ಪಾತ್ರಗಳನ್ನು ಪರಿಚಯಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿರುವಂತೆಯೇ ಅದರ ಸಮೀಪದಲ್ಲೇ ಮಹರ್ಷಿ ವಾಲ್ಮೀಕಿ ಅವರ ದೇವಾಲಯ ನಿರ್ಮಿಸಿ ಗೌರವಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
ಸಂವಿಧಾನ ನೀಡಿರುವ ಶಿಕ್ಷಣದ ಹಕ್ಕನ್ನು ಸಮರ್ಥವಾಗಿ ಬಳಸಿಕೊಂಡು ಪ್ರತಿಯೊಬ್ಬರೂ ಉನ್ನತ ಶಿಕ್ಷಣ ಪಡೆಯಬೇಕು. ಡಾ. ಬಿ.ಆರ್. ಅಂಬೇಡ್ಕರ್ ನೀಡಿದ ಶಿಕ್ಷಣದ ಮಹತ್ವದಿಂದ ಅನೇಕ ಕುಟುಂಬಗಳು ಸಾಮಾಜಿಕವಾಗಿ ಮುನ್ನೆಲೆಗೆ ಬಂದಿವೆ. ಪ್ರತಿಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆತಾಗ ಮಾತ್ರ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.ಊರಿನ ರಕ್ಷಣೆಯಲ್ಲಿ ನಾಯಕ ಸಮುದಾಯ ಹಾಗೂ ಸ್ವಚ್ಛತೆ ಮತ್ತು ಆರೋಗ್ಯ ಕಾಪಾಡುವಲ್ಲಿ ಮಾದಿಗ ಸಮುದಾಯದ ಕೊಡುಗೆ ಮಹತ್ವದ್ದಾಗಿದೆ. ಎರಡೂ ಸಮುದಾಯಗಳು ಸೋದರರಂತೆ ಬದುಕಬೇಕು. ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಶೀಘ್ರ ಪ್ರಧಾನಿ ಭೇಟಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಕಾನೂನು ತೊಡಕುಗಳನ್ನು ನಿವಾರಿಸಲು ಸರ್ಕಾರ ಬದ್ಧವಾಗಿದೆ. ಶೇ.50ರ ಮೀಸಲಾತಿ ಮಿತಿಗೆ ಸಂಬಂಧಿಸಿದ ಕಾನೂನಾತ್ಮಕ ಅಡೆತಡೆಗಳನ್ನು ನಿವಾರಿಸಿ, ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಹಿರಿಯ ಸಚಿವರು ಚರ್ಚಿಸಿದ್ದಾರೆ. ಈ ಸಂಬಂಧ ಮೀಸಲಾತಿ ವ್ಯವಸ್ಥೆಯನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸುವ ಕುರಿತು ಸರ್ವಪಕ್ಷ ನಾಯಕರೊಂದಿಗೆ ಕೇಂದ್ರ ಗೃಹ ಸಚಿವರು ಹಾಗೂ ಪ್ರಧಾನಮಂತ್ರಿ ಅವರನ್ನು ಶೀಘ್ರದಲ್ಲೇ ಭೇಟಿ ಮಾಡಲಾಗುವುದು ಎಂದು ತಿಳಿಸಿದರು.
ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಯಾವುದೇ ಸಮುದಾಯ ಸರ್ವತೋಮುಖ ಅಭಿವೃದ್ಧಿ ಸಾಧಿಸಲು ಸ್ಪಷ್ಟ ಗುರಿ ಹಾಗೂ ಸೂಕ್ತ ಮಾರ್ಗದರ್ಶನ ಅಗತ್ಯ. ಈ ಹಿನ್ನೆಲೆ ರಾಜ್ಯದ ವಿವಿಧ ಸಮುದಾಯಗಳು ತಮ್ಮ ಸಾಂಸ್ಕೃತಿಕ ನಾಯಕರ ಹೆಸರಿನಲ್ಲಿ ಸಂಘಟಿತವಾಗುತ್ತಿವೆ ಎಂದರು.ವೀರಶೈವ ಲಿಂಗಾಯತ ಸಮುದಾಯ ಬಸವಣ್ಣನವರ ಹೆಸರಿನಲ್ಲಿ, ಸಾಧು ವೀರಶೈವ ಸಮಾಜ ವಿಶ್ವಬಂಧು ಮರುಳಸಿದ್ದರ ಹೆಸರಿನಲ್ಲಿ, ಪಂಚಮಸಾಲಿ ಸಮುದಾಯ ವೀರರಾಣಿ ಕಿತ್ತೂರು ಚೆನ್ನಮ್ಮನ ಹೆಸರಿನಲ್ಲಿ, ಹಾಲುಮತ ಕುರುಬ ಸಮುದಾಯ ಭಕ್ತ ಕನಕದಾಸರ ಹೆಸರಿನಲ್ಲಿ ಹಾಗೂ ಪರಿಶಿಷ್ಟ ಜಾತಿಯ ವಿವಿಧ ಸಮುದಾಯಗಳು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಸಂಘಟನೆ ಆಗುತ್ತಿವೆ ಎಂದು ಹೇಳಿದರು.
ಅದೇ ರೀತಿ, ರಾಜ್ಯದಲ್ಲಿ ಸುಮಾರು 50ರಿಂದ 60 ಲಕ್ಷ ಜನಸಂಖ್ಯೆ ಹೊಂದಿರುವ ಬೇಡ ವಾಲ್ಮೀಕಿ ನಾಯಕ ಸಮುದಾಯವು ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಹೆಸರಿನಲ್ಲಿ ಗುರುಪೀಠ ಹಾಗೂ ವಿವಿಧ ಸಂಸ್ಥೆಗಳನ್ನು ಸ್ಥಾಪಿಸಿಕೊಂಡು ಒಗ್ಗಟ್ಟಿನಿಂದ ಮುನ್ನಡೆಯುತ್ತಿದೆ. ಮಹಾತ್ಮರಿಗೆ ಯಾವುದೇ ಜಾತಿಯ ಹಣೆಪಟ್ಟಿ ಕಟ್ಟಬಾರದು. ಆದರೆ ಸಮುದಾಯಗಳು ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಪಡೆದುಕೊಳ್ಳಲು ಹಾಗೂ ಸಂಘಟಿತವಾಗಲು ಸಾಂಸ್ಕೃತಿಕ ನಾಯಕರು ಪ್ರೇರಣೆ ಆಗುತ್ತಾರೆ ಎಂದು ತಿಳಿಸಿದರು.ಮಹರ್ಷಿ ವಾಲ್ಮೀಕಿ ಅವರು ತಮ್ಮ ಜೀವನದಲ್ಲಿ ಮಹತ್ತರ ಪರಿವರ್ತನೆ ಹೊಂದಿ ತಪಸ್ವಿಯಾಗಿ ರಾಮಾಯಣ ಮಹಾಕಾವ್ಯ ರಚಿಸಿ, ಮಾನವಕುಲಕ್ಕೆ ಮಾರ್ಗದರ್ಶನ ನೀಡಿದರು. ಕರ್ನಾಟಕ ಸರ್ಕಾರವು ವಾಲ್ಮೀಕಿ ಜಯಂತಿಯನ್ನು ಸಾರ್ವಜನಿಕವಾಗಿ ಅರ್ಥಪೂರ್ಣವಾಗಿ ಆಚರಿಸುತ್ತಿರುವುದು ಮಹತ್ವದ ಸಂಗತಿ ಎಂದರು.
ರಾಜ್ಯದಲ್ಲಿ ಮಳೆ ಅಭಾವದಿಂದ ರೈತರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆಯೂ ಕಳವಳ ವ್ಯಕ್ತವಾಯಿತು. ದಾವಣಗೆರೆ ಜಿಲ್ಲೆಯ ಅಡಿಕೆ ಬೆಳೆಗಾರರು ನೀರಾವರಿಗಾಗಿ ಎದುರಿಸುತ್ತಿರುವ ಸವಾಲುಗಳನ್ನು ಸ್ಮರಿಸಿ, ಒಗ್ಗಟ್ಟಿನ ಬದುಕು ಹಾಗೂ ಭಗವಂತನ ಕೃಪೆಯ ಮಹತ್ವವನ್ನು ವಿವರಿಸಲಾಯಿತು.ಕಾರ್ಯಕ್ರಮದಲ್ಲಿ ಸಮಿತಿಯ ಹುಚ್ಚವ್ವನಹಳ್ಳಿ ಮಂಜುನಾಥ್, ಮಾಜಿ ಶಾಸಕ ಎಸ್.ವಿ.ರಾಮಚಂದ್ರ, ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ನಿವೃತ್ತ ಪ್ರಾಂಶುಪಾಲ ಪ್ರೊ.ಎ.ಬಿ.ರಾಮಚಂದ್ರಪ್ಪ, ಆಂಜನೇಯ ಗುರೂಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. - - -(ಬಾಕ್ಸ್)
* ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರ ಪ್ರಯತ್ನರಾಜ್ಯದಲ್ಲಿ ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಅಭ್ಯರ್ಥಿಗಳು ಆತಂಕಪಡುವ ಅಗತ್ಯವಿಲ್ಲ. ಗೃಹ ಸಚಿವ ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ರಚಿಸಿರುವ ಉಪಸಮಿತಿಯಲ್ಲಿ ರಘುಮೂರ್ತಿ, ಮುನಿಯಪ್ಪ ಹಾಗೂ ಸತೀಶ್ ಜಾರಕಿಹೊಳಿ ಅವರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಚಿವ ಬಸವಂತಪ್ಪ ಹೇಳಿದರು.
ಕಳೆದ ವಾರ ನಡೆದ ಮೊದಲ ಹಂತದ ಸಭೆಯಲ್ಲಿ 2012ರಿಂದ ಬಾಕಿ ಉಳಿದಿರುವ ಸಾವಿರಾರು ಬ್ಯಾಕ್ಲಾಗ್ ಹುದ್ದೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಪ್ರಸಕ್ತ ವರ್ಷದವರೆಗಿನ ಬಾಕಿ ಹುದ್ದೆಗಳ ಮಾಹಿತಿಯನ್ನು ಒಟ್ಟುಗೂಡಿಸಿ ಭರ್ತಿ ಪ್ರಕ್ರಿಯೆಗೆ ಚಾಲನೆ ನೀಡುವ ಕುರಿತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.ಹಿಂದಿನ ಸಭೆಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯಲ್ಲಿ ಕೆಲವು ಲೋಪದೋಷಗಳು ಕಂಡುಬಂದಿದ್ದರಿಂದ ಸೂಕ್ತ ಸ್ಪಷ್ಟನೆ ಪಡೆಯಲಾಗಿದೆ. ಮುಂದಿನ ಸಭೆಯಲ್ಲಿ ಸಮಗ್ರ ಹಾಗೂ ನಿಖರ ಮಾಹಿತಿ ಪಡೆದುಕೊಳ್ಳಲಾಗುವುದು. ಸರ್ಕಾರಿ ಇಲಾಖೆಗಳ ಜತೆಗೆ ಸಹಕಾರ ವಲಯ ಮತ್ತು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಲ್ಲಿ ಖಾಲಿ ಇರುವ ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುವುದು. ಅಲ್ಲಿ ಹುದ್ದೆಗಳು ಭರ್ತಿಯಾಗದಿದ್ದರೆ ಸರ್ಕಾರದ ಮೂಲಕ ಭರ್ತಿ ಮಾಡುವಂತೆ ಒತ್ತಡ ತರಲಾಗುವುದು ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಆದ್ಯತೆ ನೀಡಿದ್ದು, ಮುಂದಿನ ಮೂರರಿಂದ ನಾಲ್ಕು ತಿಂಗಳಲ್ಲಿ ಸಮಸ್ಯೆಗೆ ಅಂತಿಮ ಪರಿಹಾರ ಕಂಡುಕೊಳ್ಳುವ ನಿರೀಕ್ಷೆಯಿದೆ ಎಂದು ಸಚಿವರು ತಿಳಿಸಿದರು.- - -
-27ಕೆಡಿವಿಜಿ40.ಜೆಪಿಜಿ:ದಾವಣಗೆರೆಯಲ್ಲಿ ಮಂಗಳವಾರ ಸಾರ್ವಜನಿಕ ವಾಲ್ಮೀಕಿ ಜಯಂತ್ಯುತ್ಸವ ಸಮಿತಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಸಚಿವ ಕೆ.ಎಸ್.ಬಸವಂತಪ್ಪ ಉದ್ಘಾಟಿಸಿದರು.