ಹರಪನಹಳ್ಳಿ ತಾಲೂಕಿನ ಅನಂತನಹಳ್ಳಿ ಬಳಿಯಿರುವ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದೆ ನಿತ್ಯ ಬಸ್‌ಗಾಗಿ ಪರದಾಡುತ್ತಿದ್ದಾರೆ.

ಹರಪನಹಳ್ಳಿ: ತಾಲೂಕಿನ ಅನಂತನಹಳ್ಳಿ ಬಳಿಯಿರುವ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿಗಳು ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದೆ ನಿತ್ಯ ಬಸ್‌ಗಾಗಿ ಪರದಾಡುತ್ತಿದ್ದಾರೆ.

ನೀಲಗುಂದ, ಕಡಬಗೆರೆ, ಮತ್ತಿಹಳ್ಳಿ, ಹಲುವಾಗಲು, ನಂದಿಬೇವೂರು, ಕಣಿವೆಹಳ್ಳಿ, ಮೈದೂರು, ಕಂಚಿಕೆರೆ, ಬೆಂಡಿಗೆರೆ, ಇಟ್ಟಿಗುಡಿ ಸೇರಿದಂತೆ ತಾಲೂಕಿನ ವಿವಿಧ ಭಾಗಗಳ 40ಕ್ಕೂ ಹೆಚ್ಚು ಗ್ರಾಮಗಳಿಂದ ಸುಮಾರು 550 ವಿದ್ಯಾರ್ಥಿಗಳು ಪ್ರತಿನಿತ್ಯ ಶಾಲೆಗೆ ಆಗಮಿಸುತ್ತಾರೆ. ಆದರೆ, ಈ ಮಾರ್ಗದಲ್ಲಿ ಸಂಚರಿಸುವ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳು ಕೆಲ ಸಂದರ್ಭಗಳಲ್ಲಿ ವಿದ್ಯಾರ್ಥಿಗಳು ನಿಲ್ದಾಣದಲ್ಲಿ ನಿಂತಿದ್ದರೂ ನಿಲ್ಲಿಸದೆ ತೆರಳುತ್ತಿವೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಕೆಲ ಬಸ್‌ಗಳಲ್ಲಿ ಪ್ರಯಾಣಿಕರ ದಟ್ಟಣೆಯಿಂದಾಗಿ ಎಲ್ಲ ವಿದ್ಯಾರ್ಥಿಗಳಿಗೂ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ ಸಿಗುತ್ತಿಲ್ಲ. ಹೀಗಾಗಿ, ಪೋಷಕರು ಆತಂಕಕ್ಕೊಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲ ಗ್ರಾಮಗಳಲ್ಲಿ ಪೋಷಕರು ಬಸ್‌ಗಳನ್ನು ತಡೆದು ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ ಘಟನೆಗಳೂ ನಡೆದಿವೆ.

ಶಾಲೆ ಮುಗಿದ ನಂತರ ಸುಮಾರು 550 ವಿದ್ಯಾರ್ಥಿಗಳು ಕೇವಲ ಎರಡು ಬಸ್‌ಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಅಪಾಯಕಾರಿ ರೀತಿಯಲ್ಲಿ ಕಿಕ್ಕಿರಿದು ಪ್ರಯಾಣಿಸುವಂತಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಪೋಷಕರಲ್ಲಿ ಆತಂಕ ಮೂಡಿದೆ. ಇದನ್ನು ಹಲವು ಬಾರಿ ಕೆಎಸ್‌ಆರ್‌ಟಿಸಿ ಡಿಪೋ ವ್ಯವಸ್ಥಾಪಕರ ಗಮನಕ್ಕೆ ತಂದಿದ್ದರೂ ನಿರೀಕ್ಷಿತ ಸ್ಪಂದನೆ ದೊರೆತಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕನಿಷ್ಠ ನಾಲ್ಕು ಬಸ್‌ಗಳನ್ನು ಹೆಚ್ಚುವರಿಯಾಗಿ ಓಡಿಸಬೇಕು ಎಂದು ಪೋಷಕರು ಹಾಗೂ ಎಸ್‌ಡಿಎಂಸಿಯವರು ಒತ್ತಾಯಿಸಿದ್ದಾರೆ. ಈ ಕುರಿತು ಶಾಸಕರ ಗಮನಕ್ಕೂ ತರಲಾಗಿದ್ದು, ಸೂಕ್ತ ಪರಿಹಾರ ದೊರಕಿಲ್ಲ, ತಕ್ಷಣ ಸಂಬಂಧಿಸಿದ ಮೇಲಧಿಕಾರಿಗಳು ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.