ಇತರರ ಜೀವನದೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವುದು, ತಮ್ಮ ಸಾಮರ್ಥ್ಯ ಹಾಗೂ ಕಾರ್ಯಕ್ಷಮತೆಯನ್ನು ಅರಿಯದೆ ಒತ್ತಡಕ್ಕೆ ಒಳಗಾಗುವುದು ಮತ್ತು ದುಶ್ಚಟಗಳಿಗೆ ಬಲಿಯಾಗುವುದು ಮಾನಸಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ.

ಕಾರವಾರ: ದೈನಂದಿನ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಮನಸ್ಸಿನಲ್ಲಿಯೇ ಮುಚ್ಚಿಟ್ಟುಕೊಂಡು ಒತ್ತಡ ಹಾಗೂ ಖಿನ್ನತೆಗೆ ಒಳಗಾಗುವ ಬದಲು, ಕುಟುಂಬದ ಸದಸ್ಯರು, ನೆರೆಹೊರೆಯವರು ಹಾಗೂ ಸ್ನೇಹಿತರೊಂದಿಗೆ ಮನಬಿಚ್ಚಿ ಮಾತನಾಡಿ ಅವರ ಸಲಹೆ ಪಡೆಯುವ ಮೂಲಕ ಅನೇಕ ಮಾನಸಿಕ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಸಾಧ್ಯ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಕವಿತಾ ಎಸ್. ಉಂಡೋಡಿ ಹೇಳಿದರು.ಅವರು ಬುಧವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೈನಂದಿನ ಜೀವನದಲ್ಲಿ ಉದ್ಯೋಗ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಎದುರಾಗುವ ಸಮಸ್ಯೆಗಳು ಹಾಗೂ ಭಾವನೆಗಳನ್ನು ಇತರರೊಂದಿಗೆ ಹಂಚಿಕೊಳ್ಳದೇ ಮನಸ್ಸಿನಲ್ಲಿಯೇ ಇಟ್ಟುಕೊಳ್ಳುವುದರಿಂದ ಮಾನಸಿಕ ಒತ್ತಡ ಹೆಚ್ಚಾಗುತ್ತದೆ. ಇತರರ ಜೀವನದೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವುದು, ತಮ್ಮ ಸಾಮರ್ಥ್ಯ ಹಾಗೂ ಕಾರ್ಯಕ್ಷಮತೆಯನ್ನು ಅರಿಯದೆ ಒತ್ತಡಕ್ಕೆ ಒಳಗಾಗುವುದು ಮತ್ತು ದುಶ್ಚಟಗಳಿಗೆ ಬಲಿಯಾಗುವುದು ಮಾನಸಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದರು.

ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ. ಶಂಕರ್ ರಾವ್, ಸಂಪಾದನೆ, ಗೌರವ ಹಾಗೂ ಘನತೆಯ ಬೆನ್ನತ್ತುವ ಧಾವಂತದಲ್ಲಿ ಅನೇಕರು ಮಾನಸಿಕ ನೆಮ್ಮದಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಮಾನಸಿಕ ಆರೋಗ್ಯದಲ್ಲಿ ಏರುಪೇರಾದಾಗ ಎದುರಾಗಬಹುದಾದ ಸಮಸ್ಯೆಗಳನ್ನು ಅರಿತುಕೊಂಡು, ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಬೇಕು. ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳಿಗೂ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆಯಂತಹ ತೀವ್ರ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ನಟರಾಜ್, ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ರಮೇಶ್ ರಾವ್, ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಹರ್ಷ ವೆಂಕಟೇಶ್, ಮಾನಸಿಕ ರೋಗತಜ್ಞ ಡಾ. ಸುಹಾಸ್, ಡಿಟಿಸಿ ಪ್ರಾಂಶುಪಾಲ ಡಾ. ಶಿವಾನಂದ ಇದ್ದರು. ಕಾರ್ಯಕ್ರಮದಲ್ಲಿ ಮಾನಸಿಕ ಆರೋಗ್ಯ ಕುರಿತ ಜಾಗೃತಿ ಕರಪತ್ರ ಬಿಡುಗಡೆ ಮಾಡಲಾಯಿತು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸೋಮಶೇಖರ ಮುತ್ನಾಳ ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಸವರಾಜ ಎಸ್. ಕನ್ನಕ್ಕನವರ ನಿರೂಪಿಸಿ, ವಂದಿಸಿದರು.