‘ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆ’ ಚಾಲನೆ

| Published : Jun 29 2024, 12:30 AM IST

‘ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆ’ ಚಾಲನೆ
Share this Article
  • FB
  • TW
  • Linkdin
  • Email

ಸಾರಾಂಶ

ಮಡಿಕೇರಿಯಲ್ಲಿ ಶುಕ್ರವಾರ ಈಡಿಸ್‌ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸತೀಶ್ ಕುಮಾರ್ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು, ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಕಳೆದ ಬಾರಿಗಿಂತ ಈ ಬಾರಿ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಪ್ರತಿಯೊಬ್ಬರಿಗೂ ಆರೋಗ್ಯ ಶಿಕ್ಷಣ ನೀಡುವಂತಾಗಬೇಕು ಎಂದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಕಳೆದ ಬಾರಿಗಿಂತ ಈ ಬಾರಿ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಪ್ರತಿಯೊಬ್ಬರಿಗೂ ಆರೋಗ್ಯ ಶಿಕ್ಷಣ ನೀಡುವಂತಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.ಈಡಿಸ್‌ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಈಜಿಪಪ್ಟೈ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಆಶಾ ಕಾರ್ಯಕರ್ತರು ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಆರೋಗ್ಯ ಶಿಕ್ಷಣ ಬಗ್ಗೆ ಮಾಹಿತಿ ನೀಡಲಿದ್ದಾರೆ. ಆ ನಿಟ್ಟಿನಲ್ಲಿ ಸಹಕರಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕೋರಿದರು.

ಮನೆಯಲ್ಲಿನ ಸಿಮೆಂಟ್ ತೊಟ್ಟಿ, ಡ್ರಮ್, ಬ್ಯಾರಲ್, ಫಾಟ್, ತೆಂಗಿನ ಚಿಪ್ಪು ಸೇರಿದಂತೆ ಇತರೆ ಕಡೆಗಳಲ್ಲಿ ನೀರು ಶೇಖರಣೆಯಾಗದಂತೆ ಗಮನಹರಿಸಬೇಕು. ತೊಟ್ಟಿ, ಡ್ರಮ್, ಬಕೆಟ್‌ಗಳನ್ನು ವಾರಕ್ಕೊಮ್ಮೆ ಉಜ್ಜಿ ಸ್ವಚ್ಛಗೊಳಿಸಬೇಕು. ಸೊಳ್ಳೆಯ ಮೊಟ್ಟೆಗಳು ನೀರಿಲ್ಲದಿದ್ದರೂ ಒಂದು ವರ್ಷದವರೆಗೆ ಬದುಕಲಿವೆ. ಆದ್ದರಿಂದ ವಾರಕ್ಕೊಮ್ಮೆಯಾದರೂ ಸ್ವಚ್ಚಗೊಳಿಸಬೇಕು ಎಂದು ಸತೀಶ್ ಕುಮಾರ್ ಅವರು ಕರೆ ನೀಡಿದರು.

ಡೆಂಘೀ ಜ್ವರ ಹಗಲು ಹೊತ್ತಿನಲ್ಲಿ ಈಡಿಸ್ ಈಜಿಪ್ಟೆ ಸೊಳ್ಳೆ ಕಚ್ಚುವುದರಿಂದ ಬರಲಿದ್ದು, ಈ ಬಗ್ಗೆ ಹೆಚ್ಚಿನ ಎಚ್ಚರ ವಹಿಸಬೇಕಿದೆ ಎಂದರು.

ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕು ಮತ್ತು ಮಡಿಕೇರಿ ನಗರದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚು ಕಂಡುಬಂದಿದ್ದು, ಈ ಬಗ್ಗೆ ಹೆಚ್ಚಿನ ಎಚ್ಚರವಹಿಸಬೇಕು ಎಂದು ತಿಳಿಸಿದರು.

ಈ ವರ್ಷ ಡೆಂಘೀ ಪ್ರಕರಣದಿಂದ ರಾಜ್ಯದಲ್ಲಿ 6 ಜನರು ಮೃತಪಟ್ಟಿದ್ದಾರೆ. ಆ ನಿಟ್ಟಿನಲ್ಲಿ ಪ್ರತೀ ಶುಕ್ರವಾರ ಡೆಂಘೀ ಲಾರ್ವಾ ಸರ್ವೆ ಮಾಡಲಾಗುತ್ತದೆ. ಡೆಂಘೀ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದರು.

ಕೊಡಗು ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 94 ಡೆಂಘೀ ಪ್ರಕರಣಗಳು ಕಂಡು ಬಂದಿದೆ. ಮಡಿಕೇರಿ ತಾಲೂಕಿನಲ್ಲಿ ಜನವರಿಯಿಂದ ಇಲ್ಲಿಯವರೆಗೆ 9 ಪ್ರಕರಣಗಳು, ಕುಶಾಲನಗರ ತಾಲೂಕಿನಲ್ಲಿ 28 ಪ್ರಕರಣಗಳು, ಸೋಮವಾರಪೇಟೆ ತಾಲೂಕಿನಲ್ಲಿ 1 ಪ್ರಕರಣ, ಪೊನ್ನಂಪೇಟೆ ತಾಲ್ಲೂಕಿನಲ್ಲಿ 38 ಪ್ರಕರಣಗಳು, ವಿರಾಜಪೇಟೆ ತಾಲೂಕಿನಲ್ಲಿ 18 ಪ್ರಕರಣಗಳು ಕಂಡುಬಂದಿದೆ ಎಂದು ಮಾಹಿತಿ ನೀಡಿದರು.

ಒಟ್ಟಾರೆ ಜನವರಿ ತಿಂಗಳಲ್ಲಿ 7, ಫೆಬ್ರವರಿ ತಿಂಗಳಲ್ಲಿ 11, ಮಾರ್ಚ್‌ನಲ್ಲಿ 9, ಏಪ್ರಿಲ್‌ನಲ್ಲಿ 8, ಮೇ ತಿಂಗಳಲ್ಲಿ 25, ಜೂನ್ ತಿಂಗಳಲ್ಲಿ 34 ಒಟ್ಟು 94 ಪ್ರಕರಣಗಳು ಕಂಡು ಬಂದಿದೆ ಎಂದು ಮಾಹಿತಿ ನೀಡಿದರು.

ಆರ್‌ಸಿಎಚ್. ಅಧಿಕಾರಿ ಡಾ.ಮಧುಸೂದನ್ ಮಾತನಾಡಿ, ಪ್ರತಿ ಗುರುವಾರ ಲಸಿಕಾ ದಿನವಾಗಿರುವಂತೆ ಪ್ರತಿ ಶುಕ್ರವಾರ ಈಡಿಸ್ ಈಜಿಪಪ್ಟೈ ಸೊಳ್ಳೆ ನಿರ್ಮೂಲನಾ ದಿನವನ್ನಾಗಿ ಆಚರಿಸುವುದನ್ನು ಸಾರ್ವಜನಿಕರ ದಿನಚರಿಯ ದೈನಂದಿನ ಅಭ್ಯಾಸ/ ಪದ್ಧತಿಯನ್ನಾಗಿ ಮಾಡುವುದರ ಮೂಲಕ ಹೆಚ್ಚಿನ ಅರಿವು ಮೂಡಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ‘ಈಡಿಸ್ ಲಾರ್ವಾ ಉತ್ಪತ್ತಿ ತಾಣ ನಾಶ ಚಟುವಟಿಕೆ’ಗೆ ಚಾಲನೆ ನೀಡಲಾಗಿದೆ ಎಂದರು.

ತಾಲೂಕು ವೈದ್ಯಾಧಿಕಾರಿ ಡಾ.ಚೇತನ್, ಪೌರಾಯುಕ್ತ ವಿಜಯ್, ಪರಿಸರ ಎಂಜಿನಿಯರ್ ಸೌಮ್ಯ, ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ, ಶ್ರುಶ್ರೂಷಕರು, ಆರೋಗ್ಯ ಶಿಕ್ಷಕರು, ಆಶಾ ಕಾರ್ಯಕರ್ತರು ಇದ್ದರು.