ಸಾರಾಂಶ
ಕನ್ನಡಪ್ರಭ ವಾರ್ತೆ ಪುತ್ತೂರುಪಾಕಿಸ್ತಾನದ ಭಯೋತ್ಪಾದಕರ ವಿರುದ್ಧ ಆಪರೇಷನ್ ಸಿಂದೂರ ಹೆಸರಿನಲ್ಲಿ ನಡೆದ ಸೇನಾ ಕಾರ್ಯಾಚರಣೆ ಯಶಸ್ವಿಯಾಗಿ ನಡೆಸಿರುವ ನಮ್ಮ ಸೇನಾ ಯೋಧರಿಗೆ ಒಳಿತಾಗಲಿ, ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಭಗವಂತನು ಅನುಗ್ರಹಿಸಲಿ ಎಂದು ಗುರುವಾರ ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ಮುಜಿರಾಯಿ ಸಚಿವರ ಸೂಚನೆಯಂತೆ ವಿಶೇಷ ಪ್ರಾರ್ಥನೆ ಹಾಗೂ ಸಂಕಲ್ಪ ಪೂಜೆ ನೆರವೇರಿಸಲಾಯಿತು.ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಪ್ರಾರ್ಥಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರಯತ ವಳತ್ತಡ್ಕ, ದಿನೇಶ್ ಪಿ ವಿ, ಈಶ್ವರ ಬೆಡೇಕರ್, ವಿನಯ ಸುವರ್ಣ, ಸುಭಾಶ್ ರೈ ಬೆಳ್ಳಿಪ್ಪಾಡಿ, ನಳಿನಿ ಪಿ ಶೆಟ್ಟಿ, ಕೃಷ್ಣವೇಣಿ, ಕಾರ್ಯನಿರ್ವಹಣಾಧಿಕಾರಿ ಕೆ ವಿ ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮತ್ತಿತರರಿದ್ದರು.ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳ, ಕೇಂದ್ರ ಜುಮ್ಮಾ ಮಸೀದಿ ಹಾಗೂ ಮಾಯ್ ದೆ ದೇವುಸ್ ಚರ್ಚ್‌ನಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಬಿಜೆಪಿ ಪ್ರಾರ್ಥನೆ: ಬಿಜೆಪಿ ಗ್ರಾಮಾಂತರ ಮತ್ತು ನಗರ ಮಂಡಲದ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಪರೇಶನ್ ಸಿಂದೂರ ಹೆಸರಿನಲ್ಲಿ ಪೆಹಲ್ಗಾಂನಲ್ಲಿ ಹಿಂದೂಗಳನ್ನು ಕೊಂದ ಉಗ್ರವಾದಿಗಳನ್ನು ಅವರದ್ದೇ ನೆಲದಲ್ಲಿ ಮಣ್ಣು ಮಾಡಿದ ವೀರ ಸೈನಿಕರ ಮನೋಸ್ಥೈರ್ಯ ಹೆಚ್ಚಿಸಲು ಮತ್ತು ಪ್ರಧಾನ ಮಂತ್ರಿಗಳಿಗೆ ಶಕ್ತಿ ನೀಡಲು ವಿಶೇಷ ಪ್ರಾರ್ಥನೆ ಮಾಡಲಾಯಿತು. ಸಂದರ್ಭದಲ್ಲಿ ಮಂಡಲದ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.