ಲೋಕ ಅದಾಲತ್‌: ರಾಜಿ ಸಂಧಾನದ ಮೂಲಕ ತ್ವರಿತ ಇತ್ಯರ್ಥಕ್ಕೆ ಅವಕಾಶ

| Published : Jun 18 2025, 11:48 PM IST

ಲೋಕ ಅದಾಲತ್‌: ರಾಜಿ ಸಂಧಾನದ ಮೂಲಕ ತ್ವರಿತ ಇತ್ಯರ್ಥಕ್ಕೆ ಅವಕಾಶ
Share this Article
  • FB
  • TW
  • Linkdin
  • Email

ಸಾರಾಂಶ

ಗದಗ ಜಿಲ್ಲೆಯಲ್ಲಿ ಜು. 12ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನ ಮಾಡಿಕೊಳ್ಳುವ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ನಾಗವೇಣಿ ಹೇಳಿದರು.

ಗದಗ: ಜಿಲ್ಲೆಯಲ್ಲಿ ಜು. 12ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜಿ ಸಂಧಾನ ಮಾಡಿಕೊಳ್ಳುವ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ನಾಗವೇಣಿ ಹೇಳಿದರು.

ರಾಷ್ಟ್ರೀಯ ಲೋಕ ಅದಾಲತ್ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಹಾಗೂ ಪ್ರಕರಣ ರಾಜಿ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.ಗದಗ ಜಿಲ್ಲೆಯಲ್ಲಿ ರಾಜಿ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 15 ಬೆಂಚ್‌ ರಚಿಸಲಾಗಿದೆ. ಗದಗ ಜಿಲ್ಲೆಯಲ್ಲಿ ಒಟ್ಟು 20,411 ವಿವಿಧ ಚಾಲ್ತಿ ಪ್ರಕರಣಗಳಿವೆ. ಅದರಲ್ಲಿ ಈಗಾಗಲೇ ರಾಜಿ ಆಗಬಹುದಾದ 2,280 ಪ್ರಕರಣಗಳನ್ನು ಗುರುತಿಸಲಾಗಿದೆ. ಅದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜಿ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ಗುರುತಿಸಲಾಗಿದೆ ಎಂದರು.

ಮಾರ್ಚ್-2025ರಂದು ಜರುಗಿದ ಲೋಕ ಅದಾಲತ್‌ನಲ್ಲಿ 3,749 ಚಾಲ್ತಿ ಪ್ರಕರಣಗಳು ಹಾಗೂ 29,199 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 32,948 ಪ್ರಕರಣಗಳನ್ನು ಇತ್ಯರ್ಥಪಡಿಸಿದೆ. ಅದರಲ್ಲಿ ವಿಶೇಷವಾಗಿ 9 ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ ಎಂದರು.

ಜು. 12ರಂದು ಜರಗುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜಿ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಮಾತನಾಡಿ, ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣ ತೀರ್ಮಾನವಾಗುವುದರಿಂದ ಬಾಂಧವ್ಯ ಉಳಿದು ವಿವಾದವು ಬಗೆಹರಿಯುವುದು. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದರು.