ಎಸ್ಎಫ್ಐ ಜಿಲ್ಲಾಧ್ಯಕ್ಷ ಅರುಣಕುಮಾರ ನಗವತ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಲು ಮೂಲಸೌಕರ್ಯ ಕೊರತೆ, ಶಿಕ್ಷಕರ ಅಭಾವ ಸೇರಿದಂತೆ ಸರ್ಕಾರದ ನಿರ್ಲಕ್ಷ್ಯವೇ ಪ್ರಮುಖ ಕಾರಣವಾಗಿದೆ ಎಂದರು.
ಹಾವೇರಿ: ರಾಜ್ಯದ 2000 ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳೊಂದಿಗೆ ಜೋಡಿಸುವ ಹಾಗೂ ಕೆಪಿಎಸ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಸ್ಎಫ್ಐ ಜಿಲ್ಲಾ ಸಮಿತಿಯಿಂದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾ ಗುರುಭವನ ಸಮೀಪದ ಸರ್ಕಾರಿ ಶಾಲೆ ನಂ.3ರ ಎದುರು ಸರ್ಕಾರದ ನಿರ್ಧಾರದ ವಿರುದ್ಧ ನಾಮಫಲಕ ಪ್ರದರ್ಶಿಸಿ, ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಯೋಜನೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿದರು.ಈ ವೇಳೆ ಎಸ್ಎಫ್ಐ ಜಿಲ್ಲಾಧ್ಯಕ್ಷ ಅರುಣಕುಮಾರ ನಗವತ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಲು ಮೂಲಸೌಕರ್ಯ ಕೊರತೆ, ಶಿಕ್ಷಕರ ಅಭಾವ ಸೇರಿದಂತೆ ಸರ್ಕಾರದ ನಿರ್ಲಕ್ಷ್ಯವೇ ಪ್ರಮುಖ ಕಾರಣವಾಗಿದೆ. ಶಾಲೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸದೆ, ದಾಖಲಾತಿ ಕುಸಿತದ ನೆಪದಲ್ಲಿ ಖಾಸಗಿ ಸಂಸ್ಥೆಗಳೊಂದಿಗೆ ಶಾಲೆಗಳನ್ನು ಜೋಡಿಸುವುದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.
ಜಿಲ್ಲಾ ಕಾರ್ಯದರ್ಶಿ ಚೈತ್ರಾ ಕೊರವರ ಮಾತನಾಡಿ, ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸುವ ಬದಲು ಈಗಿರುವ ಸರ್ಕಾರಿ ಶಾಲೆಗಳನ್ನೇ ಪಂಚಾಯಿತಿಗೊಂದು ಶಾಲೆಯಾಗಿ ಉನ್ನತೀಕರಿಸುವ ಮೂಲಕ ಗ್ರಾಮೀಣ ಭಾಗದ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆದಿದೆ. ಇದರಿಂದ ಬಡ ಮತ್ತು ಗ್ರಾಮೀಣ ಮಕ್ಕಳ ಶಿಕ್ಷಣದ ಹಕ್ಕಿಗೆ ಧಕ್ಕೆಯಾಗಲಿದೆ ಎಂದರು.ಶಿಕ್ಷಣ ಹಕ್ಕು ಕಾಯ್ದೆಯಡಿ ಎಲ್ಲ ಮಕ್ಕಳಿಗೂ ನೆರೆಹೊರೆಯಲ್ಲೇ ಉಚಿತ ಮತ್ತು ಕಡ್ಡಾಯ ಶಿಕ್ಷಣ ದೊರೆಯಬೇಕು. ಆದ್ದರಿಂದ ಸರ್ಕಾರಿ ಶಾಲೆಗಳ ಖಾಸಗಿ ಸಂಸ್ಥೆಗಳೊಂದಿಗಿನ ಜೋಡಣೆ ಹಾಗೂ ವಿಲೀನ ಪ್ರಕ್ರಿಯೆ ಕೈಬಿಡಬೇಕು ಎಂದು ಒತ್ತಾಯಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಲೋಕೇಶ ವೈ., ವಿದ್ಯಾರ್ಥಿಗಳಾದ ಮನೋಜ್ ಮೊರಕರ, ಮನೋಜ್ ಬಳ್ಳಾರಿ, ಕಾಂತೇಶ ಕೊರವರ, ಗೌತಮ್ ಗಾಯಕವಾಡ ಸೇರಿದಂತೆ ಇತರರು ಇದ್ದರು.