ಸಾರಾಂಶ
ಬೆಂಗಳೂರಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ಬಸವ ಜಯಂತಿ ದಿನದಂದೇ ಪಂಚಾಚಾರ್ಯರ ಯುಗಮಾನೋತ್ಸವ ಹಮ್ಮಿಕೊಂಡಿರುವುದನ್ನು ವಿರೋಧಿಸಿ ಜಿಲ್ಲೆಯ ಮಠಾಧೀಶರು ಹಾಗೂ ಬಸವ ಪರ ಸಂಘಟನೆಗಳಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೀದರ್
ಬೆಂಗಳೂರಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ಬಸವ ಜಯಂತಿ ದಿನದಂದೇ ಪಂಚಾಚಾರ್ಯರ ಯುಗಮಾನೋತ್ಸವ ಹಮ್ಮಿಕೊಂಡಿರುವುದನ್ನು ವಿರೋಧಿಸಿ ಜಿಲ್ಲೆಯ ಮಠಾಧೀಶರು ಹಾಗೂ ಬಸವ ಪರ ಸಂಘಟನೆಗಳಿಂದ ಶನಿವಾರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ತಿಳಿಸಿದ್ದಾರೆ. ನಗರದ ಗಾಂಧಿಗಂಜ್‌ನ ಬಸವೇಶ್ವರ ದೇವಸ್ಥಾನದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ನಡೆದ ಸಭೆಯಲ್ಲಿ ಈ ಕುರಿತು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಬಸವ ಜಯಂತಿಯ ದಿನ ಪಂಚಾಚಾರ್ಯರ ಯುಗಮಾನೋತ್ಸವ ಹಮ್ಮಿಕೊಳ್ಳುವ ಮೂಲಕ ಬಸವ ಜಯಂತಿಯ ವಿಶೇಷತೆ, ಮಹತ್ವ ಹಾಗೂ ಐತಿಹಾಸಿಕತೆಯನ್ನು ಕುಬ್ಜಗೊಳಿಸುವ ಹುನ್ನಾರಕ್ಕೆ ಈಗಾಗಲೇ ನಾಡಿನಾದ್ಯಂತ ಅನೇಕ ಮಠಾಧೀಶರು ಹಾಗೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಅದಾಗ್ಯೂ ಬಸವ ಜಯಂತಿ ಜೊತೆ ಪಂಚಾಚಾರ್ಯರ ಯುಗಮಾನೋತ್ಸವ ಏರ್ಪಡಿಸಿದ ಹಿನ್ನೆಲೆಯಲ್ಲಿ ಈ ಪ್ರತಿಭಟನೆಗೆ ತೀರ್ಮಾನಿಸಲಾಯಿತು ಎಂದು ತಿಳಿಸಿದ್ದಾರೆ. ಬೆಳಿಗ್ಗೆ 9ಕ್ಕೆ ಬಸವೇಶ್ವರ ವೃತ್ತದ ಬಳಿ ಜಮಾಯಿಸಿ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲೆಯ ಮಠಾಧೀಶರು, ಬಸವ ಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಬಸವಾನುಯಾಯಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಭಾರತೀಯ ಬಸವ ಬಳಗದ ರಾಜ್ಯ ಅಧ್ಯಕ್ಷ ಬಾಬು ವಾಲಿ, ಜಾಗತಿಕ ಲಿಂಗಾಯತ ಮಹಾಸಭಾದ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಸವರಾಜ ಬುಳ್ಳಾ, ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ ಜೈರಾಜ ಖಂಡ್ರೆ, ಮಹಾಸಭಾ ಜಿಲ್ಲಾ ಘಟಕದ ಖಜಾಂಚಿ ವೀರಭದ್ರಪ್ಪ ಬುಯ್ಯಾ, ಗೌರವ ಸಲಹೆಗಾರ ಅಣ್ಣಾರಾವ್ ಮೊಗಶೆಟ್ಟಿ, ಕಾರ್ಯಕಾರಿಣಿ ಸದಸ್ಯ ರಾಜೇಂದ್ರಕುಮಾರ ಗಂದಗೆ, ರಾಷ್ಟ್ರೀಯ ಬಸವ ದಳದ ಬೀದರ್ ತಾಲೂಕು ಘಟಕದ ಅಧ್ಯಕ್ಷ ಸಂಜುಕುಮಾರ ಪಾಟೀಲ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಗಣೇಶ ಬಿರಾದಾರ, ಮುಖಂಡರಾದ ವಿಶ್ವನಾಥ ಕಾಜಿ, ವಿಜಯಕುಮಾರ ಪಾಟೀಲ್ ಯರನಳ್ಳಿ, ಶಿವಕುಮಾರ ಕಟ್ಟೆ, ಸಿದ್ದು ಶೆಟಕಾರ್, ಉಮೇಶ ಗಾಯತೊಂಡೆ, ವೀರಶೆಟ್ಟಿ ಮರಕಲ್, ಯೋಗೇಶ ಸಿರಿಗಿರಿ, ವೀರಭದ್ರಪ್ಪ ಉಪ್ಪಿನ್ ಹಾಗೂ ರಾಜು ಕಮಠಾಣೆ ಮತ್ತಿತರರು ಇದ್ದರು.