ಜನೌಷಧಿ ಕೇಂದ್ರ ಮುಚ್ಚಲು ಆದೇಶ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ರೋಶ

| Published : May 20 2025, 01:42 AM IST

ಜನೌಷಧಿ ಕೇಂದ್ರ ಮುಚ್ಚಲು ಆದೇಶ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ರೋಶ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿರುವುದು ಅತ್ಯಂತ ದುರದೃಷ್ಟಕರ ಮತ್ತು ಬಡವರ ವಿರೋಧಿ ನಡೆಯಾಗಿದೆ.

ಶಿರಸಿ: ರಾಜ್ಯ ಸರ್ಕಾರ ಸೂಕ್ತ ಕಾರಣ ನೀಡದೆ, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿರುವುದು ಅತ್ಯಂತ ದುರದೃಷ್ಟಕರ ಮತ್ತು ಬಡವರ ವಿರೋಧಿ ನಡೆಯಾಗಿದೆ. ಈ ಆದೇಶವನ್ನು ಕೂಡಲೇ ಹಿಂಪಡೆಯಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಕೇಂದ್ರ ಸರ್ಕಾರ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಔಷಧಗಳನ್ನು ಒದಗಿಸುವ ಉದ್ದೇಶದಿಂದ ಸ್ಥಾಪಿಸಿರುವ ಪ್ರಧಾನ ಮಂತ್ರಿ ಜನೌಷಧಿ ಕೇಂದ್ರಗಳು ದೇಶಾದ್ಯಂತ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿವೆ. ಈ ಕೇಂದ್ರಗಳು ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ದೂರದ ಊರುಗಳಿಂದ ಚಿಕಿತ್ಸೆಗಾಗಿ ಬರುವ ಬಡ ರೋಗಿಗಳಿಗೆ ಅನುಕೂಲಕರವಾಗಿದೆ. ಅಸಂಖ್ಯಾತ ಬಡವರು ಈ ಜನೌಷಧಿ ಕೇಂದ್ರಗಳಿಂದ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಔಷಧಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಯಾವುದೋ ಸ್ವಾರ್ಥ ಸಾಧನೆ ಅಥವಾ ಲಾಬಿಗೆ ಒಳಗಾಗಿ ನಿರ್ಧಾರ ತೆಗೆದುಕೊಂಡಿರುವಂತೆ ಕಾಣುತ್ತಿದೆ. ಜನೌಷಧ ಕೇಂದ್ರ ಮುಚ್ಚುವ ಮೂಲಕ ರಾಜ್ಯ ಸರ್ಕಾರ ಬಡವರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಹೇಳಿದ್ದಾರೆ.

ಜನೌಷಧ ಕೇಂದ್ರ ಮುಚ್ಚಿದರೆ ಸರ್ಕಾರಿ ಆಸ್ಪತ್ರೆಗೆ ಬರುವ ಬಡರೋಗಿಗಳು ಹೆಚ್ಚಿನ ಬೆಲೆಯ ಔಷಧ ಖರೀದಿಸಬೇಕಾಗುತ್ತದೆ. ಇದು ಅವರ ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತದೆ. ಅವರ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ರಾಜ್ಯ ಸರ್ಕಾರದ ಈ ನಿರ್ಧಾರವು ಕೇವಲ ಬಡವರಿಗೆ ಮಾತ್ರವಲ್ಲದೆ, ಸಾರ್ವಜನಿಕರಿಗೂ ಮಾಡಿದ ಅನ್ಯಾಯವಾಗಿದೆ. ಜನೌಷಧಿ ಕೇಂದ್ರಗಳು ಪಾರದರ್ಶಕತೆ ಮತ್ತು ಸ್ಪರ್ಧಾತ್ಮಕತೆ ಹೆಚ್ಚಿಸುವ ಮೂಲಕ ಔಷಧೀಯ ಕ್ಷೇತ್ರದ ದುಬಾರಿ ದರಗಳಿಗೆ ಕಡಿವಾಣ ಹಾಕುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಇಂತಹ ಉತ್ತಮ ಯೋಜನೆ ಸ್ಥಗಿತಗೊಳಿಸುವುದು ಸಮರ್ಥನೀಯವಲ್ಲ. ರಾಜ್ಯ ಸರ್ಕಾರದ ಈ ಜನವಿರೋಧಿ ನಿರ್ಧಾರವನ್ನು ತೀವ್ರವಾಗಿ ಖಂಡಿಸುತ್ತೇನೆ. ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳು ಎಂದಿನಂತೆ ಕಾರ್ಯ ನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.