ಕನ್ನಡಪ್ರಭ ವಾರ್ತೆ ಮಂಡ್ಯ
ನೀಟ್ ಪರೀಕ್ಷಾ ಅಕ್ರಮದಿಂದ ಅಸಂಖ್ಯಾತ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದ್ದು, ಇದರ ಹೊಣೆ ಹೊತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸೇರಿದ ಪ್ರಗತಿಪರ, ಕನ್ನಡ ಪರ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಕೇಂದ್ರ ಸರ್ಕಾರ ಮತ್ತು ಸಚಿವರ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪ್ರತಿಕೃತಿ ದಹಿಸಲು ಮುಂದಾದಾಗ ಪೊಲೀಸರು ಮಧ್ಯಪ್ರವೇಶಿಸಿ ತಡೆದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ತಳ್ಳಾಟ, ನೂಕಾಟ ಉಂಟಾಯಿತು. ಅಂತಿಮವಾಗಿ ಪ್ರತಿಕೃತಿಯನ್ನು ದಹಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ನೀಟ್ ಪರೀಕ್ಷಾ ಅಕ್ರಮದಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಪರೀಕ್ಷಾ ಅಕ್ರಮ ನಡೆದು ಇಷ್ಟು ದಿನಗಳು ಕಳೆದಿದ್ದರೂ ಕೇಂದ್ರ ಸರ್ಕಾರ ಪ್ರತಿಭಟನೆ ವಿಕೋಪಕ್ಕೆ ಹೋಗುವವರೆಗೂ ಮಧ್ಯ ಪ್ರವೇಶಿಸದೆ ನಿರ್ಲಕ್ಷ್ಯ ಧೋರಣೆ ಅನುಸರಿಸಿದೆ. ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸುವ ಮೂಲಕ ಕ್ರೌರ್ಯತೆಯನ್ನು ಮೆರೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬೇರೆಲ್ಲಾ ವಿಚಾರಗಳಿಗೆ ಪ್ರತಿಕ್ರಿಯಿಸುವ ಪ್ರಧಾನಿ ನರೇಂದ್ರ ಮೋದಿಯವರು ೨೨ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯವೇ ಆಗಿರುವ ನೀಟ್ ಪರೀಕ್ಷಾ ಹಗರಣದ ವಿರುದ್ಧ ಮೌನ ಮುರಿಯಲಿಲ್ಲ. ತಪ್ಪಿತಸ್ಥರನ್ನು ಶಿಕ್ಷಿಸುವ ಪ್ರಯತ್ನ ಮಾಡಲಿಲ್ಲ. ಕೇಂದ್ರ ಸಚಿವರ ರಾಜೀನಾಮೆಯನ್ನೂ ಪಡೆಯಲಿಲ್ಲ. ಇದು ಕೇಂದ್ರ ಸರ್ಕಾರದ ವಿದ್ಯಾರ್ಥಿ ವಿರೋಧಿ ಧೋರಣೆ ಪ್ರದರ್ಶಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸ್ ವೇಷದ ಹಲವು ಖಾಸಗಿ ವ್ಯಕ್ತಿಗಳು ದೌರ್ಜನ್ಯ ಎಸಗಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ವಿಶೇಷವಾಗಿ ನೀಟ್ ಹಗರಣದ ಹೊಣೆ ಹೊತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ನೀಡಬೇಕು ಎಂದು ಆಗ್ರಹಿಸಿದರು.
ನೀಟ್ ಪರೀಕ್ಷೆ ಜಾರಿಯಾದಾಗಿನಿಂದಲೂ ಹಲವು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿದ್ದು, ಇದರಿಂದ ದಕ್ಷಿಣ ರಾಜ್ಯಗಳ ವಿದ್ಯಾರ್ಥಿಗಳಿಗೆ ನೇರವಾಗಿ ಅನ್ಯಾಯವಾಗುತ್ತಿದೆ. ವೈದ್ಯಕೀಯ ಶಿಕ್ಷಣದ ಕನಸು ಹೊತ್ತು ಅವಿರತವಾಗಿ ಶ್ರಮವಹಿಸಿ ಓದುವ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ವಿಚಲಿತರಾಗುತ್ತಿದ್ದಾರೆ. ಅನೇಕರು ಆತ್ಮಹತ್ಯೆಗೂ ಶರಣಾಗಿದ್ದಾರೆ. ಈ ಅವ್ಯವಸ್ಥೆ ಬದಲಾಗಬೇಕು. ನೀಟ್ ಪರೀಕ್ಷೆ ರದ್ದುಗೊಳಿಸಿ ಈ ಹಿಂದಿನ ಸಿಇಟಿ ಮಾದರಿ ಪರೀಕ್ಷೆಯನ್ನೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ವಿವಿಧ ಸಂಘಟನೆಗಳ ಮುಖಂಡರಾದ ಎಂ.ವಿ.ಕೃಷ್ಣ, ಟಿ.ಎಲ್.ಕೃಷ್ಣೇಗೌಡ, ಎಂ.ಬಿ.ನಾಗಣ್ಣಗೌಡ, ಎಚ್.ಡಿ.ಜಯರಾಂ, ಎಲ್. ಸಂದೇಶ್, ಎನ್.ದೊಡ್ಡಯ್ಯ, ಸಿ.ಕುಮಾರಿ, ನಿರಂಜನ್, ಎಸ್.ಪಿ.ನಾರಾಯಣಸ್ವಾಮಿ ಇತರರಿದ್ದರು.