ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜ. 3ರಂದು ಬೆಳಗ್ಗೆ 10.30ಕ್ಕೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆ ಜರುಗಲಿದೆ.

ಗದಗ: ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಜ. 3 ಮತ್ತು 4ರಂದು ಹಮ್ಮಿಕೊಳ್ಳಲಾಗುತ್ತಿದ್ದು, ಸ್ಪರ್ಧೆಗಳನ್ನು ಅಚ್ಚುಕಟ್ಟಾಗಿ ಹಾಗೂ ಸಂಭ್ರಮದಿಂದ ಜರುಗಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2025- 26ನೇ ಸಾಲಿನ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಕುರಿತು ಜರುಗಿದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜ. 3ರಂದು ಬೆಳಗ್ಗೆ 10.30ಕ್ಕೆ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆ ಜರುಗಲಿದೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಮಾನಸಿಕ ಹಾಗೂ ದೈಹಿಕ ಸದೃಢತೆಗಾಗಿ ಪ್ರತಿಯೊಬ್ಬರಿಗೆ ಅತ್ಯವಶ್ಯಕವಾಗಿದ್ದು, ಸರ್ಕಾರಿ ನೌಕರರು ಸ್ಫೂರ್ತಿಯಿಂದ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವಂತಾಗಬೇಕು. ಸೋಲು ಅಥವಾ ಗೆಲುವನ್ನು ಗಣನೆಗೆ ತೆಗೆದುಕೊಳ್ಳದೇ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನೌಕರರು ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಕ್ರೀಡಾ ಮನೋಭಾವನೆಯಿಂದ ಮೆರೆಯುವಂತಾಗಬೇಕು ಎಂದರು.ಕ್ರೀಡಾಪಟುಗಳು ವಿವಿಧ ತಾಲೂಕುಗಳಿಂದ ಆಗಮಿಸುವುದರಿಂದ ಅವರಿಗೆ ಕೆಎಸ್ಆರ್‌ಟಿಸಿ ಬಸ್ ವ್ಯವಸ್ಥೆ ಕೈಗೊಳ್ಳಬೇಕು. ಸ್ಪರ್ಧಾರ್ಥಿಗಳಿಗೆ ಎರಡು ದಿವಸಗಳ ಕಾಲ ಊಟ ಮತ್ತು ಉಪಹಾರದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಇಲಾಖೆ ಅಧಿಕಾರಿಗಳು ಸರ್ಕಾರಿ ನೌಕರರ ಸಂಘದ ಸಹಭಾಗಿತ್ವದೊಂದಿಗೆ ಹೆಚ್ಚಿನ ಆಸಕ್ತಿ ವಹಿಸಿ ಸ್ಪರ್ಧೆಗಳನ್ನು ಯಶಸ್ವಿಗೊಳಿಸಬೇಕು ಎಂದರು.ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಸುವ್ಯವಸ್ಥಿತ ಆಯೋಜನೆಗೆ ಪೊಲೀಸ್ ಇಲಾಖೆಯ ಸಹಕಾರ ಸದಾ ಇರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನೌಕರರು ತಮ್ಮ ಕುಟುಂಬದ ಸಮೇತ ಬಂದು ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಣೆ ಮಾಡಿ ಆನಂದಿಸಬೇಕೆಂದರು.ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಮಾತನಾಡಿ, ಕ್ರೀಡಾಕೂಟವು ಅತ್ಯಂತ ಯಶಸ್ವಿಯಾಗಿ ನಡೆಸಲು ಎಲ್ಲ ನೌಕರರು ಆಸಕ್ತಿಯಿಂದ ಪಾಲ್ಗೊಳ್ಳಬೇಕು. ಎಲ್ಲರ ಪಾಲ್ಗೊಳ್ಳುವಿಕೆ ಮೂಲಕವೇ ಕ್ರೀಡಾಕೂಟಗಳು ಯಶಸ್ವಿಯಾಗಲು ಸಾಧ್ಯ. ಮನರಂಜನಾ ಕಾರ್ಯಕ್ರಮಗಳಲ್ಲಿ ಸಹ ನೌಕರರು ತಮ್ಮ ಕುಟುಂಬ ಪರಿವಾರದೊಂದಿಗೆ ಆಗಮಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಸ್ವಾದಿಸಬೇಕೆಂದರು.

ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ ಮುಂತಾದವರು ಮಾತನಾಡಿದರು. ಸಭೆಯಲ್ಲಿ ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣ, ಪೊಲೀಸ್ ಬಂದೋಬಸ್ತ್, ವೇದಿಕೆ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹಾಂತೇಶ ಸಜ್ಜನರ್, ಅಧಿಕಾರಿಗಳಾದ ಕೊಟ್ರೇಶ್ ವಿಭೂತಿ, ಶ್ರೀಶೈಲ ಸೋಮನಕಟ್ಟಿ, ಡಾ. ಎಚ್.ಬಿ. ಹುಲಗಣ್ಣವರ, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರು, ತಾಲೂಕಾಧ್ಯಕ್ಷರು, ಪದಾಧಿಕಾರಿಗಳಾದ ರಾಜು ಸೋಪಡ್ಲ, ವಸಂತ ಮಡ್ಲೂರ, ರಾಜು ಕಂಠಿಗೊಣ್ಣವರ, ಶ್ರೀಧರ ಚಿನಗುಡಿ, ಮುತ್ತು ಮಾಳಶೆಟ್ಟಿ, ಡಿ.ಎಸ್. ತಳವಾರ, ಮಹಾಂತೇಶ ನಿಟ್ಟಾಲಿ, ಸಿದ್ದಪ್ಪ ಲಿಂಗಧಾಳ, ತಿಪ್ಪಣ್ಣ, ಬಾದನಟ್ಟಿ, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.