ಸಾರ್ವಜನಿಕರ ಕುಂದು-ಕೊರತೆಗಳಿಗೆ ತ್ವರಿತ ಹಾಗೂ ಗುಣಮಟ್ಟದ ಪರಿಹಾರ ಒದಗಿಸುವ ಉದ್ದೇಶದಿಂದ ಸೆ. 5ರಿಂದ ಜಿಲ್ಲೆಯ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಬೇಕು.

ಆಂದೋಲನದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆಕನ್ನಡಪ್ರಭ ವಾರ್ತೆ ಗದಗ

ಸಾರ್ವಜನಿಕರ ಕುಂದು-ಕೊರತೆಗಳಿಗೆ ತ್ವರಿತ ಹಾಗೂ ಗುಣಮಟ್ಟದ ಪರಿಹಾರ ಒದಗಿಸುವ ಉದ್ದೇಶದಿಂದ ಸೆ. 5ರಿಂದ ಜಿಲ್ಲೆಯ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಪ್ರಜಾಸೇವಾ ಆಂದೋಲನದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಗಳ ನೇರ ಪ್ರಸಾರ (ಲೈವ್ ಸ್ಟ್ರೀಮಿಂಗ್) ವ್ಯವಸ್ಥೆಯನ್ನು ಮುಖ್ಯಮಂತ್ರಿಗಳ ಕಚೇರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ನಿರ್ದೇಶಿಸಿದರು.

ಪ್ರತಿ ಶನಿವಾರ ಬೆಳಗ್ಗೆ 10ರಿಂದ ಸಂಜೆಯವರೆಗೆ ಈ ಸಭೆಗಳು ನಡೆಯಲಿವೆ. ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳ 1ನೇ ಮತ್ತು 3 ನೇ ಶನಿವಾರ ಹಾಗೂ ಸ್ಥಳೀಯ ಶಾಸಕರ ನೇತೃತ್ವದಲ್ಲಿ 2ನೇ ಮತ್ತು 4ನೇ ಶನಿವಾರ ಸಭೆಗಳು ಜರುಗಲಿವೆ. ಸಾರ್ವಜನಿಕರು ಸಭೆಗೆ ಬರುವ ಮುನ್ನವೇ ಅರ್ಜಿ ಭರ್ತಿ ಮಾಡಿಕೊಂಡು ಬರಲು ಅನುಕೂಲವಾಗುವಂತೆ ನಿಗದಿತ ನಮೂನೆಗಳನ್ನು ಮನೆ-ಮನೆಗೆ ತಲುಪಿಸಬೇಕು. ಸಾರ್ವಜನಿಕರು ಗ್ರಾಮ ಒನ್ ಕೇಂದ್ರ, ಸಹಾಯವಾಣಿ (1902) ಹಾಗೂ ipgrs.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಸಭೆಯ ಸ್ಥಳದಲ್ಲೂ ಗ್ರಾಮ ಒನ್ ಮಳಿಗೆ ಸ್ಥಾಪಿಸಲಾಗುವುದು. ಪಿಂಚಣಿ, ಪಹಣಿ, ವಸತಿ, ಪಡಿತರ ಚೀಟಿ, ಸಾರಿಗೆ, ರಸ್ತೆ, ಕುಡಿಯುವ ನೀರು, ಶಾಲೆ, ಅಂಗನವಾಡಿ ಅಭಿವೃದ್ಧಿ, ಪೊಲೀಸ್ ಸೇವೆ, ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದರು.

ಸ್ವೀಕೃತ ಅರ್ಜಿಗಳನ್ನು ಪ್ರತಿ ಬುಧವಾರ ಮೂರು ಹಂತಗಳಲ್ಲಿ ಪರಿಶೀಲಿಸಲಾಗುವುದು. ಬೆಳಗ್ಗೆ 9 ರಿಂದ 11ರವರೆಗೆ ತಾಲೂಕು ಮಟ್ಟದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಎಸಿ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ. 15 ದಿನಕ್ಕೊಮ್ಮೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಲಿದ್ದು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ ಎಂದರು.

ಸಭೆಯಲ್ಲಿ ಜಿಪಂ ಸಿಇಓ ಮುಕುಲ್ ಜೈನ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಡಿವೈಎಸ್ಪಿ ಮುರ್ತುಜಾ ಖಾದ್ರಿ ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಡಿಎಚ್ಓ ಡಾ. ಎಸ್.ಎಸ್. ನೀಲಗುಂದ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.ಅರ್ಜಿದಾರರಿಗೆ ಕೇವಲ ಕಾಟಾಚಾರದ ಉತ್ತರ ನೀಡಿ ಕಡತ ಮುಚ್ಚುವುದಲ್ಲ. ಸಾರ್ವಜನಿಕರ ಸಮಸ್ಯೆಗಳಿಗೆ ಕಾನೂನಾತ್ಮಕ ಹಾಗೂ ಗುಣಮಟ್ಟದ ಪರಿಹಾರ ನೀಡುವುದೇ ಆಡಳಿತದ ಆದ್ಯತೆಯಾಗಬೇಕು. ತಾಲೂಕು ಮಟ್ಟದಲ್ಲೇ ಇತ್ಯರ್ಥವಾಗುವ ದೂರುಗಳಿಗೆ ಮೇಲಧಿಕಾರಿಗಳ ನೆಪ ಹೇಳದೆ ಅಧಿಕಾರಿಗಳೇ ಸ್ಥಳದಲ್ಲೇ ಧೈರ್ಯವಾಗಿ ನಿರ್ಧಾರ ಕೈಗೊಂಡು ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದರು.