ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸ್ಥಳೀಯ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು.

ಶಿರಸಿ: ಬೂತ್ ಮಟ್ಟದಿಂದ ಕಾರ್ಯಕರ್ತರು ಸಂಘಟಿತರಾಗಿ ಪಕ್ಷ ಸಂಘಟಿಸಿದರೆ ಮಾತ್ರ ಕಾಂಗ್ರೆಸ್‌ ಪ್ರಬಲವಾಗಿ ಬೆಳೆಯಲು ಸಾಧ್ಯ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಮಯೂರ ಜಯಕುಮಾರ ತಿಳಿಸಿದರು.ಶುಕ್ರವಾರ ನಗರದ ಟಿಎಂಎಸ್ ಸಭಾಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಿಗೆ ಜವಾಬ್ದಾರಿಯನ್ನು ನೀಡಿ ಅವರಿಗೆ ಬೂತ್ ಮಟ್ಟದ ಬೂತ್ ಸಮಿತಿ, ಪಂಚಾಯಿತಿ ಮಟ್ಟದ ಘಟಕ ಸಮಿತಿ, ಬ್ಲಾಕ್ ಮಟ್ಟದ ಬ್ಲಾಕ್ ಸಮಿತಿ, ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಘಟನೆಯನ್ನು ಬಲಪಡಿಸಬೇಕು. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸ್ಥಳೀಯ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಪಕ್ಷದಲ್ಲಿ ನಿಷ್ಕ್ರಿಯವಾಗಿರುವವರನ್ನು ಜಾಗ್ರತೆಗೊಳಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್ ಮಾತನಾಡಿ, ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಸುಭದ್ರವಾಗಿದೆ. ಎಐಸಿಸಿ ಹಾಗೂ ಕೆಪಿಸಿಸಿಯ ಮಾರ್ಗದರ್ಶನದಲ್ಲಿ ಎಲ್ಲ ಕಾರ್ಯಗಳನ್ನು ಮಾಡುತ್ತಿದ್ದೇವೆ. ಉಸ್ತುವಾರಿಗಳು ಆದೇಶಿಸಿದಂತೆ ಸಂಘಟನೆಯನ್ನು ಕೆಳಸ್ತರದಿಂದ ಬಲಪಡಿಸುತ್ತೆವೆ ಎಂದರು.ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಜಿಲ್ಲೆಯು ವಿಭಿನ್ನ, ವಿಶಿಷ್ಟ ಸಂಸ್ಕೃತಿ ಹೊಂದಿರುವ ಜಿಲ್ಲೆಯಾಗಿದ್ದು, ಇಲ್ಲಿ ಎಲ್ಲರೂ ಪಕ್ಷದ ಸಂಘಟನೆಗೆ ಹೆಚ್ಚು ಮಹತ್ವ ನೀಡುತ್ತಾರೆ. ನನಗೆ ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡಿದ ತೃಪ್ತಿ ಇದೆ. ನಾನು ಶಾಸಕನಾದ ನಂತರ ನನ್ನ ಕ್ಷೇತ್ರದಲ್ಲಿ ಹೆಚ್ಚಿನ ಹಣವನ್ನು ತಂದು ಅಭಿವೃದ್ಧಿ ಮಾಡಿದ್ದೇನೆ ಎಂದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹ್ಮದ್, ಸಂಘಟನೆ ಬಲಪಡಿಸಲು ಸಲಹೆ- ಸೂಚನೆ ನೀಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಕುಮಟಾ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ನಿವೇದಿತ ಆಳ್ವಾ, ಮಾಜಿ ಶಾಸಕ ವಿ.ಎಸ್. ಪಾಟೀಲ್, ಹಿಂದುಳಿದ ವರ್ಗಗಳ ಎಐಸಿಸಿ ಸಂಯೋಜಕ ನಾಗರಾಜ ನಾರ್ವೇಕರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತ ಗಾಂವ್ಕರ್, ಮಾಜಿ ಶಾಸಕ ಕೆ.ಎಚ್. ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ, ವಿವಿಧ ಸೆಲ್ ಜಿಲ್ಲಾಧ್ಯಕ್ಷರು, ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಹಾಗೂ ಪಕ್ಷದ ಮುಖಂಡರು ಭಾಗವಹಿಸಿದ್ದರು. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ದೊಡ್ಮನಿ ನಿರೂಪಿಸಿ, ವಂದಿಸಿದರು.