ದಸರಾ ಕ್ರೀಡಾಕೂಟವನ್ನು ಅಚ್ಚುಕಟ್ಟು ಆಯೋಜಿಸಿ

| Published : Aug 10 2025, 01:30 AM IST

ಸಾರಾಂಶ

ಈ ಬಾರಿಯ ತಾಲೂಕು ಹಾಗೂ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ತಿಳಿಸಿದರು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಈ ಬಾರಿಯ ತಾಲೂಕು ಹಾಗೂ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಗಳನ್ನು ಅಚ್ಚುಕಟ್ಟಾಗಿ ಆಯೋಜಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ತಿಳಿಸಿದರು.

ನಗರದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ೨೦೨೫- ೨೬ನೇ ಸಾಲಿನ ದಸರಾ ಕ್ರೀಡಾಕೂಟ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಯೋಜನೆ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಾಡಹಬ್ಬ ದಸರಾ ಅಂಗವಾಗಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ದಸರಾ ಕ್ರೀಡಾಕೂಟ ಆಯೋಜಿಸಿ ವಿಭಾಗ ಹಾಗೂ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಜಿಲ್ಲೆಯ ಉದಯೋನ್ಮುಖ ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಕಳುಹಿಸಿಕೊಡಬೇಕಾಗಿದೆ. ಈ ನಿಟ್ಟಿನಲ್ಲಿ ಉತ್ತಮ ಕ್ರೀಡಾಳುಗಳನ್ನು ಗುರುತಿಸುವ ಸಲುವಾಗಿ ಕ್ರೀಡಾಕೂಟದ ಅಚ್ಚುಕಟ್ಟಾಗಿ ಆಯೋಜನೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕ್ರೀಡಾಕೂಟದಲ್ಲಿ ಒಟ್ಟು ೨೮ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ತಾಲೂಕು ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್‌ಬಾಲ್, ಖೋಖೋ, ಕಬಡ್ಡಿ, ಥ್ರೋಬಾಲ್ ಹಾಗೂ ಯೋಗಾಸನ ಮತ್ತು ಜಿಲ್ಲಾ ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಬ್ಯಾಸ್ಕೆಟ್ ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್ ಬಾಲ್, ಟೇಬಲ್ ಟೆನ್ನಿಸ್, ಯೋಗಾಸನ ಹಾಗೂ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಈ ಎಲ್ಲಾ ಕ್ರೀಡೆಗಳನ್ನು ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ನೋಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಕ್ರೀಡಾಕೂಟ ಆಯೋಜನೆಗೆ ಶಿಷ್ಠಾಚಾರ ಪ್ರಕಾರವೇ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಬೇಕು. ಗಣ್ಯರು, ಮುಖ್ಯ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಕ್ರೀಡಾಕೂಟಕ್ಕೆ ತೀರ್ಪುಗಾರರಾಗಿ ಕಾರ್ಯನಿರ್ವಹಿಸಲು ನುರಿತ ದೈಹಿಕ ಶಿಕ್ಷಕರನ್ನು ನಿಯೋಜಿಸಲು ಶಾಲಾ ಶಿಕ್ಷಣ ಇಲಾಖೆಯೊಂದಿಗೆ ಸಮನ್ವಯ ಸಾಧಿಸಬೇಕು. ಕ್ರೀಡಾಕೂಟದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯಾಗಬೇಕು. ತುರ್ತು ವೈದ್ಯಕೀಯ ಚಿಕಿತ್ಸಾ ಘಟಕಗಳನ್ನು ತೆರೆಯಬೇಕು. ಈ ಎಲ್ಲಾ ಕಾರ್ಯಗಳನ್ನು ಹಮ್ಮಿಕೊಳ್ಳಬೇಕು ಎಂದರು.

ಪ್ರತಿವರ್ಷದಂತೆ ಈ ಬಾರಿಯೂ ಸಹ ಹಾಕಿ ಮಾಂತ್ರಿಕ ಧ್ಯಾನ್ ಚಂದ್ ಅವರ ಜನ್ಮ ದಿನದ ಪ್ರಯುಕ್ತ ಆಗಸ್ಟ್ ೨೯ರಂದು ದೇಶಾದ್ಯಂತ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಚರಿಸಲಾಗುತ್ತದೆ. ಇದರ ಅಂಗವಾಗಿ ಜಿಲ್ಲೆಯಲ್ಲಿಯೂ ಮಹಿಳೆಯರಿಗೆ ಹಾಗೂ ಪುರುಷರಿಗೆ ೫ ಕಿ.ಮೀ. ಅಂತರದ ಮ್ಯಾರಾಥಾನ್ ಓಟ ಆಯೋಜನೆಯಾಗಬೇಕು. ವಿಜೇತರಾದವರಿಗೆ ನಗದು ಬಹುಮಾನ ನೀಡುವ ಕೆಲಸ ಆಗಬೇಕಿದೆ. ಈ ಸಂಬಂಧ ಸಿದ್ದತಾ ಕಾರ್ಯಗಳ ವ್ಯವಸ್ಥಿತ ನಿರ್ವಹಣೆಗೆ ಮುಂದಾಗುವಂತೆ ತಿಳಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸುರೇಶ್, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.