ಕನ್ನಡಪ್ರಭ ವಾರ್ತೆ ಮದ್ದೂರು
ಪ್ರತಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ ಮುಂದಿನ ಸ್ಥಳೀಯ ಸಂಘ-ಸಂಸ್ಥೆಗಳ ಚುನಾವಣೆಗಳಲ್ಲಿ ಅಭ್ಯರ್ಥಿಯ ಗೆಲುವಿಗೆ ಶಕ್ತಿಮೀರಿ ಶ್ರಮಿಸುವ ಮೂಲಕ ವರಿಷ್ಠರ ಕೈ ಬಲಪಡಿಸಬೇಕೆಂದು ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ತಿಳಿಸಿದರು.ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿ.ಎಲ್.ಎ-೨ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಮುಂದಿನ ದಿನಗಳಲ್ಲಿ ಗ್ರಾಪಂ, ತಾಪಂ ಹಾಗೂ ಜಿಪಂ ಚುನಾವಣೆಗಳು ಜರುಗಲಿದ್ದು, ಈಗಿನಿಂದಲೇ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಮೂಲಕ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಯೋಜನೆ ರೂಪಿಸುವಂತೆ ಕಾರ್ಯಕರ್ತರು ಹಾಗೂ ಮುಖಂಡರು ತಮ್ಮಲ್ಲಿರುವ ಭಿನ್ನಾಭಿಪ್ರಾಯವನ್ನು ಬದಿಗೊತ್ತಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುವಂತೆ ಹೇಳಿದರು.ಕೇಂದ್ರ ಸರ್ಕಾರ ಮತದಾರರ ಪಟ್ಟಿ ಪರಿಷ್ಕರಣೆ ಯೋಜನೆ ಜಾರಿಗೊಳಿಸಿದೆ. ಬೂತ್ ಮಟ್ಟದ ಕಾರ್ಯಕರ್ತರು ಸೇರ್ಪಡೆಗೊಳಿಸುವ ಜತೆಗೆ ಅನಧಿಕೃತ ಮತದಾರರನ್ನು ಪತ್ತೆ ಹಚ್ಚಿ ಸಂಬಂಧಿಸಿದವರಿಗೆ ಮಾಹಿತಿ ನೀಡಬೇಕು. ಕಾಂಗ್ರೆಸ್ ಪಕ್ಷವು ಮತದಾರರ ಪಟ್ಟಿ ಪರಿಷ್ಕರಣೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಪ್ರತಿಯೊಬ್ಬರೂ ಜಾಗೃತರಾಗಿ ಕಾರ್ಯ ನಿರ್ವಹಿಸುವಂತೆ ಸಲಹೆ ನೀಡಿದರು.
ಮಂಡ್ಯ ಜಿಲ್ಲೆಯಲ್ಲಿ ಸುಮಾರು ೯೨ ಸಾವಿರ ಮತದಾರರನ್ನು ಡಿಲೀಟ್ ಮಾಡಿದ್ದು, ತಾಲೂಕಿನಲ್ಲಿ ೧೦, ೫೮೭ ಮಂದಿ ಡಿಲೀಟ್ ಆಗಿದೆ. ಒಬ್ಬ ವ್ಯಕ್ತಿಗೆ ಒಂದೇ ಮತ ಎಂಬಂತೆ ಎರಡು ಬಾರಿ ನೋಂದಣಿಯಾಗಿರುವವರನ್ನು ತೆಗೆದುಹಾಕಲು ಈಗಾಗಲೇ ಚುನಾವಣೆ ಆಯೋಗ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಸ್ತುವಾರಿ ಅಶ್ವಿನಿ ಮಾತನಾಡಿ, ಮುಂದಿನ ೨೦೨೮ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಅದರಂತೆಯೇ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಶಾಸಕರಾಗಿ ಆಯ್ಕೆಯಾಗಲಿದ್ದು, ಕಾರ್ಯಕರ್ತರು, ಮುಖಂಡರು ಹೆಚ್ಚಿನ ಶಕ್ತಿ ತುಂಬಬೇಕೆಂದು ಮನವಿ ಮಾಡಿದರು.
ತಾಲೂಕಿನಾದ್ಯಂತ ೨೫೪ ಮಂದಿ ಬಿಎಲ್‌ಎಗಳಿದ್ದು ಸಮರ್ಪಕವಾಗಿ ಕಾರ್ಯ ನಿರ್ವಹಿಸಿದಾಗ ಪಕ್ಷವನ್ನು ಅಧಿಕಾರಕ್ಕೆ ತರಬಹುದಾಗಿದ್ದು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಜನರನ್ನು ವಂಚಿಸಿ ಪಂಚರ್ ಆಗಿದೆ ಎಂದು ದೂರಿದರು.ಈ ವೇಳೆ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಸಿ.ಕೆ.ಸತೀಶ್, ಯುವ ಮೋರ್ಚ ಜಿಲ್ಲಾಧ್ಯಕ್ಷ ಹಾಗಲಹಳ್ಳಿ ರಘು, ನಗರ ಘಟಕದ ಅಧ್ಯಕ್ಷ ಎನ್.ಜೆ.ಮಧುಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಸಿದ್ದು, ಮುಖಂಡರಾದ ಎಂ.ಸತೀಶ್, ಚಿಕ್ಕಅಂಕನಹಳ್ಳಿ ಮನುಕುಮಾರ್, ಯುವ ಮೋರ್ಚಾ ಉಪಾಧ್ಯಕ್ಷ ಎಸ್.ಕೆ.ಅಭಿಷೇಕ್‌ಗೌಡ ಇತರರಿದ್ದರು.