ಸಾರಾಂಶ
- ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷ ವಾಮದೇವಪ್ಪ - - - ಕನ್ನಡಪ್ರಭ ವಾರ್ತೆ ದಾವಣಗೆರೆ ಕನ್ನಡನಾಡು ಕಲೆ, ಸಾಹಿತ್ಯ, ಸಂಸ್ಕೃತಿಗಳ ತವರೂರಾಗಿದೆ. ಇಂತಹ ಪುಣ್ಯಭೂಮಿಯಲ್ಲಿ ಜನಿಸಿ ತಮ್ಮ ಬದುಕನ್ನು ಕಟ್ಟಿಕೊಂಡ ಕನ್ನಡಿಗರೇ ಭಾಗ್ಯಶಾಲಿಗಳು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಅಭಿಪ್ರಾಯಪಟ್ಟರು.
ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ವಿದ್ಯಾನಗರ ಲಯನ್ಸ್ ಕ್ಲಬ್, ಶರಧಿ ಕಲಾ ಸಾಂಸ್ಕೃತಿಕ ಸಂಸ್ಥೆಗಳು ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ 69ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಅವರು ಮಾತನಾಡಿದರು.ವಿಶ್ವದ ಯಾವುದೇ ಭಾಷೆಗೆ ಇರದ ಐತಿಹಾಸಿಕ ಪರಂಪರೆ, ಸಾಂಸ್ಕೃತಿಕ ಸೊಗಡು ಕನ್ನಡ ಭಾಷೆಗಿದೆ. ಸಾವಿರಾರು ವರ್ಷಗಳ ಭವ್ಯ ಪರಂಪರೆಯಿದೆ. ಇಂತಹ ಪವಿತ್ರವಾದ ಕನ್ನಡ ಭಾಷೆಯನ್ನು ಇನ್ನಷ್ಟು ವೈಭವೀಕರಿಸಿ ಕನ್ನಡ ಭಾಷೆ ಬಳಸುವಿಕೆಯನ್ನು ಹೆಚ್ಚಿಸುವುದು ನಮ್ಮ ಸಂಕಲ್ಪವಾಗಬೇಕು ಎಂದರು.
ವಿದ್ಯಾನಗರ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಎಲ್.ಎಸ್.ಪ್ರಭುದೇವ ಮಾತನಾಡಿ, ಕನ್ನಡವನ್ನೇ ಎಲ್ಲ ಕಡೆ ಬಳಸುವುದರ ಮೂಲಕ ಕನ್ನಡ ನುಡಿಯನ್ನು ಹೆಚ್ಚು ಪ್ರಚಲಿತಗೊಳಿಸಿ ನಮ್ಮತನ ಮೆರೆಯಬೇಕು ಎಂದರು.ಜಿಲ್ಲಾ ಕಸಾಪ ಗೌರವ ಕೋಶಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಮಾತನಾಡಿ, ಕರ್ನಾಟಕ ರಾಜ್ಯೋತ್ಸವವು ಪ್ರತಿಯೊಬ್ಬ ಕನ್ನಡಿಗನ ಮನೆಯಲ್ಲಿ ಆಚರಿಸಬೇಕು. ನಾಡು-ನುಡಿ, ನೆಲ-ಜಲ, ಕಲೆ-ಸಂಸ್ಕೃತಿಗಳ ರಕ್ಷಣೆ ಸರ್ವ ಕನ್ನಡಿಗರ ಹೊಣೆಗಾರಿಕೆಯಾಗಿದೆ ಎಂದರು.
ಕಸಾಪ ಗೌರವ ಕಾರ್ಯದರ್ಶಿ ಬಿ.ದಿಳ್ಯಪ್ಪ, ತಾಲೂಕು ಕಸಾಪ ಅಧ್ಯಕ್ಷೆ ಸುಮತಿ ಜಯಪ್ಪ, ಶಸಾಪ ಜಿಲ್ಲಾಧ್ಯಕ್ಷ ಕೆ.ಬಿ. ಪರಮೇಶ್ವರಪ್ಪ, ವಿದುಷಿ ಶೋಭಾ ರಂಗನಾಥ್, ಕವಿ ಪಿ.ಜಯರಾಮನ್, ಪಾಲಿಕೆ ಸದಸ್ಯೆ ಗೌರಮ್ಮ ಗಿರೀಶ್, ಬಾ.ಮ. ಬಸವರಾಜಯ್ಯ, ಕಲಾವಿದ ಮಹಾಲಿಂಗಪ್ಪ, ನಿವೃತ್ತ ಪ್ರಾಚಾರ್ಯ ಗುಡ್ಡಪ್ಪ, ಎಚ್.ಎನ್. ಶಿವಕುಮಾರ್, ಹೆಗ್ಗೆರೆ ರಂಗಪ್ಪ, ಎನ್.ಎಸ್. ರಾಜು, ವೀಣಾ ಕೃಷ್ಣಮೂರ್ತಿ, ಸತ್ಯಭಾಮ ಮಂಜುನಾಥ್, ಎಸ್.ಎಂ. ಮಲ್ಲಮ್ಮ, ಸುದರ್ಶನ್, ಸೌಮ್ಯ ಸತೀಶ್, ಎಲ್ಲ ಸಂಸ್ಥೆಗಳ ಪದಾಧಿಕಾರಿಗಳು ಹಾಗು ಶರಧಿ ಕಲಾ ಸಾಂಸ್ಕೃತಿಕ ಸಂಸ್ಥೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕವಿ ಕೆ.ಎಸ್.ನಿಸಾರ್ ಅಹಮದ್ ರಚಿತ "ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ " ಹಾಡನ್ನು ಕಲಾವಿದ ಹೆಗ್ಗೆರೆ ರಂಗಪ್ಪ ಪ್ರಸ್ತುತಪಡಿಸಿದರು. ಶರಧಿ ಕಲಾ ಸಾಂಸ್ಕೃತಿಕ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಗೂ ನಾಡಗೀತೆ ಪ್ರಸ್ತುತಪಡಿಸಿದರು.
ಭಾರತ ಸೇವಾದಳದ ಎ.ಆರ್. ಗೋಪಾಲಪ್ಪ, ಎಚ್.ಹನುಮಂತಪ್ಪ ಧ್ವಜ ನಿರ್ವಹಣೆ ಮಾಡಿದರು.- - - -1ಕೆಡಿವಿಜಿ35ಃ:
ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಶುಕ್ರವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.