ಸಾರಾಂಶ
ಕನ್ನಡಪ್ರಭ ವಾರ್ತೆ ಪುತ್ತೂರು
ಕಳೆದ ಹಲವು ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಕೆಲವರು ಜನರ ಭಾವನೆಯ ಮೇಲೆ ರಾಜಕಾರಣ ಮಾಡುತ್ತಾರೆ. ನಾವು ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಹಾಗಾಗಿ ಐದು ಗ್ಯಾರಂಟಿಗಳ ಮೂಲಕ ನಾವು ಜನರ ಪರವಾಗಿ ಕೆಲಸ ಮಾಡಿ ಹತ್ತಿರವಾಗಿದ್ದೇವೆ. ಕಾಂಗ್ರೆಸ್, ಬಿಜೆಪಿ, ದಳ ಎಂಬ ಬೇಧ ಮಾಡದೆ ಎಲ್ಲರಿಗೂ ಗ್ಯಾರಂಟಿ ಯೋಜನೆಯನ್ನು ನೀಡಲಾಗುತ್ತಿದೆ. ಇದು ಜನರ ಬದುಕಿಗಾಗಿ ರೂಪಿಸಿದ ಯೋಜನೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ, ಟ್ರಸ್ಟ್‌ನ ಪ್ರವರ್ತಕ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ಶನಿವಾರ ನಡೆದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕರಾವಳಿ ಪ್ರದೇಶಗಳಲ್ಲಿ ಹೆಚ್ಚಿನ ವಿವಿಧ ಕ್ಷೇತ್ರಗಳನ್ನೊಳಗೊಂಡಿದೆ. ರಾಜ್ಯದಲ್ಲಿ ೩೦೦ ಕಿ.ಮೀ. ಕರಾವಳಿ ಪ್ರದೇಶವಿದೆ. ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಪ್ರವಾಸೋದ್ಯಮ ಯೋಜನೆ ಮತ್ತು ಕರಾವಳಿ ಪ್ರದೇಶಕ್ಕೆ ಪ್ರತ್ಯೇಕ ಉದ್ಯೋಗ ನೀತಿ ಸೃಷ್ಟಿಸಿ ಯುವಕರಿಗೆ ಉದ್ಯೋಗ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಿದ್ದರು. ಮಾಯಿದೆ ದೇವುಸ್ ಚರ್ಚ್ ಪ್ರಧಾನ ಧರ್ಮಗುರು ಫಾ. ಲಾರೆನ್ಸ್ ಮಸ್ಕರೇನ್ಹಸ್, ರಾಜ್ಯ ದಾರಿಮೀಸ್ ಅಸೋಸಿಯೇಶನ್ ಅಧ್ಯಕ್ಷ ಎಸ್.ಬಿ. ದಾರಿಮಿ ಮಾತನಾಡಿದರು. ಆಕರ್ಷಗಳ ವಿನ್ಯಾಸದ ಗೂಡುದೀಪ ಸ್ಪರ್ಧೆಯು ನಡೆಯಿತು.ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಎಂ.ಎಸ್. ಮಹಮ್ಮದ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಕೃಷ್ಣಪ್ರಸಾದ್ ಆಳ್ವ, ಕಾವು ಹೇಮನಾಥ ಶೆಟ್ಟಿ, ಡಾ. ರಘು ಬೆಳ್ಳಿಪ್ಪಾಡಿ, ಕೃಷ್ಣಪ್ಪ ಸುಳ್ಯ, ಶಾಸಕರ ಪತ್ನಿ ಸುಮಾ ಆಶೋಕ್ ಕುಮಾರ್ ರೈ, ತಾಯಿ ಗಿರಿಜಾ ಎಸ್. ರೈ, ರೈ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ಪುಡಾ ಸದಸ್ಯ ನಿಹಾಲ್ ಶೆಟ್ಟಿ ಮತ್ತಿತರರಿದ್ದರು.
....................ಪುತ್ತೂರಿಗೆ ಮೆಡಿಕಲ್ ಕಾಲೇಜ್ ಕೊಡಿಸಲು ಒಕ್ಕೊರಲ ಒತ್ತಾಯ
ಪುತ್ತೂರಿಗೆ ಮೆಡಿಕಲ್ ಕಾಲೇಜು ಕೊಡಿಸಿ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಸಾವಿರಾರು ಮಂದಿ ಸಾರ್ವಜನಿಕರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆಗ್ರಹಿಸಿದರು.ಸಭೆಯ ನಡುವೆ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯ ವತಿಯಿಂದ ಹಿರಿಯರಾದ ಅಣ್ಣಾ ವಿನಯಚಂದ್ರ ಅವರ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಭೆಯಿಂದ ‘ವಿ ವಾಂಟ್ ಮೆಡಿಕಲ್ ಕಾಲೇಜ್’ ಘೋಷಣೆ ಮೊಳಗಿತು. ಸಭೆಯಲ್ಲಿದ್ದ ಎಲ್ಲರೂ ಎದ್ದು ನಿಂತು ಮೆಡಿಕಲ್ ಕಾಲೇಜು ಕೊಡಿಸಿ ಎಂದು ಘೋಷಣೆ ಹಾಕಿದರು.
ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆಶಿ ಅವರು ನಿಮ್ಮ ಬೇಡಿಕೆ ನನಗೆ ಅರ್ಥವಾಗಿದೆ. ಆದರೆ ಚುನಾವಣಾ ನೀತಿ ಸಂಹಿತೆ ಇರುವುದರಿಂದ ಈ ಬಗ್ಗೆ ಯಾವುದೇ ಭರವಸೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.