ಸಾರಾಂಶ
ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ ಇತರೆ ಅಭಿವೃದ್ಧಿ ಕಾರ್ಯಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡಲಾಗುತ್ತಿದ್ದು, ಹಣಕಾಸಿನ ಯಾವುದೇ ಕೊರತೆ ಇಲ್ಲ
ಕಾರವಾರ: ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ 6 ತಿಂಗಳ ಒಳಗೆ ಯಥಾವತ್ತಾಗಿ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆವ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
ಅವರು ಶನಿವಾರ ಹೊನ್ನಾವರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರ ತಂದ, ಉತ್ತರ ಕನ್ನಡ ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಯಶೋಗಾಥೆಗಳನ್ನು ಒಳಗೊಂಡ ಕಿರು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.ಸಾಮಾನ್ಯ ವರ್ಗದ ಜನರು ಸುರಕ್ಷಿತವಾಗಿ ಹಾಗೂ ಆರ್ಥಿಕವಾಗಿ ಸಬಲರಾಗಿ ನೆಮ್ಮದಿಯ ಜೀವನ ಸಾಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ಸರ್ಕಾರ ನುಡಿದಂತೆ ನಡೆದಿದೆ. ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ ಇತರೆ ಅಭಿವೃದ್ಧಿ ಕಾರ್ಯಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾಡಲಾಗುತ್ತಿದ್ದು, ಹಣಕಾಸಿನ ಯಾವುದೇ ಕೊರತೆ ಇಲ್ಲ ಎಂದರು.
ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದವರೂ ಕೂಡ ತಮ್ಮ ರಾಜ್ಯಗಳಲ್ಲಿ ಕೂಡಾ ಇದನ್ನು ಜಾರಿಗೊಳಿಸುತ್ತಿದ್ದಾರೆ ಎಂದ ಸಚಿವರು, ಈ ವರ್ಷದ ರಾಜ್ಯ ಬಜೆಟ್‌ನಲ್ಲಿ 56 ಸಾವಿರ ಕೋಟಿ ರು. ಅನುದಾನವನ್ನು ಐದು ಗ್ಯಾರಂಟಿ ಯೋಜನೆಗೆ ಮೀಸಲಿಡಲಾಗಿದೆ ಎಂದರು.ಹೊನ್ನಾವರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಣ್ಣಪ್ಪ ನಾಯಕ, ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್ ಮತ್ತಿತರರು ಇದ್ದರು.